
ಗಡಿಪಾರು ಆದೇಶ ಉಲ್ಲಂಘನೆ- ರೌಡಿ ಶೀಟರ್ ಗೆ ನ್ಯಾಯಾಂಗ ಬಂಧನ
ಕಾರವಾರ: ಗಡಿಪಾರು ಆದೇಶವನ್ನು ಉಲ್ಲಂಘಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ ನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯ ಬದನಗೋಡ ಗ್ರಾಮದ ನಿವಾಸಿ ಸ್ವಾಮೇಲ್ ಯಾನೆ ಸುನೀಲ್ ಸಿ. ಭೋವಿವಡ್ಡರ (24) ಬಂಧಿತ ಆರೋಪಿ. ಈತನ ವಿರುದ್ಧ ಬನವಾಸಿ ಪೊಲೀಸ್ ಠಾಣೆಯಲ್ಲಿ 2024 ಮತ್ತು 2025ನೇ ಸಾಲಿನಲ್ಲಿ ಒಟ್ಟು 6 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವು. ಈತನ ಚಟುವಟಿಕೆಗಳ ಮೇಲೆ ಪೊಲೀಸರು ನಿಗಾ ಇಟ್ಟು ರೌಡಿ ಪಟ್ಟಿಯಲ್ಲಿ ಸೇರಿಸಿದ್ದರು. ಸುನೀಲ್ ರೌಡಿ ಚಟುವಟಿಕೆಗಳನ್ನು ಮುಂದುವರಿಸಿದ್ದ. ಈ ಕಾರಣ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ದೀಪನ್ ಅವರು ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 55(ಎ) ಮತ್ತು (ಬಿ) ಅಡಿ ಗಡಿಪಾರು ವರದಿ ಸಲ್ಲಿಸಿದ್ದರು.
ವರದಿ ಆಧರಿಸಿ, ಶಿರಸಿ ಉಪವಿಭಾಗಾಧಿಕಾರಿ ಹಾಗೂ ಉಪವಿಭಾಗೀಯ ದಂಡಾಧಿಕಾರಿಗಳು 2026ರ ಮಾರ್ಚ್ 16 ರಂದು ಗಡಿಪಾರು ಆದೇಶ ಹೊರಡಿಸಿದ್ದರು. ಆದೇಶದಂತೆ ಆರೋಪಿಯನ್ನು ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಲಾಗಿತ್ತು . 17 ಮಾರ್ಚ 2026 ರಂದು ಯಾದಗಿರಿ ನಗರ ಪೊಲೀಸ್ ಠಾಣೆಯ ಮುಂದೆ ಸುನೀಲ್ ಬೋವಿ ವಡ್ಡರನನ್ನು ಹಾಜರುಪಡಿಸಲಾಗಿತ್ತು. ಆದರೆ ನಂತರದ ದಿನಗಳಲ್ಲಿ ಯಾದಗಿರಿ ಠಾಣೆಗೆ ಹಾಜರಾಗದೆ, ಗೈರಾಗಿದ್ದ. ಈಗ ಗಡಿಪಾರು ಆದೇಶ ಉಲ್ಲಂಘನೆ ಮಾಡಿದ ಆರೋಪದಡಿ ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.
ಆರೋಪಿಯ ಪತ್ತೆಗಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಶಿರಸಿ ಡಿವೈಎಸ್ಪಿ ಗೀತಾ ಪಾಟೀಲ್ ಹಾಗೂ ಶಿರಸಿ ವೃತ್ತ ನಿರೀಕ್ಷಕ ಸಂಪತ್ ಈ.ಸಿ. ಅವರ ಮಾರ್ಗದರ್ಶನದಲ್ಲಿ ಎರಡು ತಂಡಗಳನ್ನು ರಚಿಸಲಾಗಿತ್ತು.
ಪತ್ತೆ ಕಾರ್ಯಾಚರಣೆ ವೇಳೆ ಜೂನ್ 23 ರಂದು ದಾಸನಕೊಪ್ಪ ಕೆ.ಇ.ಬಿ. ಗ್ರಿಡ್ ಬಳಿ ಆರೋಪಿ ಇರುವ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ ಸ್ವಾಮೇಲ್ ಯಾನೇ ಸುನೀಲ್ ಚಂದ್ರಪ್ಪ ಭೋವಿವಡ್ಡರನನ್ನು ಬಂಧಿಸಿದ್ದಾರೆ. ಬಳಿಕ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.




