
ಗೋ ಕಳ್ಳತನ, ಅಕ್ರಮ ಗೋ ಸಾಗಾಟ ಮಾಡುವ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಪೊಲೀಸ್ ವರಿಷ್ಠಾಧಿಕರಿಗಳಿಗೆ ಶಾಸಕ ಯಶ್’ಪಾಲ್ ಸುವರ್ಣ ಆಗ್ರಹ
ಉಡುಪಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಗೋ ಕಳ್ಳತನ ಹಾಗೂ ಅಮಾನುಷವಾಗಿ ಅಕ್ರಮ ಗೋ ಸಾಗಾಟದ ಬಗ್ಗೆ ಸಾರ್ವಜನಿಕರಲ್ಲಿ ವ್ಯಾಪಕ ದೂರು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಪತ್ರ ಬರೆದು ಆಗ್ರಹಿಸಿದ್ದಾರೆ.
ರಾಜ್ಯ ಸರಕಾರ ಗೋ ಹತ್ಯೆ ನಿಷೇಧ ಕಾನೂನು ಹಿಂಪಡೆಯುವ ಬಗ್ಗೆ ಚರ್ಚೆ ಆರಂಭವಾದ ದಿನದಿಂದ ಇಂತಹ ಘಟನೆಗಳು ಹೆಚ್ಚಾಗಿರುವ ಬಗ್ಗೆ ಗ್ರಾಮೀಣ ಭಾಗದ ರೈತಾಪಿ ವರ್ಗ ಹಾಗೂ ಹೈನುಗಾರಿಕೆಯನ್ನು ಅವಲಂಬಿಸಿರುವ ಬಡ ಕೃಷಿಕರು ಚಿಂತೆಗೀಡಾಗಿದ್ದು ತಮ್ಮ ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ.
ಪೋಲಿಸ್ ಇಲಾಖೆ ಇಂತಹ ಪ್ರಕರಣಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ತುರ್ತು ನೆಲೆಯಲ್ಲಿ ಗೋವುಗಳ ಕಳ್ಳತನ ಹಾಗೂ ಅಕ್ರಮ ಗೋ ಸಾಗಾಟವನ್ನು ತಡೆಯಲು ಪೊಲೀಸ್ ಇಲಾಖೆ ಇಂತಹ ಸೂಕ್ಷ್ಮ ಪ್ರದೇಶದಲ್ಲಿ ರಾತ್ರಿ ಗಸ್ತು ವ್ಯವಸ್ಥೆ, ಚೆಕ್ ಪೋಸ್ಟ್ ಮೂಲಕ ವಾಹನ ತಪಾಸಣೆ ಹಾಗೂ ಇಂತಹ ಚಟವಟಿಕೆಗಳಲ್ಲಿ ಗುರುತಿಸಿಕೊಂಡಿರುವ ಸಂಭಾವ್ಯ ವ್ಯಕ್ತಿಗಳ ಮೇಲೆ ನಿಗಾ ವಹಿಸುವಂತೆ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಿಗೆ ನಿರ್ದೇಶನ ನೀಡುವಂತೆ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರದಲ್ಲಿ ತಿಳಿಸಿದ್ದಾರೆ.
ಕೊಕ್ಕರ್ಣೆ, ಪೇತ್ರಿ ಪಶು ಚಿಕಿತ್ಸಾ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಲು ಸರಕಾರಕ್ಕೆ ಪ್ರಸ್ತಾವನೆ : ಯಶ್ ಪಾಲ್ ಸುವರ್ಣ
ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಶು ವೈದ್ಯಾಧಿಕಾರಿಗಳೊಂದಗೆ ಸಭೆ ನಡೆಸಿದ ಉಡುಪಿ ಶಾಸಕರಾದ ಶ್ರೀ ಯಶ್ಪಾಲ್ ಸುವರ್ಣ ರವರು ಹೈನುಗಾರಿಕೆಯನ್ನು ನಂಬಿಕೊಂಡಿರುವ ಗ್ರಾಮೀಣ ಭಾಗದ ರೈತರಿಗೆ ಉತ್ತಮ ಸೇವೆ ನೀಡುವ ಮೂಲಕ ಹೈನುಗಾರಿಕೆ ಬೆಳವಣಿಗೆಗೆ ಸಹಕರಿಸುವಂತೆ ವೈದ್ಯಾಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಪಶುಸಂಗೋಪನೆ ಇಲಾಖೆಯ ವಿವಿಧ ವೈಯಕ್ತಿಕ ಫಲಾನುಭವಿ ಯೋಜನೆಗಳು, ಲಸಿಕೆ, ಜಾನುವಾರುಗಳ ರೋಗಗಳು, ಔಷಧಗಳ ಪೂರೈಕೆ, ಜಾನುವಾರು ಅಂಬ್ಯುಲೆನ್ಸ್ ಸೇವೆ ಪ್ರಾರಂಭ, ಬೀದಿ ನಾಯಿಗಳ ಕಾಟ ಸಹಿತ ವಿವಿಧ ಸಮಸ್ಯೆ ಮತ್ತು ಬೇಡಿಕೆಗಳ ಬಗ್ಗೆ ಹಾಗೂ ವಿಶೇಷವಾಗಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ವಿಸ್ತೃತವಾಗಿ ಚರ್ಚಿಸಲಾಯಿತು.
ಕೊಕ್ಕರ್ಣೆ ಮತ್ತು ಪೇತ್ರಿ ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರದ ವ್ಯಾಪ್ತಿಯು ಭೌಗೋಳಿಕವಾಗಿ ವಿಸ್ತಾರವಾಗಿದ್ದು, ಸುಮಾರು 12,000 ಕ್ಕೂ ಹೆಚ್ಚು ಜಾನುವಾರುಗಳನ್ನು ಹೊಂದಿದ್ದು, ಪಶು ಚಿಕಿತ್ಸಾಲಯವಾಗಿ ಮೇಲ್ದರ್ಜೆಗೆ ಏರಿಸುವ ಮೂಲಕ ಸ್ಥಳೀಯ ರೈತರಿಗೆ ಮತ್ತು ಸಮೀಪದ ನೀಲಾವರ ಗೋಶಾಲೆಗೆ ಅಗತ್ಯ ಸೇವೆ ನೀಡಲು ಸಾಧ್ಯವಾಗಲಿದ್ದು ಮತ್ತು ಈ ಬಗ್ಗೆ ತುರ್ತಾಗಿ ಪ್ರಸ್ತಾವನೆ ಸಲ್ಲಿಸಲು ಶಾಸಕರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಪಶು ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.




