ಬೆಂಗಳೂರು: ರಾಜ್ಯದಲ್ಲಿ ನಕಲಿ ದಾಖಲೆ ನೀಡಿ ಅಕ್ರಮವಾಗಿ ಬಿಪಿಎಲ್ ಕಾರ್ಡ್ ಪಡೆದುಕೊಂಡವರಿಗೆ ರಾಜ್ಯ ಸರ್ಕಾರವು ಶಾಕ್ ನೀಡಿದ್ದು, ಅಕ್ರಮ ಬಿಪಿಎಲ್ ಕಾರ್ಡ್ ಕಡಿವಾಣಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಚಿವರು ಅಕ್ರಮ ಬಿಪಿಎಲ್ ಕಾರ್ಡ್ ಗಳಿಗೆ ಕಡಿವಾಣ ಹಾಕುವಂತೆ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದು, ಸಿಎಂ ಸಿದ್ದರಾಮಯ್ಯ ಅಕ್ರಮ ಬಿಪಿಎಲ್ ಕಾರ್ಡ್ ಕಡಿವಾಣಕ್ಕೆ ಸಮ್ಮತಿ ಸೂಚಿಸಿದ್ದಾರೆ ಎನ್ನಲಾಗಿದೆ.
ಈ ಮೂಲಕ ರಾಜ್ಯದಲ್ಲಿ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರಿಗೆ ಡವ ಡವ ಶುರುವಾಗಿದೆ. ಸುಳ್ಳು ದಾಖಲೆ ನೀಡಿ ಬಿಪಿಎಲ್ ಕಾರ್ಡ್ ಪಡೆದಿದ್ದರೆ ಇದುವರೆಗೂ ನ್ಯಾಯ ಬೆಲೆ ಅಂಗಡಿಗಳಲ್ಲಿ ಪಡೆದ ಅಕ್ಕಿ ಹಾಗೂ ಇತರೆ ಧಾನ್ಯಗಳ ಮೊತ್ತವನ್ನು ಮರಳಿಸಬೇಕು ಜೊತೆಗೆ ಕ್ರಿಮಿನಲ್ ಕೇಸ್ ಎದುರಿಸಬೇಕು.
ರಾಜ್ಯದಲ್ಲಿ ಅಕ್ರಮ ದಾಖಲೆ ನೀಡಿ ಬಿಪಿಎಲ್ ಪಡಿತರ ಚೀಟಿ ಪಡೆದುಕೊಂಡಿರುವವರ ಪತ್ತೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ರಾಜ್ಯದಲ್ಲಿ 10,97,621 ಅಕ್ರಮ ಬಿಪಿಎಲ್ ಕಾರ್ಡ್ ಪತ್ತೆಯಾಗಿದ್ದು, ಈ ಪೈಕಿ 98,431 ಮಂದಿ ಆದಾಯ ತೆರಿಗೆ ಪಾವತಿದಾರರು, 10,04,716 ಮಂದಿ 1.20 ಲಕ್ಷ ರೂ.ಗಳ ಅಧಿಕ ಆದಾಯ ಹೊರಂದಿರುವವರು, 4,036 ಮಂದಿ ಸರ್ಕಾರಿ ನೌಕರರಿರುವುದು ಪತ್ತೆಯಾಗಿದೆ. ತೆರಿಗೆ ಪಾವತಿಸುವವರು, ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರರು, ಮನೆಗಳನ್ನು ಬಾಡಿಗೆ ಕೊಟ್ಟಿರುವವರು, 7.5 ಎಕರೆಗಿಂತ ಹೆಚ್ಚು ಭೂಮಿ ಹೊಂದಿರುವವರು ಬಿಪಿಎಲ್ ಕಾರ್ಡ್ ಪಡೆಯುವಂತಿಲ್ಲ.