
ಕಲಬುರಗಿ ಮಾಲಿನ್ಯ ಮುಕ್ತ ಜಿಲ್ಲೆಯಾಗಲಿ ಎಂದ ಆಶೀಸರ್
ಕಲಬುರ್ಗಿ: ಪ್ಲಾಸ್ಟಿಕ್ ನಿಷೇಧ ಹಾಗೂ ಹೋಟೆಲ್ಗಳಲ್ಲಿ ಜೈವಿಕ ಅನಿಲ ಬಳಸುವುದರ ಮೂಲಕ ಕಲಬುರ್ಗಿಯನ್ನು ಮಾಲಿನ್ಯ ಮುಕ್ತ ಜಿಲ್ಲೆಯನ್ನಾಗಿಸಬೇಕು ಎಂದು ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಮನವಿ ನೀಡಿದರು.
ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಪ್ಲಾಸ್ಟಿಕ್ ಬಳಕೆ ಹೆಚ್ಚಾಗಿದ್ದು, ಅದನ್ನು ನಿಯಂತ್ರಿಸುವ ಜವಾಬ್ದಾರಿ ಮಂಡಳಿಯದ್ದಾಗಿದೆ. ಪ್ಲಾಸ್ಟಿಕ್ ಬಳಕೆ ಕಂಡು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು. ನಗರದ ಅನೇಕ ಕಾರ್ಖಾನೆ ಹಾಗೂ ಹೋಟೆಲ್ಗಳಲ್ಲಿ ರಾಸಾಯನಿಕ ಗ್ಯಾಸ್ ಅಧಿಕ ಪ್ರಮಾಣದಲ್ಲಿ ಬಳಸಲಾಗುತ್ತಿದೆ.
ಜೈವಿಕ ಅನಿಲ ಬಳಸುವುದರ ಮೂಲಕ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಕೆಲಸಗಳು ಆಗಬೇಕಿದೆ’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಮೇ 22ರಂದು ಜಾಗತಿಕ ಜೀವ ವೈವಿಧ್ಯ ದಿನ ಆಚರಿಸುತ್ತಿದ್ದು, ಆ ದಿನ ಕೇವಲ ಆಚರಣೆ ಆಗದೆ ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲಿಯೂ ಗಿಡ ನೆಡುವುದು, ಕೆರೆ ಶುಚಿಗೊಳಿಸುವುದು, ನಗರದಲ್ಲಿ ಸ್ವಚ್ಛತಾ ಕಾರ್ಯಕೈಗೊಳ್ಳುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.
ಜಿಲ್ಲೆಯಲ್ಲಿ ಸುಮಾರು 8 ಸಾವಿರ ಹೆಕ್ಟೇರ್ ಡೀಮ್ಡ್ ಅರಣ್ಯ ಪ್ರದೇಶವಿದ್ದು, ಅಲ್ಲಿ ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆಯ ಸಹಯೋಗದೊಂದಿಗೆ ಪರಿಸರ ಪ್ರೇಮಿಗಳು, ರೈತರು ಹೆಚ್ಚಿನ ಸಂಖ್ಯೆಯಲ್ಲಿ ಗಿಡಗಳನ್ನು ನೆಡುವುದರ ಮೂಲಕ ಹಸಿರನ್ನು ಹೆಚ್ಚಾಗಿ ಬೆಳೆಸಬೇಕು. ಅಪರೂಪದ ಹಾಗೂ ಅವನತಿ ಅಂಚಿನಲ್ಲಿರುವ ಪ್ರಾಣಿ, ಪಕ್ಷಿ, ಗಿಡ, ಮರಗಳನ್ನು ಪತ್ತೆ ಹಚ್ಚಿ ಅವುಗಳ ಬಗ್ಗೆ ಅಧ್ಯಯನ ನಡೆಸಿ ಮುಂದಿನ ಪೀಳಿಗೆ ತಿಳಿಯುವಂತೆ ಅರಣ್ಯ ಇಲಾಖೆ ಹಾಗೂ ರಾಷ್ಟ್ರೀಯ ಔಷಧಿ ಗಿಡಮೂಲಿಕೆ ಮಂಡಳಿ ವರದಿ ಸಿದ್ಧಪಡಿಸಬೇಕು ಎಂದರು.
ಪತ್ರಿಕಾಗೋಷ್ಠಿಯಲ್ಲಿ ವಿಭಾಗೀಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎA. ವಾನತಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಶಂಕರ ವಣಿಕ್ಯಾಳ ಇದ್ದರು.




