
ಉಡುಪಿಯಲ್ಲಿ ಮುಂದುವರಿದ ಭಾರೀ ಮಳೆ – ತಗ್ಗು ಪ್ರದೇಶಕ್ಕೆ ನುಗ್ಗಿದ ನೀರು
ಉಡುಪಿ: ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದೆ. ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಕೆಲವೊಂದು ಮನೆಗಳಿಗೂ ನೀರು ನುಗ್ಗಿದೆ. ಇನ್ನು ಕೆಲವು ಗ್ರಾಮಗಳು ನೆರೆಗೆ ತುತ್ತಾಗಿದೆ.
ಮಳೆಯೊಂದಿಗೆ ರಭಸವಾದ ಗಾಳಿ ಬೀಸುತ್ತಿರುವುದರಿಂದ ಕೆಲವೆಡೆ ಮರ ಧರೆಗುಳಿದರೆ, ವಿದ್ಯುತ್ ಕಂಬಗಳು ಬಿದ್ದಿವೆ.
ಇಂದೂ ಕೂಡ ಶಾಲಾ-ಕಾಲೇಜಿಗೆ ರಜೆ ಘೋಷಿಸಲಾಗಿದ್ದು ಮಕ್ಕಳು ನದಿ-ತೋಡು ಪ್ರದೇಶದತ್ತ ಹೋಗದಂತೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜುಲೈ 8 ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯೊಂದಿಗೆ ಕರಾವಳಿ ಕರ್ನಾಟಕಕ್ಕೆ ಭಾರತೀಯ ಹವಾಮಾನ ಇಲಾಖೆ (IMD) ಬುಧವಾರ ಆರೆಂಜ್ ಅಲರ್ಟ್ ಘೋಷಿಸಿದೆ. ಜುಲೈ 8ರ ನಂತರ ರಾಜ್ಯದಲ್ಲಿ ಮಳೆಯ ತೀವ್ರತೆ ಕಡಿಮೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಪ್ರಕಟಣೆಯಲ್ಲಿ ತಿಳಿಸಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಮಲಶಿಲೆಯಲ್ಲಿ ನದಿಯಲ್ಲಿ ಮುಳುಗಿ ಅರ್ಚಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ರೆಡ್ ಅಲರ್ಟ್ ಘೋಷಣೆ ಮಾಡಿದ್ದರೂ ಮಂಗಳೂರು ಹೊರವಲಯದ ಹರೇಕಳ ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ಬೋಟ್ ಮಗುಚಿದೆ, ಬೋಟ್‌ನಲ್ಲಿದ್ದ ಯುವಕನನ್ನು ರಕ್ಷಣೆ ಮಾಡಲಾಗಿದೆ ಆದರೆ, ದೋಣಿ ಕೊಚ್ಚಿ ಹೋಗಿದೆ. ಜಿಲ್ಲೆಯ ಹಲವು ರಸ್ತೆಗಳು ಮುಳುಗಡೆಯಾಗಿದ್ದು ವಾಹನ ಸವಾರರು ಪರದಾಡುವಂತಾಗಿದೆ.




