Featured StoryKoppal

ವೃದ್ಧನೋರ್ವನಿಗೆ ಜೈಶ್ರೀರಾಮ್ ಘೋಷಣೆ ಹೇಳಲು ಒತ್ತಾಯಿಸಿ ಹಲ್ಲೆ ಪ್ರಕರಣ: ಸಾಫ್ಟ್‌ವೇರ್ ಇಂಜಿನಿಯರ್ ಸಹಿತ ಇಬ್ಬರ ಬಂಧನ

ಕೊಪ್ಪಳದ ಗಂಗಾವತಿ ನಗರದಲ್ಲಿ ಇತ್ತೀಚೆಗೆ ಮಧ್ಯರಾತ್ರಿ ಅಂಧ ಮುಸ್ಲಿಂ ವೃದ್ಧನೋರ್ವನ ಗಡ್ಡಕ್ಕೆ ಬೆಂಕಿ ಹಚ್ಚಿ, ಜೈಶ್ರೀರಾಮ್ ಎಂದು ಹೇಳುವಂತೆ ಒತ್ತಾಯಿಸಿ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿಸಿಕೊಂಡಿದ್ದ ಆರೋಪಿಗಳನ್ನು ಕೊನೆಗೂ ಪತ್ತೆ ಹಚ್ಚಿರುವ ಪೊಲೀಸರು, ಸಾಫ್ಟ್‌ವೇರ್ ಎಂಜಿನಿಯರ್ ಸಹಿತ ಇಬ್ಬರನ್ನು ಬಂಧಿಸಿದ್ದಾರೆ.

ಗಂಗಾವತಿಯ ಕುವೆಂಪು ಬಡಾವಣೆಯ ಸಾಫ್ಟ್‌ವೇರ್ ಎಂಜಿನಿಯರ್ ಸಾಗರ ಶೆಟ್ಟಿ ಕಲ್ಕಿ(24) ಹಾಗೂ ಕಲ್ಲಪ್ಪನ ಕ್ಯಾಂಪ್‌ನ ನಿವಾಸಿ ನರಸಪ್ಪ(25) ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಕೊಲೆ ಬೆದರಿಕೆ ಒಡ್ಡಿದ್ದಾರೆ. ಸಿದ್ದಿಕೇರಿಗೆ ಹೋಗುವ ಮಾರ್ಗದಲ್ಲಿನ ರೈಲ್ವೆ ಸೇತುವೆ ಕೆಳಗಡೆ ಕರೆದುಕೊಂಡು ಹೋಗಿ ಜೈ ಶ್ರೀರಾಮ್ ಎನ್ನುವಂತೆ ಒತ್ತಾಯಿಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಮೆಹಬೂಬ್‌ ನಗರದ ಅಂಧ ವ್ಯಕ್ತಿಯಾಗಿರುವ ಹುಸೇನ್ ಸಾಬ್(65) ಎಂಬುವವರು ಪೊಲೀಸರಿಗೆ ದೂರು ನೀಡಿದ್ದರು. ಘಟನೆಯ ಸಂಬಂಧ ಪೊಲೀಸರು ಅಪರಿಚಿತರ ಮೇಲೆ ಎಫ್‌ಐಆರ್ ದಾಖಲಿಸಿಕೊಂಡಿದ್ದರು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು, ವೃದ್ಧನನ್ನು ಬೈಕಿನಲ್ಲಿ ಕರೆದುಕೊಂಡು ಹೋಗಿದ್ದ ಇಬ್ಬರು ಆರೋಪಿಗಳನ್ನು ಕೊನೆಗೂ ಪತ್ತೆ ಹಚ್ಚಿ, ಬಂಧಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button