
ಉಡುಪಿ ಜಿಲ್ಲೆಯಲ್ಲಿ ಕಳೆದ 2 ವರ್ಷಗಳಿಂದ 2808 ರಸ್ತೆ ಅಪಘಾತವಾಗಿ, 543 ಜನ ಮರಣ, ಇದಕ್ಕೆಲ್ಲ ಏನು ಕಾರಣ – ಸಿದ್ದರಾಮಯ್ಯ ಅಧಿಕಾರಿಗಳ ವಿರುದ್ಧ ಗರಂ
ಉಡುಪಿ: ಜಿಲ್ಲೆಯಲ್ಲಿ ಕಳೆದ 2 ವರ್ಷಗಳಿಂದ 2808 ರಸ್ತೆ ಅಪಘಾತವಾಗಿ, 543 ಜನ ಮರಣ ಹೊಂದಿರುತ್ತಾರೆ. ಇದಕ್ಕೆಲ್ಲ ಏನು ಕಾರಣ ಎಂದು ಪ್ರಶ್ನಿಸಿದ ಅವರು, ಲೊಕೋಪಯೋಗಿ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಈ ಬಗ್ಗೆ ಎಚ್ಚರವಹಿಸಬೇಕು. ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಸೈಬರ್ ಕ್ರೈಮ್ ಪ್ರಕರಣಗಳು ಕಂಡು ಬರುತ್ತಿವೆ. ಇದರಿಂದ ಕಾನೂನು ಸುವ್ಯವಸ್ಥೆ ಸರಿಯಿಲ್ಲದಂತಾಗಿದೆ. ಪೊಲೀಸ್ ಇಲಾಖೆಯು ದಿನದ 24 ಗಂಟೆಯೂ ಕೆಲಸ ನಿರ್ವಹಿಸಿ, ಈ ರೀತಿ ಆಗುವುದು ಸರಿಯಲ್ಲ. ಇಂತಹ ಪ್ರಕರಣಗಳು ಕಂಡು ಬಂದಲ್ಲಿ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಬೇಕು ಎಂದರು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾಧಿಕಾರಿಗಳು ಆಗಿಂದಾಗ್ಗೆ ಎಲ್ಲಾ ಇಲಾಖೆಗಳ ಪ್ರಗತಿ ಪರಿಶೀಲನೆಗಳನ್ನು ಕೈಗೊಳ್ಳುವ ಜೊತೆಗೆ ಹಾಸ್ಟೆಲ್, ಆಸ್ಪತ್ರೆ, ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಸೂಚನೆ ನೀಡಿದರು. ಉಡುಪಿ, ಮಂಗಳೂರು ಜಿಲ್ಲೆಗಳು ಅಕ್ಷರಸ್ಥ ಜಿಲ್ಲೆಯಾಗಿದ್ದು, ರಾಜ್ಯಕ್ಕೆ ಮಾದರಿಯಾಗಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಅದು ಕಂಡುಬರುತ್ತಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಈ ಬಗ್ಗೆ ತ್ರೈಮಾಸಿಕ ಜಿಲ್ಲಾ ಪ್ರಗತಿ ಪರಿಶೀಲನೆ ತೆಗೆದುಕೊಳ್ಳವ ಜೊತೆಗೆ ಅಯ್ದ ಇಲಾಖೆಗಳ ಪರಿಶೀಲನೆಯನ್ನು ತಿಂಗಳಿಗೊಮ್ಮೆ ಕೈಗೊಳ್ಳಬೇಕು ಎಂದರು. ಸಾರ್ವಜನಿಕ ಕುಂದು ಕೊರತೆಗಳು ಪತ್ರಿಕೆಗಳಲ್ಲಿ ಪ್ರಕಟವಾದಾಗ ಅಧಿಕಾರಿಗಳು ಕೂಡಲೇ ಸ್ಪಂದಿಸಬೇಕು. ಈ ಬಗ್ಗೆ ನಿರ್ಲಕ್ಷ್ಯವಹಿಸುವುದು ಸರಿಯಲ್ಲ ಎಂದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್, ಬಂದರು ಮತ್ತು ಮೀನುಗಾರಿಕಾ ಸಚಿವ ಮಾಂಕಾಳು ವೈದ್ಯ, ಶಾಸಕ ವಿ.ಸುನೀಲ್ ಕುಮಾರ್, ಯಶ್ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ ಗಂಟಿಹೊಳೆ, ಕಿರಣ್ ಕೊಡ್ಗಿ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮಂಜುನಾಥ ಭಂಡಾರಿ, ಒಳಾಡಳಿತ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ.ರೇಜು ಹಾಗೂ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು




