ದಾಖಲೆಯಿಲ್ಲದೇ ಸಾಗಿಸುತ್ತಿದ್ದ 14 ಲಕ್ಷಕ್ಕೂ ಅಧಿಕ ಹಣ ಜಪ್ತಿ

ಬೆಳಗಾವಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಅಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಹೈಅಲರ್ಟ್ ಆಗಿದ್ದು, ರಾಜ್ಯದ ವಿವಿಧ ಚೆಕ್ ಪೋಸ್ಟ್ ಗಳಲ್ಲಿ ವಾಹನ ತಪಾಸಣೆ ನಡೆಸಿದ್ದಾರೆ. ಈ ವೇಳೆ ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಹಣ, ಮದ್ಯ ಚಿನ್ನಾಭರಣಗಳನ್ನು ವಶಕ್ಕೆ ಪಡೆಯುತ್ತಿದ್ದಾರೆ.

ಗಡಿ ಜಿಲ್ಲೆ ಬೆಳಗಾವಿಯ ವಿವಿಧೆಡೆಗಳಲ್ಲಿ ಚುನವಣಾಧಿಕಾರಿಗಳು ಲಕ್ಷ ಲಕ್ಷ ಹಣ ಸೀಜ್ ಮಾಡಿದ್ದಾರೆ. ಗೋಕಾಕ್ ತಾಲೂಕಿನ ಘಟಪ್ರಭಾ ಚೆಕ್ ಪೋಸ್ಟ್ ನಲ್ಲಿ ಚುನಾವಾಣಾಧಿಕಾರಿಗಳು ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1.70 ಲಕ್ಷ ಹಣ ಸೀಜ್ ಮಾಡಿದ್ದಾರೆ. ಕುಡಚಿ ಚೆಕ್ ಪೋಸ್ಟ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 9,86,480 ರೂಪಾಯಿ ಹಣವನ್ನು ಚುನಾವಣಾಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಇದೇ ವೇಳೆ ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ನಿಪ್ಪಾಣಿ ತಾಲೂಕಿನ ಕುಣಗೊಳಿ ಚೆಕ್ ಪೋಸ್ಟ್ ನಲ್ಲಿ 3 ಲಕ್ಷ ಹಣ ವಶಕ್ಕೆ ಪಡೆಯಲಾಗಿದೆ. ಬೆಳಗಾವಿಯ ವಿವಿಧ ಚೆಕ್ ಪೋಸ್ಟ್ ಗಳಲ್ಲಿ ಒಂದೆ ದಿನ ಒಟ್ಟು 14,56,480 ರೂಪಾಯಿ ಜಪ್ತಿ ಮಾಡಲಾಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

Latest Indian news

Popular Stories