
ಟಿ.ಇ.ಟಿ. ಪರೀಕ್ಷೆ: ದಿನಾಂಕ ಹಾಗೂ ಸಮಯದ ವಿವರ ಇಲ್ಲಿದೆ ನೋಡಿ
ಕಲಬುರಗಿ.ಅ.2: -ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ಅಕ್ಟೋಬರ್ 4 ಭಾನುವಾರದಂದು ಕಲಬುರಗಿ ನಗರದ 47 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದೆ ಎಂದು ಕಲಬುರಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ) ಅವರು ತಿಳಿಸಿದ್ದಾರೆ.
ಅಂದು ಟಿ.ಇ.ಟಿ. ಪರೀಕ್ಷೆಯ ಪತ್ರಿಕೆ-1 ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ 16 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಒಟ್ಟು 5,302 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಅದೇ ರೀತಿಯಾಗಿ ಪತ್ರಿಕೆ-2 ಮಧ್ಯಾಹ್ನ 2 ರಿಂದ ಸಂಜೆ 4-30 ಗಂಟೆಯವರೆಗೆ 47 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಒಟ್ಟು 13,858 ಅಭ್ಯರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದಾರೆ.
ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರ ವಿಳಾಸ ಹಾಗೂ ಇನ್ನಿತರ ಮಾಹಿತಿಯನ್ನು ಮುಂಚೆಯೇ ತಿಳಿದುಕೊಂಡು ಪರೀಕ್ಷಾ ದಿನದಂದು ಪರೀಕ್ಷಾ ಪ್ರಾರಂಭವಾಗುವ ಒಂದು ಗಂಟೆ ಮುಂಚೆಯೇ ಹಾಜರಾಗಬೇಕೆಂದು ಅವರು ತಿಳಿಸಿದ್ದಾರೆ.
ಕೋವಿಡ್-19 ಹಿನ್ನೆಲೆಯಲ್ಲಿ ಮುನ್ನೇಚ್ಚರಿಕೆ ಕ್ರಮವಾಗಿ ಪರೀಕ್ಷೆಗೆ ಹಾಜರಾಗುವ ಪ್ರತಿಯೊಬ್ಬ ಅಭ್ಯರ್ಥಿಯು ಕಡ್ಡಾಯವಾಗಿ ಮಾಸ್ಕ್ ಧರಿಸಿ ಪರೀಕ್ಷೆಗೆ ಹಾಜರಾಗಬೇಕು. ಅಭ್ಯರ್ಥಿಗಳು ಕುಡಿಯುವ ನೀರನ್ನು ಸ್ವತಃ ತೆಗೆದುಕೊಂಡು ಬರಬೇಕು. ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವಾಗ ಹಾಗೂ ಪರೀಕ್ಷಾ ಕೇಂದ್ರದಿಂದ ನಿರ್ಗಮಿಸುವಾಗ ಕಟ್ಟುನಿಟ್ಟಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಪ್ರತಿಯೊಂದು ಪರೀಕ್ಷಾ ಕೇಂದ್ರಕ್ಕೆ ತಲಾ ಇಬ್ಬರಂತೆ ಆರೋಗ್ಯ ಸಹಾಯಕರನ್ನು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ನಿಯೋಜಿಸಲಾಗಿದೆ.
ಮೊಬೈಲ್ ನಿಷೇಧ: ಪರೀಕ್ಷಾ ಕೇಂದ್ರದಲ್ಲಿ ಯಾವುದೇ ರೀತಿಯ ಎಲೆಕ್ಟ್ರಾನಿಕ್ಸ್ ವಸ್ತುಗಳು ಹಾಗೂ ಮೊಬೈಲ್ ಫೋನ್ಗಳನ್ನು ತರುವುದನ್ನು ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗುವ ಸಂದರ್ಭದಲ್ಲಿ ಪ್ರವೇಶ ಪತ್ರದ ಜೊತೆಗೆ ಆಧಾರ ಕಾರ್ಡ್ ಹಾಗೂ ಎರಡು ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳನ್ನು ತರಬೇಕು. ಪ್ರವೇಶ ಪತ್ರದಲ್ಲಿ ನೀಡಲಾಗಿರುವ ಎಲ್ಲಾ ಶರತ್ತುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಅವರು ತಿಳಿಸಿದ್ದಾರೆ.




