
ವಕ್ಫ್ ಆಸ್ತಿ: ನಿರ್ವಹಣೆ, ದುರಸ್ತಿಗೆ ಅನುದಾನ ತಕ್ಷಣ ಬಿಡುಗಡೆ ಮಾಡಲು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಮಾಜಿ ಅಧ್ಯಕ್ಷ ಎಮ್.ಪಿ ಮೊಯ್ದಿನಬ್ಬ ಆಗ್ರಹ
ಉಡುಪಿ, ಡಿ.29: ಉಡುಪಿ ಜಿಲ್ಲೆಯಲ್ಲಿರುವ ಕರ್ನಾಟಕ ವಕ್ಫ್ ಮಂಡಳಿ ಯಲ್ಲಿ ನೋಂದಣಿಯಾಗಿರುವ ಮಸೀದಿ, ಮದ್ರಸ, ದರ್ಗಾ, ಖಬರಸ್ಥಾನಗಳ ಆಡಳಿತ ಸಮಿತಿಗಳು ತುರ್ತು ದುರಸ್ತಿ, ನವೀಕರಣ ಕಾಮಗಾರಿ ನಿರ್ವಹಿಸಲು ಅನುದಾನ ಬಿಡುಗಡೆ ಸೇರಿದಂತೆ ವಿವಿಧ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರವೂ ಸಮಸ್ಯೆಗಳಿಗೆ ಪರಿಹಾರ ಒದಗಿಸದೇ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲೆಯನ್ನು ಸಂಪೂರ್ಣ ನಿರ್ಲಕ್ಷಿಸಿದೆ. ಇದನ್ನು ತಕ್ಷಣ ಪರಿಹರಿಸುವಂತೆ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಮಾಜಿ ಅಧ್ಯಕ್ಷ ಹಾಗೂ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಮಾಜಿ ಅಧ್ಯಕ್ಷ ಎಂ.ಪಿ.ಮೊಯಿದಿನಬ್ಬ ಆಗ್ರಹಿಸಿದ್ದಾರೆ.
ಈ ಸಂಬಂಧ ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವ ಜಮೀರ್ ಅಹಮದ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಮನವಿ ಸಲ್ಲಿಸಿರುವ ಅವರು,, ಜಿಲ್ಲೆಯ ಹಲವು ವಕ್ಫ್ ಸಂಸ್ಥೆಗಳು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಕೋರಿ ಕಳೆದ ಎರಡು ವರ್ಷಗಳಿಂದ ಪ್ರಸ್ತಾವನೆ ಸಲ್ಲಿಸಿ ಕಾಯುತ್ತಿದೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಗೆ ಅನುದಾನ ಬಿಡುಗಡೆ ಮಾಡಲಾಗಿದ್ದು ಉಡುಪಿ ಜಿಲ್ಲೆಯನ್ನು ಸಂಪೂರ್ಣ ನಿರ್ಲಕ್ಷಿಸಲಾಗಿದೆ. ತಕ್ಷಣ ಉಡುಪಿ ಜಿಲ್ಲೆಗೆ 2 ಕೋಟಿ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ಉಡುಪಿ ಜಿಲ್ಲೆಯಲ್ಲಿ 385 ವಕ್ಫ್ ಆಸ್ತಿಗಳ ಖಾತಾ ಬದಲಾವಣೆ ಪ್ರಕರಣಗಳು ತಹಶೀಲ್ದಾರ್ ಕಚೇರಿಯ ಹಂತದಲ್ಲಿ ಬಾಕಿ ಇದ್ದು ಕೂಡಲೇ ಕ್ರಮ ಕೈಗೊಂಡು ಅನುಪಾಲನಾ ವರದಿ ನೀಡುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಯವರು ಜಿಲ್ಲಾಧಿಕಾರಿಯವರಿಗೆ 2021ರಲ್ಲಿ ನಿರ್ದೇಶನ ನೀಡಿದ್ದರೂ ಕಡತಗಳು ಇನ್ನೂ ತಹಶೀಲ್ದಾರ್ ಕಚೇರಿಯಲ್ಲಿ ಕೊಳೆಯುತ್ತಿದೆಯಾದರೂ ಕರ್ನಾಟಕ ವಕ್ಫ್ ಮಂಡಳಿಯು ಈ ವಿಚಾರದಲ್ಲಿ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ. ಈ ವಿಚಾರದಲ್ಲಿ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಮೊಯಿದಿನಬ್ಬ ಮನವಿಯಲ್ಲಿ ಆಗ್ರಹಿಸಿದ್ದಾರೆ




