ಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಬೆಳಗಾವಿ ಜಿಲ್ಲೆಯ ರಾಯಬಾದ ತಾಲೂಕಿನ ಹಂದಿಗುಂದ ಗ್ರಾಮದಲ್ಲಿ ಈ ಭೀಕರ ಕಾರು ಅಪಘಾತ (Road Accident) ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು (Car Accident) ಅಪಘಾತಕ್ಕೀಡಾಗಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಪಾಲಬಾವಿ ಗ್ರಾಮದ ಮಹಾಲಿಂಗ ನಿಂಗನೂರ (47) ಮತ್ತು ಈರಪ್ಪಾ ಉಗಾರೆ (32) ಎಂದು ಗುರುತಿಸಲಾಗಿದೆ.
ರಸ್ತೆಯಲ್ಲಿ ವೇಗವಾಗಿ ಬಂದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಬಳಿಕ ಕಂಬದ ಸಮೇತ ರಸ್ತೆ ಬದಿಯ ಜಮೀನಿಗೆ ನುಗ್ಗಿದೆ. ಡಿಕ್ಕಿ ರಭಸಕ್ಕೆ ಕಾರಿನ ಹಿಂಬದಿ ಕುಳಿತಿದ್ದ ಇಬ್ಬರಿಗೆ ತೀವ್ರ ರಕ್ತಸ್ರಾವವಾಗಿದೆ. ಅಪಘಾತವಾಗುತ್ತಿದ್ದಂತೆ ಸ್ಥಳೀಯರು ರಕ್ಷಣೆಗೆ ಮುಂದಾಗಿದ್ದಾರೆ.
ಕೂಡಲೇ ಕಾರಿನಲ್ಲಿ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದವರನ್ನು ರಕ್ಷಿಸಿದ್ದಾರೆ. ಆದರೆ ಗಂಭೀರ ಗಾಯಗೊಂಡು ಇಬ್ಬರು ಮೃತಪಟ್ಟಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಅಪಘಾತವಾಗುತ್ತಿದ್ದಂತೆ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.