
ಬೊಮ್ಮಾಯಿ ಸಚಿವ ಸಂಪುಟದಲ್ಲಿ 20 ಸಚಿವರು ?
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟವನ್ನು ಸೇರಬಹುದಾದ 6 ಮಂದಿ ಸಚಿವರ ಬಗ್ಗೆ ಚರ್ಚೆ ಈಗಾಗಲೇ ಪೂರ್ಣಗೊಂಡಿದೆ. ಇದಲ್ಲದೆ, ಹೈಕಮಾಂಡ್ ತಾನಾಗೇ 7 ಮಂದಿಯ ಹೆಸರನ್ನು ಪ್ರಸ್ತಾಪ ಮಾಡಿದೆ ಎಂದು ಹೇಳಲಾಗುತ್ತಿದ್ದು, ಒಟ್ಟಾರೆ ಹೊಸ ಸಂಪುಟದಲ್ಲಿ 20 ಮಂದಿ ಸಚಿವರು ಇರುವ ಸಾಧ್ಯತೆಗಳಿವೆ.
ಬಿಜೆಪಿ ಮೂಲಗಳ ಪ್ರಕಾರ ಆಗಸ್ಟ್ 4 ರಂದು ನೂತನ ಸಚಿವ ಸಂಪುಟ ರಚನೆಯಾಗುವ ಸಾಧ್ಯತೆ ಹೆಚ್ಚಾಗಿದೆ.ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ಅವರು ರಾಜೀನಾಮೆ ನೀಡಿದ ಬಳಿಕ ಬಸವರಾಜ ಬೊಮ್ಮಾಯಿಯವರು ಬುಧವಾರವಷ್ಟೇ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು.
ರಾಜ್ಯದಲ್ಲಿನ ಕೋವಿಡ್ ಪರಿಸ್ಥಿತಿ ಹಾಗೂ ಪ್ರವಾಹ ಪರಿಸ್ಥಿತಿಯನ್ನು ಏಕಾಂಗಿಯಾಗಿ ನಿರ್ವಹಣೆ ಮಾಡುತ್ತಿದ್ದಾರೆ. ಶುಕ್ರವಾರವಷ್ಟೇ ದೆಹಲಿಗೆ ಭೇಟಿ ನೀಡಿದ್ದ ಬೊಮ್ಮಾಯಿಯವರು, ವರಿಷ್ಠರನ್ನು ಭೇಟಿ ಮಾಡಿ ಶನಿವಾರ ರಾಜ್ಯಕ್ಕೆ ಆಗಮಿಸಿದ್ದಾರೆ.
ದೆಹಲಿ ಭೇಟಿಗೂ ಮುನ್ನ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಿ, ಪರಿಸ್ಥಿತಿ ಪರಿಶೀಲನೆ ನಡೆಸಿದ್ದರು. ದೆಹಲಿಯಿಂದ ವಾಪಸ್ಸಾಗುತ್ತಿದ್ದಂತೆಯೇ ರಾಜ್ಯದ ಕೋವಿಡ್ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿಯವರು, ಸಂಪುಟ ರಚನೆ ಕುರಿತು ಸೋಮವಾರ ಹೈಕಮಾಂಡ್ ನಿಂದ ದೂರವಾಣೆ ಕರೆ ಬರಲಿದೆ. ನಂತರ ದೆಹಲಿಗೆ ತೆರಳಲಿದ್ದೇನೆ. ಸಚಿವ ಸ್ಥಾನಕ್ಕೆ ಸಾಕಷ್ಟು ಆಕಾಂಕ್ಷಿಗಳಿದ್ದಾರೆ. ಆದರೆ, ಯಾರೂ ಲಾಬಿ ನಡೆಸುತ್ತಿಲ್ಲ. ಬಿಜೆಪಿ ರಾಷ್ಟ್ರೀಯ ಪಕ್ಷವಾಗಿದ್ದು, ಉನ್ನತ ನಾಯಕರು ನಿರ್ಧಾರಗಳನ್ನು ಕೈಗೊಳ್ಳುತ್ತಾರೆ. ನನ್ನ ಬಳಿ ಈವರೆಗೂ ಯಾವುದೇ ಪಟ್ಟಿಯೂ ಇಲ್ಲ ಎಂದು ಹೇಳಿದ್ದರು.




