ಭಾರತೀಯ ಪ್ರತಿಯೊಬ್ಬ ಪ್ರಜೆಗೂ ಸಂವಿಧಾನವೇ ‘ಪವಿತ್ರ ಗ್ರಂಥ’: ಶಾಮ್ ಪ್ರಸಾದ್

ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನವು ಪ್ರತಿಯೊಬ್ಬ ಭಾರತೀಯ ನಾಗರಿಕರಿಗೆ ‘ಪವಿತ್ರ ಗ್ರಂಥ’ವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಎಚ್.ಸಿ.ಶಾಮ್ ಪ್ರಸಾದ್ ಅವರು ಹೇಳಿದ್ದಾರೆ.

ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಇವರ ಸಹಕಾರದಲ್ಲಿ ವಿಶೇಷ ಘಟಕ ಯೋಜನೆಯಡಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಗುರುವಾರ ನಡೆದ ‘ಡಾ.ಬಿ.ಆರ್.ಅಂಬೇಡ್ಕರ್ ಅವರ ಓದು’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಭಾರತ ಸಂವಿಧಾನವು ವಿಶ್ವದಲ್ಲಿ ಶ್ರೇಷ್ಠ ಸಂವಿಧಾನವಾಗಿದ್ದು, ಮಾದರಿಯಾಗಿದೆ. ಸಂವಿಧಾನದ ಪ್ರಸ್ತಾವನೆಯಲ್ಲಿ ವಿವರಿಸಲಾಗಿರುವ ಅಂಶಗಳು ಸಾರ್ವಕಾಲಿಕ ದಾಖಲೆಯಾಗಿದೆ ಎಂದರು.

ಸಂವಿಧಾನ ಶಿಲ್ಪಿ ‘ಡಾ.ಬಿ.ಆರ್.ಅಂಬೇಡ್ಕರ್ ಅವರ ಓದು’ ವ್ಯಾಪ್ತಿ ಸಮುದ್ರದಷ್ಟು ವಿಶಾಲವಾದದ್ದು ಹಾಗೂ ಆಳವಾದದ್ದು, ಅಂಬೇಡ್ಕರ್ ಅವರ ಜ್ಞಾನ ಅದ್ಭುತ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ವಿವರಿಸಿದರು.

ಅಂಬೇಡ್ಕರ್ ಅವರು ಸಾಮಾಜಿಕ ಮತ್ತು ಆರ್ಥಿಕ ತಜ್ಞರಾಗಿ, ಪ್ರಬುದ್ಧ ರಾಜಕಾರಣಿಯಾಗಿ… ಹೀಗೆ ಹಲವು ವಿಚಾರಗಳ ಬಗ್ಗೆ ಅಧ್ಯಯನ ಮಾಡಬಹುದಾಗಿದೆ. ಅಂಬೇಡ್ಕರ್ ಅವರು ಬೆಳೆದು ಬಂದ ದಾರಿ, ಅವರು ಭಾರತೀಯ ಸಮಾಜಕ್ಕೆ ನೀಡಿದ ಕೊಡುಗೆ ಅಪಾರ ಎಂದು ವರ್ಣಿಸಿದರು.

ಡಾ.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಕಾನೂನು ವ್ಯಾಪ್ತಿಯಲ್ಲಿ ನಾವೆಲ್ಲರೂ ಒಳಗೊಂಡಿದ್ದೇವೆ. ಎಲ್ಲರಿಗೂ ಸಂವಿಧಾನ ಬದ್ಧವಾದ ಹಕ್ಕುಗಳನ್ನು ನೀಡಲು ಶ್ರಮಿಸಿದ್ದಾರೆ. ಆ ನಿಟ್ಟಿನಲ್ಲಿ ಮಹಾ ನಾಯಕ ಅಂಬೇಡ್ಕರ್ ಅವರನ್ನು ಸದಾ ಸ್ಮರಿಸಬೇಕಿದೆ ಎಂದರು.

ಅಂಬೇಡ್ಕರ್ ಅವರು ಒಬ್ಬ ವ್ಯಕ್ತಿಯಲ್ಲ, ಶಕ್ತಿ. ಅಸಮಾನತೆಯನ್ನು ಹೋಗಲಾಡಿಸಲು ಮೂಡಿ ಬಂದ ಅಲೆ ಎಂದರೆ ತಪ್ಪಾಗಲಾರದು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ನುಡಿದರು.

ಅಂಬೇಡ್ಕರ್ ಅವರ ಚಿಂತನೆ ಮತ್ತು ಸಿದ್ಧಾಂತಗಳನ್ನು ಪಾಲಿಸಿದರೆ ಮಾತ್ರ ಅವರನ್ನು ಗೌರವಿಸಿದಂತಾಗುತ್ತದೆ. ಇಡೀ ವಿಶ್ವದಲ್ಲಿ ಸಾಮ್ರಾಟ್ ಅಶೋಕನ ರಾಜ್ಯಭಾರವು ಮುಳುಗದ ಸಾಮ್ರಾಜ್ಯವಾಗಿತ್ತು. ಆದರೆ ಎಲ್ಲವೂ ನಶಿಸಿಹೋಗಿದ್ದು, ‘ಅಶೋಕ ಚಕ್ರ’ವನ್ನು ಮಾತ್ರ ಇಂದು ಕಾಣುತ್ತೇವೆ. ಆ ನಿಟ್ಟಿನಲ್ಲಿ ಪ್ರತಿಯೊಂದರಲ್ಲೂ ಸಹ ಅವನತಿ ಹೊಂದುತ್ತಾ ಹೋಗುತ್ತೇವೆ. ಆದ್ದರಿಂದ ಪ್ರತಿಯೊಬ್ಬರೂ ಒಳ್ಳೆಯದು ಮಾಡಿ ಹೋಗಬೇಕು. ಮನುಷ್ಯ ಮನಷ್ಯರನ್ನು ಗೌರವಿಸಬೇಕು ಎಂದು ಶಾಮ್ ಪ್ರಸಾದ್ ಅವರು ಪ್ರತಿಪಾದಿಸಿದರು.’

ವಕೀಲರ ಸಂಘದ ಅಧ್ಯಕ್ಷರಾದ ಎಂ.ಎ.ನಿರಂಜನ್ ಅವರು ಮಾತನಾಡಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಕಾನೂನು ಸಚಿವರಾಗಿ ಹಿಂದೂ ಕೋಡ್ ಬಿಲ್ ಜಾರಿಗೊಳಿಸುವ ಮೂಲಕ ಮಹಿಳೆಯರಿಗೆ ಸಮಾನ ಅವಕಾಶ ಮತ್ತು ಹಕ್ಕುಗಳನ್ನು ನೀಡಿದ್ದಾರೆ. ಇದರ ಪ್ರತಿಫಲವಾಗಿ ಪುರುಷ ಮತ್ತು ಮಹಿಳೆಯರು ಸಮಾನವಾಗಿ ಬದುಕಲು ಸಾಧ್ಯವಾಗಿದೆ ಎಂದು ವಿವರಿಸಿದರು.

ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ಹೇಗೆ ಕಾನೂನುಗಳನ್ನು ತರಬೇಕು ಎಂಬ ಬಗ್ಗೆ ಸಂವಿಧಾನದಲ್ಲಿ ಅಂಬೇಡ್ಕರ್ ಅವರು ವಿವರಿಸಿದ್ದಾರೆ. ಮೂಲಭೂತ ಹಕ್ಕು ಮತ್ತು ಕರ್ತವ್ಯಗಳು ಹಾಗೆಯೇ ರಾಜ್ಯ ನಿರ್ದೇಶಕ ತತ್ವಗಳು ಹೀಗೆ ಹಲವು ಅಂಶಗಳನ್ನು ವಿವರಿಸುವ ಮೂಲಕ ಭಾರತಕ್ಕೆ ಮಾದರಿಯಾದ ಸಂವಿಧಾನವನ್ನು ಡಾ.ಬಿ.ಆರ್.ಅಂಬೇಡ್ಕರ್ ಅವರು ನೀಡಿದ್ದಾರೆ ಎಂದರು.

ಮದೆನಾಡು ಮದೆ ಮಹೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಿದ್ದರಾಜು ಬೆಳ್ಳಯ್ಯ ಅವರು ಮಾತನಾಡಿ ಅಂಬೇಡ್ಕರ್ ಅವರು ಜ್ಞಾನ ಮತ್ತು ಸಾಮಾಜಿಕ ನ್ಯಾಯದ ಸಂಕೇತ ಎಂದು ಪ್ರತಿಪಾಧಿಸಿದರು.

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬದುಕಿನ 65 ವರ್ಷಗಳ ಅವಧಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಮಾಜಿಕ ನ್ಯಾಯ ಹಾಗೂ ಸಮಾನತೆ ಕಲ್ಪಿಸುವ ಮೂಲಕ ಅದ್ಭುತ ಸಾಧನೆ ಮಾಡಿದ್ದಾರೆ. ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬುದು ಅಂಬೇಡ್ಕರ್ ಅವರ ಧ್ಯೇಯೋದ್ದೇಶವಾಗಿದೆ ಎಂದರು.

64 ಪದವಿಗಳನ್ನು ಪಡೆಯುವ ಮೂಲಕ ವಿಶ್ವದ ಜ್ಞಾನಿಯಾಗಿದ್ದಾರೆ. ಸಮಾನತೆ, ಭ್ರಾತೃತ್ವ, ಸಹೋದರತೆಯನ್ನು ಅಂಬೇಡ್ಕರ್ ಅವರು ಎತ್ತಿ ಹಿಡಿದಿದ್ದಾರೆ ಎಂದರು.

ಭಾರತ ಸಂವಿಧಾನವನ್ನು 2 ವರ್ಷ 11 ತಿಂಗಳು 18 ದಿನಗಳ ಕಾಲ ತೆಗೆದುಕೊಂಡು 1949 ನವೆಂಬರ್, 26 ರಂದು ಸಂವಿಧಾನ ಸಭೆಯಲ್ಲಿ ಅಂಗೀಕರಿಸಿ, 1950 ರ ಜನವರಿ, 26 ರಂದು ಸಂವಿಧಾನ ಜಾರಿಗೆ ಬಂದಿದೆ ಎಂದು ವಿವರಿಸಿದರು.

ಭಾರತ ಸಂವಿಧಾನವು 1,17,369 ಪದಗಳು, 468 ವಿಧಿಗಳು ಮತ್ತು 12 ಅನುಸೂಚಿಗಳು ಹಾಗೂ 25 ಭಾಗಗಳನ್ನು ಒಳಗೊಂಡಿದೆ. ಇಂತಹ ಮಹಾ ಸಂವಿಧಾನವನ್ನು ರಚಿಸಿದ ಕೀರ್ತಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ ಎಂದು ವಿವರಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್ ಅವರು ಭಾರತ ಸಂವಿಧಾನದ ಪೀಠಿಕೆ ಓದಿದರು.

ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಜಯ್ ಅವರು ಮಾತನಾಡಿ ಪ್ರತಿಯೊಬ್ಬರೂ ಜೀವನದಲ್ಲಿ ಸಂದೇಶವಾಗಬೇಕು. ಅಂಬೇಡ್ಕರ್ ಅವರಂತೆ ಹೆಚ್ಚಿನ ಅಧ್ಯಯನ ಮಾಡಬೇಕು ಎಂದು ಹೇಳಿದರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ಇತರರು ಇದ್ದರು.

ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ಸ್ವಾಗತಿಸಿದರು, ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನೀಯರು ನಾಡಗೀತೆ ಹಾಡಿದರು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಆಡಳಿತ ಸಹಾಯಕರಾದ ಜಯಪ್ಪ ನಿರೂಪಿಸಿ, ವಂದಿಸಿದರು.

Latest Indian news

Popular Stories