Raichur

ರಾಯಚೂರು ಜಿಲ್ಲೆಯಲ್ಲಿ ಮತ್ತೆ ಲಾಕ್ ಡೌನ್ – ಡಿಸಿಎಂ ಸವದಿ

ರಾಯಚೂರು, (ಕ.ವಾ):- ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋವಿಡ್ ಪಾಸಿಟಿವ್ ಪ್ರಕರಣಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲೆಯನ್ನು ಮತ್ತೆ ಸಂಪೂರ್ಣವಾಗಿ ಲಾಕ್ ಡೌನ್ ಮಾಡುವ ಸಾಧ್ಯತೆಗಳಿವೆ ಎಂದು ರಾಜ್ಯದ ಉಪ ಮುಖ್ಯಮಂತ್ರಿಗಳು, ಸಾರಿಗೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಣ ಸವದಿ ಅವರು ತಿಳಿಸಿದರು.

ಜಿಲ್ಲಾ ಪ್ರವಾಸದಲ್ಲಿರುವ ಅವರು ಮೇ. ೧೮ರ ಮಂಗಳವಾರ ನಗರದ ಕೃಷಿ ವಿಶ್ವವಿದ್ಯಾಲಯದಲ್ಲಿ ರಚಿಸಲಾಗಿರುವ ಕೋವಿಡ್ ಆರೈಕೆ ಹಾಗೂ ಪ್ರತ್ಯೇಕ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಿನ್ನೆ ಮುಖ್ಯಮಂತ್ರಿಗಳು ವಿಡಿಯೋ ಸಂವಾದ ಮೂಲಕ ಕೋವಿಡ್ ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ನಿರ್ದೇಶನ ನೀಡಿದ್ದಾರೆ, ಮೇ.೧೮ರಂದು ದೇಶದ ಪ್ರಧಾನ ಮಂತ್ರಿಗಳು ರಾಯಚೂರು ಜಿಲ್ಲೆಯ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ಮಾಡಲು ಆಯ್ಕೆ ಮಾಡಿಕೊಂಡಿದ್ದಾರೆ, ಪ್ರಧಾನ ಮಂತ್ರಿಯವರ ಸಲಹೆ ಮತ್ತು ಮುಖ್ಯಮಂತ್ರಿಗಳ ನಿರ್ದೇಶನದಂತೆ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳನ್ನು ಅನುಸರಿಸಲಾಗುವುದು ಎಂದು ತಿಳಿಸಿದರು.

ರಾಯಚೂರು ಜಿಲ್ಲೆಯ ಕೊರೋನಾ ಸಂಪರ್ಕ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಕೋವಿಡ್ ಕೇರ್ ಸೆಂಟರ್‌ಗಳ ಆರಂಭ ಮಾಡಲಾಗಿದ್ದು, ಹೆಚ್ಚಿನ ಕೋವಿಡ್ ಪಾಸಿಟಿವ್ ರೋಗಿಗಳು ಕೋವಿಡ್ ಕೇರ್ ಸೆಂಟರ್‌ಗಳಿಗೆ ಬರುತ್ತಿಲ್ಲ. ಕೋವಿಡ್ ಕೇರ್ ಸೆಂಟರ್‌ಗಳಿಗೆ ದಾಖಲಾಗುವಂತೆ ಮನವಿ ಮಾಡಲಾಗುತ್ತಿದೆ, ಒಂದು ವೇಳೆ ಅದಕ್ಕೆ ಒಪ್ಪದಿದ್ದಲ್ಲೀ ಪೊಲೀಸ್ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಸಹಕಾರದಲ್ಲಿ ಅವರನ್ನು ಮನೆಯಿಂದ ಕರೆತರುವ ವ್ಯವಸ್ಥೆ ಮಾಡಲಾಗುವುದು ಎಂದರು.
ಸಂಸದರಾದ ರಾಜಾ ಅಮರೇಶ್ವರ ನಾಯಕ್, ಸಿಂಧನೂರು ಕ್ಷೇತ್ರದ ಶಾಸಕ ವೆಂಕಟರಾವ್ ನಾಡಗೌಡ, ದೇವದುರ್ಗದ ಶಾಸಕರಾದ ಕೆ. ಶಿವನಗೌಡ ನಾಯಕ, ರಾಯಚೂರು ನಗರ ಕ್ಷೇತ್ರದ ಶಾಸಕ ಡಾ. ಶಿವರಾಜ್ ಪಾಟೀಲ್, ಜಿಲ್ಲಾ ಕೈಗಾರಿಕಾ ಹಾಗೂ ವಾಣ ಜ್ಯೋದ್ಯಮ ಸಂಘದ ಅಧ್ಯಕ್ಷ ತ್ರಿವಿಕ್ರಮ ಜೋಷಿ, ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸೀಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಕ್ಕಂ, ಅಪರ ಜಿಲ್ಲಾಧಿಕಾರಿ ಕೆ.ಆರ್. ದುರುಗೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಇತರರು ಹಾಜರಿದ್ದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button