
ಕರ್ನಾಟಕ ಬಂದ್ ಗೆ ಮುಖ್ಯಮಂತ್ರಿ ಯಡಿಯೂರಪ್ಪ ಆಕ್ರೋಶ
ಬೆಂಗಳೂರು, ನ.18(ಯುಎನ್ಐ):- ಮರಾಠ ಪ್ರಾಧಿಕಾರ ರಚನೆಗೆ ಸರ್ಕಾರದ ಆದೇಶ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದು, ಬಲವಂತದಿಂದ ಬಂದ್ ಮಾಡಿದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಮಹಾಜನ್ ತೀರ್ಪು ಅಂತಿಮ ಎಂಬುದು ಇಡೀ ಜಗತ್ತಿಗೆ ಗೊತ್ತಿದೆ, ಮರಾಠಿಗರು ಸಹ ನಮ್ಮ ರಾಜ್ಯದ ಕನ್ನಡಿಗರೇ. ಇದು ಮರಾಠಾ ಅಭಿವೃದ್ಧಿಗಾಗಿ ಮಾಡಿರುವ ಪ್ರಾಧಿಕಾರ. ಮರಾಠಿಗರು ಕೂಡ ಕಟ್ಟಾ ಹಿಂದುತ್ವ ವಾದಿಗಳು. ಬೆಳಗಾವಿಯ ವಿಶ್ವಸಮ್ಮೇಳನದಲ್ಲೂ ಅವರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಡಿ.5 ರಂದು ಬಂದ್ ಮಾಡುವ ಅಗತ್ಯವೇನಿಲ್ಲ. ಬಂದ್ ಗೆ ಕರೆ ನೀಡಿ, ಜನರಲ್ಲಿ ವಿನಾಕಾರಣ ಗೊಂದಲ ಸೃಷ್ಟಿಸುವ ಕೆಲಸ ಮಾಡಬಾರದು ಎಂದು ಹೇಳಿದರು.
ಸರ್ಕಾರ ಮರಾಠಾ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆ ಮಾಡುತ್ತಿದೆಯೇ ವಿನಃ ಬೇರೆ ಯಾವುದೋ ಕಾರಣಕ್ಕಾಗಿ ಅಲ್ಲ. ಬಲವಂತದಿಂದ ಬಂದ್ ನಡೆಸಿದರೆ ಕಟ್ಟುನಿಟ್ಟಿನ ಕ್ರಮ ಎದುರಿಸಬೇಕಾಗುತ್ತದೆ. ಇದಕ್ಕೆ ಅವಕಾಶ ಮಾಡಿಕೊಡಬಾರದು ಎಂದು ಯಡಿಯೂರಪ್ಪ ಮನವಿ ಮಾಡಿದ್ದಾರೆ.




