Climate and environmentBREAKING NEWSFeatured Story

ಚಂಡಮಾರುತದ ಪರಿಣಾಮ; ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ ವಾರದವರೆಗೆ ಮಳೆ

ಬೆಂಗಳೂರು, ನವೆಂಬರ್ 29: ಶ್ರೀಲಂಕಾಗೆ ಅಪ್ಪಳಿಸಿರುವ ದಿತ್ವಾ ಚಂಡಮಾರುತ (Ditwah Cyclone) ಭಾರತದತ್ತ ಮುಖ ಮಾಡಿದೆ. ಹೀಗಾಗಿ, ಭಾರತದ ಕರಾವಳಿ ಜಿಲ್ಲೆಗಳಲ್ಲಿ ಕೆಲವೆಡೆ ಹಳದಿ ಅಲರ್ಟ್, ಇನ್ನು ಕೆಲವೆಡೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಚಂಡಮಾರುತದ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಮುಂದಿನ 2 ದಿನ ಚಳಿ ಹಾಗೂ ಮೋಡ ಕವಿದ ವಾತಾವರಣ ಇರಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ದಿತ್ವಾ ಸೈಕ್ಲೋನ್ ಪರಿಣಾಮದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ನವೆಂಬರ್ 30ರಿಂದ ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಚಳಿ ಹೆಚ್ಚಾಗುವ ಸಾಧ್ಯತೆಯಿದೆ. ಮುಂದಿನ 7 ದಿನಗಳವರೆಗೆ ಇದೇ ಹವಾಮಾನ ಮುಂದುವರೆಯುವ ಸಾಧ್ಯತೆಯಿದೆ.

ಕರ್ನಾಟಕದ ಉತ್ತರ ಒಳನಾಡಿನ ರಾಜ್ಯಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ವಿಪರೀತ ಮಂಜು ಬೀಳುವ ಸಾಧ್ಯತೆ ಇದೆ. ನಾಳೆ (ನ.30) ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಹಾಸನ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಕೊಡಗು ಸೇರಿ 12 ಜಿಲ್ಲೆಗಳಿಗೆ ಹಳದಿ ಅಲರ್ಟ್‌ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಒಣ ಹವೆ ಉಂಟಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ಮೈಸೂರು, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಉಂಟಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

Back to top button