
ಪರಿಸರ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ನ್ಯಾಯಾಧೀಶ ಎಸ್.ಎ.ನಲವಡೆ
ವಿಜಯಪುರ: ಪರಿಸರ ರಕ್ಷಣೆ ಸಮಾಜದ ಪ್ರತಿಯೊಬ್ಬ ನಾಗರೀಕರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಪ್ರಧಾನ ಜಿಲ್ಲಾ ಮತ್ರು ಸತ್ರ ನ್ಯಾಯಾಧೀಶರಾದ ಎಸ್.ಎ.ನಲವಡೆ ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಅರಣ್ಯ ಇಲಾಖೆ ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ಸೋಮವಾರ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದದಲ್ಲಿ ಹಮ್ಮಿಕೊಂಡ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಗಿಡ ನೆಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಸಮಾಜದಲ್ಲಿ ಪ್ರತಿಯೊಬ್ಬರುವ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಭವಿಷ್ಯದ ಪೀಳಿಗೆಗೆ ಉತ್ತಮ ಪರಿಸರವನ್ನು ಕೊಡುಗೆಯಾಗಿ ನೀಡುವ ಮೂಲಕ ತಮ್ಮ ಜವಾಬ್ದಾರಿಯನ್ನು ಪ್ರತಿಯೊಬ್ಬರು ಅರಿತುಕೊಂಡು ಪರಿಸರ ರಕ್ಷಣೆಗೆ ಮುಂದಾಗಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ನ್ಯಾಯಾಲಯದ ಆವರಣದಲ್ಲಿ ಕಳೆದ ವರ್ಷ ನೆಟ್ಟ ಸಸಿಗಳಿಗೆ ಬೇಸಿಗೆ ಸಮಯದಲ್ಲಿ ನೀರುಣಿಸಿ ಆರೈಕೆ ಮಾಡಿದ ನೆಡುತೋಪು ಕಾವಲುಗಾರ ಲಕ್ಷ್ಮಣ ಕುಂಬಾರರಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಾಧೀಶ ಸಂತೊಷ ಎಸ್.ಕುಂದರ್, ಅರಣ್ಯ ಅಧಿಕಾರಿಗಳಾದ ಪ್ರಶಾಂತ ಪಿ.ಕೆ.ಎಂ., ಭಾಗ್ಯವಂತ ಮಸೂದಿ, ಸಂತೋಷಕುಮಾರ ಆಜೂರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಈರಣ್ಣ ಚಾಗಶೆಟ್ಟಿ, ಸೇರಿದಂತೆ ಅರಣ್ಯ ಇಲಾಖೆ-ನ್ಯಾಯಾಲಯದ ಸಿಬ್ಬಂದಿಗಳು, ವಕೀಲರು ಇತರರು ಉಪಸ್ಥಿತರಿದ್ದರು.




