
ಶೂದ್ರ ಮತ್ತು ದಲಿತ ಸಮುದಾಯ ಈಗಲಾದರೂ ಕಣ್ತೆರೆದು ನಗ್ನ ಸತ್ಯ ಅರಿತುಕೊಳ್ಳಲಿ – ಸಿದ್ದರಾಮಯ್ಯ
ಬೆಂಗಳೂರು.ಡಿಸೆಂಬರ್ 06: ನಾಗಪುರದ ರಾಷ್ಟ್ರೀಯ ಸ್ವಯಂ ಸೇವಕ (RSS) ಕಚೇರಿಗೆ ಪರಿಶಿಷ್ಟ ಜಾತಿ ಎಂಬ ಕಾರಣಕ್ಕೆ ಗೂಳಿಹಟ್ಟಿ ಶೇಖರ್ ಅವರಿಗೆ ನಿರಾಕರಣೆ ವಿಚಾರದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ದಲಿತ ಸಮುದಾಯ ಈಗಲಾದರೂ ಕಣ್ತೆರೆದು ನಗ್ನ ಸತ್ಯ ಅರಿತುಕೊಳ್ಳಲಿ ಎಂದು ತಿಳಿಸಿದ್ದಾರೆ.
RSS ಕಚೇರಿಗೆ ಪ್ರವೇಶಾತಿ ನಿರಾಕರಣೆ ಕುರಿತು ಸಿಎಂ ಸಿದ್ದರಾಮಯ್ಯ ಅವರು ಬುಧವಾರ ಸಾಮಾಜಿಕ ಜಾಲತಾಣ X ನಲ್ಲಿ ಪೊಸ್ಟ್ ಹಾಕಿದ್ದಾರೆ. ”ಶೂದ್ರರು ಮತ್ತು ದಲಿತರಿಗೆ ಆರ್.ಎಸ್.ಎಸ್ ಗರ್ಭಗುಡಿಗೆ ಪ್ರವೇಶ ಇಲ್ಲ, ಅವರೇನಿದ್ದರೂ ಹೊರಬಾಗಿಲಲ್ಲಿ ನಿಂತು ‘ಜೀ..ಜೀ..ಹುಜೂರ್’ ಎಂದಷ್ಟೇ ಹೇಳಬೇಕು ಎಂದರು.
ಬಿಜೆಪಿ ಮತ್ತು ಆರ್.ಎಸ್.ಎಸ್ ಪರಿವಾರ ಬಹಿರಂಗವಾಗಿ ಮುಸ್ಲಿಂಮರ ವಿರುದ್ಧ ಮಾತ್ರ ಹರಿಹಾಯ್ದರೂ ಅಂತರಂಗದಲ್ಲಿ ಅದು ಶೂದ್ರರು ಮತ್ತು ದಲಿತರ ವಿರುದ್ಧವಾಗಿದೆ.ಬಿಜೆಪಿ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರಂತಹ ದಲಿತ ಸಮುದಾಯದ ನಾಯಕರಿಗೆ ಬಾಬಾಸಾಹೇಬ್ ಅಂಬೇಡ್ಕರ್ ಅವರ ಚಿಂತನೆ ಮತ್ತು ಸಂವಿಧಾನ ಮಾತ್ರ ರಕ್ಷಣೆ ನೀಡಬಹುದೇ ಹೊರತು ಸಂಘ ಪರಿವಾರದ ಸಾವರ್ಕರ್, ಗೋಲ್ವಾಲ್ಕರ್ ಚಿಂತನೆಗಳಲ್ಲ. ಶೇಖರ್ ಅವರು ತನ್ನ ಅನುಭವದಿಂದ ಪಾಠ ಕಲಿಯಲಿ ಎಂದು ಹಾರೈಸುತ್ತೇನೆ ಎಂದರು.




