Featured StoryState News

ಬಾಬಾ ಬುಡನ್ ಗಿರಿಯಲ್ಲಿ ಗೋರಿ ದ್ವಂಸ ಪ್ರಕರಣವನ್ನು ರೀ ಓಪನ್ ಎಂಬುವುದು ಸುಳ್ಳು ಸುದ್ದಿ | ಟಿವಿ ಚಾನೆಲ್ ಗಳ ವರದಿಗೆ ಮುಖ್ಯಮಂತ್ರಿ ಸ್ಪಷ್ಟನೆ

ಬಾಬಾ ಬುಡನ್ ಗಿರಿಯಲ್ಲಿ ಗೋರಿ ದ್ವಂಸ ಪ್ರಕರಣವನ್ನು ರೀ ಓಪನ್ ಮಾಡಲಾಗಿದೆ ಎಂಬ ಮಾಹಿತಿ ಸುಳ್ಳು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟ ಪಡಿಸಿದ್ದಾರೆ.

2017 ರಲ್ಲಿ ದಾಖಲಾಗಿದ್ದ ಪ್ರಕರಣದ ಸಹಜ ಕಾನೂನು ಪ್ರಕ್ರಿಯೆಯ ಭಾಗವಾಗಿ ಆರೋಪಿಗಳಿಗೆ ನ್ಯಾಯಾಲಯದ ಸಮನ್ಸ್ ಜಾರಿ ಆಗಿದೆ ಅಷ್ಟೆ ಎಂದು ಸಿಎಂ ಸ್ಪಷ್ಟನೆ ನೀಡಿದ್ದಾರೆ.. 2017ರಲ್ಲಿ ಚಿಕ್ಕಮಗಳೂರು ತಾಲೂಕು ಇನಾಂ ದತ್ತಾತ್ರೇಯ ಬಾಬಾ ಬುಡನ್ ದರ್ಗಾದಲ್ಲಿ ಗೋರಿಯನ್ನು ಧ್ವಂಸಗೊಳಿಸಿದ ಹಿನ್ನೆಲೆ ಭಜರಂಗದಳ ಕಾರ್ಯಕರ್ತರ ಮೇಲೆ ಕೇಸ್‌ ದಾಖಲಾಗಿತ್ತು.

ಈ ಬಗ್ಗೆ ಗುರುವಾರ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಕೆಲವು ದೃಶ್ಯ ಮಾಧ್ಯಮಗಳಲ್ಲಿ ಬಾಬಾಬುಡನ್ ಗಿರಿಯಲ್ಲಿ ಗೋರಿ ದ್ವಂಸ ಪ್ರಕರಣವನ್ನು ರೀ ಓಪನ್ ಮಾಡಲಾಗಿದೆ ಎನ್ನುವ ಸುದ್ದಿ ಪ್ರಸಾರವಾಗುತ್ತಿದ್ದು ಇದು ಅಪ್ಪಟ ತಪ್ಪು ಮಾಹಿತಿ ಹಾಗೂ ಸುಳ್ಳಿನಿಂದ ಕೂಡಿದ್ದಾಗಿದೆ ಎಂದಿದ್ದಾರೆ.

2017 ರಲ್ಲಿ ದಾಖಲಾಗಿದ್ದ ಪ್ರಕರಣದ ಸಹಜ ಕಾನೂನು ಪ್ರಕ್ರಿಯೆಯ ಭಾಗವಾಗಿ ಆರೋಪಿಗಳಿಗೆ ನ್ಯಾಯಾಲಯದ ಸಮನ್ಸ್ ಜಾರಿ ಆಗಿದೆ ಅಷ್ಟೆ. 2017 ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ 2020 ರ ಮಾರ್ಚ್ 19 ರಂದು ವಿಚಾರಣೆಗೆ ಅನುಮತಿಗಾಗಿ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಅದರ ಆಧಾರದಲ್ಲಿ 2023 ರ ಸೆಪ್ಟೆಂಬರ್ 7 ರಂದು ಸರ್ಕಾರ ಅನುಮತಿ ನೀಡಿತ್ತು.

2023 ರ ಅಕ್ಟೋಬರ್ 24 ರಂದು ಆರೋಪಿಗಳ ವಿರುದ್ಧ ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಬಳಿಕ ಈ ಕಾನೂನು ಪ್ರಕ್ರಿಯೆಯ ಮುಂದುವರೆದ ಭಾಗವಾಗಿ ನ್ಯಾಯಾಲಯದಿಂದ ಸಮನ್ಸ್ ಜಾರಿಯಾಗಿದ್ದು, ಜನವರಿ 8 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯದಿಂದಲೇ ಸಮನ್ಸ್ ಜಾರಿಯಾಗಿದೆ.

ಇದಿಷ್ಟೂ ಕೂಡ ಯಾವುದೇ ಒಂದು ಪ್ರಕರಣದಲ್ಲಿ ಸಹನವಾಗಿ ನಡೆಯುವ ಕಾನೂನು ಪ್ರಕ್ರಿಯೆಯಾಗಿದೆ. ಆದ್ದರಿಂದ ಪ್ರಕರಣದ ಮರು ತನಿಖೆಗೆ ಸರ್ಕಾರ ಮುಂದಾಗಿದೆ ಎನ್ನುವುದು ತಪ್ಪು ಮತ್ತು ದುರುದ್ದೇಶಪೂರಿತ ಸುಳ್ಳು ಸಂಗತಿಯಾಗಿದೆ.

ಏನಿದು ಘಟನೆ?

2017ರಲ್ಲಿ ಚಿಕ್ಕಮಗಳೂರು ತಾಲೂಕು ಇನಾಂ ದತ್ತಾತ್ರೇಯ ಬಾಬಾ ಬುಡನ್ ದರ್ಗಾದಲ್ಲಿ ಗೋರಿಯನ್ನು ಧ್ವಂಸಗೊಳಿಸಿದ ಘಟನೆ ನಡೆದಿತ್ತು. ‌ 2017ರ ಡಿಸೆಂಬರ್ 3 ರಂದು ದತ್ತ ಜಯಂತಿ ದಿನ ದರ್ಗಾದ ಆವರಣದಲ್ಲಿದ್ದ ಎರಡು ಗೋರಿಗಳನ್ನು ಧ್ವಂಸಗೊಳಿಸಲಾಗಿತ್ತು. ಈ ಹಿನ್ನೆಲೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಭಜರಂಗದಳದ ತುಡುಕೂರು ಮಂಜು, ಶಿವರಾಜ್, ಸಂದೇಶ್, ಸುಮಂತ್, ನಾಗ, ನಾಗೇಂದ್ರ ಪೂಜಾರಿ, ಮೋಹನ್, ಅಶೋಕ್, ತೇಜು, ಶ್ರೀನಾಥ್, ಲೋಕೇಶ್, ಮಹೇಂದ್ರ, ಸಂದೀಪ್, ರಾಮು ಸೇರಿ ಒಟ್ಟು 14 ಕಾರ್ಯಕರ್ತರ ಮೇಲೆ ಈ ಪ್ರಕರಣ ದಾಖಲಾಗಿತ್ತು. ಸದ್ಯ ಸೋಮವಾರ ಜನವರಿ 8ರಂದು ಕೋರ್ಟ್ಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button