Crime

ರಾಜ್ಯ ವಿಧಾನಮಂಡಲ ಅಧಿವೇಶನ 29 ರಿಂದ

ಬೆಂಗಳೂರು, 27: ರಾಜ್ಯ ವಿಧಾನಮಂಡಲದ ಉಭಯ ಸದನಗಳ ಅಧಿವೇಶನ ನಾಳೆ ಫೆ. 29 ರಿಂದ ಫೆ.5ರವರೆಗೆ ನಡೆಯಲಿದೆ. ಏಳು ದಿನಗಳ ಕಾಲ ನಡೆಯುವ ಈ ಅಧಿವೇಶನವು ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ವಾಕ್ಸಮರಕ್ಕೆ ವೇದಿಕೆಯಾಗಲಿದೆ. ನಾಳೆ ಬೆಳಗ್ಗೆ 11 ಗಂಟೆಗೆ ರಾಜ್ಯಪಾಲ ವಜುಭಾಯಿ ವಾಲಾ ಅವರು ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ವಿಧಾನಸಭೆಯಲ್ಲಿ ಭಾಷಣ ಮಾಡಲಿದ್ದಾರೆ.
ಜ.29ರಿಂದ ಸರ್ಕಾರದ ಅಧಿಕೃತ ಕಾರ್ಯಕಲಾಪಗಳು, ಅಧಿವೇಶನ ನಡೆಯಲಿದ್ದು, ಆ ಸಂದರ್ಭದಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿರೋಧ ಪಕ್ಷಗಳು ಸಜ್ಜಾಗಿವೆ. ಸಚಿವ ಸಂಪುಟ ವಿಸ್ತರಣೆ, ಖಾತೆ ಬದಲಾವಣೆ ಬಿಕ್ಕಟ್ಟಿನ ಬೆನ್ನಲ್ಲೇ ನಡೆಯುತ್ತಿರುವ ಅಧಿವೇಶನದಲ್ಲಿ ಪ್ರತಿಪಕ್ಷಗಳುವೊಡ್ಡುವ ಅಸ್ತ್ರಗಳನ್ನು ನೂತನ ಸಚಿವರು ಎದುರಿಸಲಿದ್ದಾರೆ.
ಕೋವಿಡ್‍ನಿಂದಾಗಿ ಉಂಟಾಗಿರುವ ಆರ್ಥಿಕ ಸಂಕಷ್ಟ, ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ, ವಿದ್ಯುತ್, ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ, ಅತಿವೃಷ್ಟಿ ಪರಿಹಾರ ವಿಳಂಬ ಮೊದಲಾದ ವಿಚಾರಗಳು ಅಧಿವೇಶನದಲ್ಲಿ ಪ್ರಮುಖವಾಗಿ ಪ್ರಸ್ತಾಪವಾಗಲಿವೆ.
ಕೃಷಿ ಕಾಯ್ದೆಯನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯು ಉಭಯ ಸದನಗಳಲ್ಲಿ ಪ್ರತಿಧ್ವನಿಸುವ ಸಾಧ್ಯತೆ ಹೆಚ್ಚಾಗಿದೆ. ವಿಧಾನಪರಿಷತ್‍ನಲ್ಲಿ ಗೋಹತ್ಯೆ ನಿμÉೀಧವನ್ನು ಮತ್ತೆ ಸರ್ಕಾರ ಮಂಡಿಸುವ ಸಾಧ್ಯತೆಗಳಿವೆ.
ಪ್ರತಿಪಕ್ಷವಾದ ಕಾಂಗ್ರೆಸ್ ಸದನದಲ್ಲಿ ರೈತಪರ ಹೋರಾಟವನ್ನು ಮುಂದುವರೆಸಲು ಉದ್ದೇಶಿಸಿದೆ. ಜೆಡಿಎಸ್ ತೈಲಬೆಲೆ, ಅಗತ್ಯವಸ್ತುಗಳ ಬೆಲೆ ವಿಚಾರವನ್ನು ಪ್ರಮುಖವಾಗಿ ಪ್ರಸ್ತಾಪಿಸುವ ಸಾಧ್ಯತೆಗಳಿವೆ. ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯಲ್ಲಿ ಸರ್ಕಾರವನ್ನು ಪ್ರತಿಪಕ್ಷಗಳು ತರಾಟೆಗೆ ತೆಗೆದುಕೊಳ್ಳುವ ಸಾಧ್ಯತೆಗಳು ದಟ್ಟವಾಗಿದೆ.
ಬಡವರಿಗೆ ಮನೆ ಹಂಚಿಕೆ ವಿಳಂಬ, ಆರೋಗ್ಯ ಸಮಸ್ಯೆ, ವಿದ್ಯುತ್ ಅಭಾವ, ಕುಡಿಯುವ ನೀರಿನ ಸಮಸ್ಯೆ, ಜಾನುವಾರುಗಳ ಮೇವು, ಶಾಲಾಕಾಲೇಜು ಆರಂಭದ ವಿಚಾರ ಸೇರಿದಂತೆ ಜನರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳು ಅಧಿವೇಶನದಲ್ಲಿ ಪ್ರಸ್ತಾಪವಾಗುವ ಸಾದ್ಯತೆಗಳಿವೆ.
ಕೋವಿಡ್ ಹಿನ್ನೆಲೆಯಲ್ಲಿ ಕಳೆದೆರಡು ಅಧಿವೇಶನಗಳ ಪೂರ್ವ ನಿಗದಿತ ಅವಧಿ ಮೊಟಕಾಗಿತ್ತು. ಒಟ್ಟಾರೆ ಈ ಅಧಿವೇಶನ ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ವಾಕ್ಸಮರಕ್ಕೆ ವೇದಿಕೆಯಾಗಲಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button