ರಾಜ್ಯದಲ್ಲಿ ಲೋಕಸಭಾ ಚುನಾವಣೆಯ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಬೇರಿ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ಈ ಬಾರಿಯ ಲೋಕಸಭಾ ಚುನಾವಣೆಯ ವೇಳೆ ದೇಶದಾದ್ಯಂತ ಬಿಜೆಪಿ ವಿರೋಧಿ ಅಲೆ ಕಾಣಿಸುತ್ತಿದ್ದು, ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಸರ್ಕಾರ ರಚಿಸಲಿದೆ ಎಂಬ ವಿಶ್ವಾಸವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ವ್ಯಕ್ತಪಡಿಸಿದ್ದಾರೆ.

ಬಸವ ಜಯಂತಿ ಅಂಗವಾಗಿ ವಿಧಾನಸೌಧದ ಮುಂದಿರುವ ವಿಶ್ವಗುರು ಬಸವಣ್ಣನವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎರಡೂ ಹಂತದ ಮತದಾನ ಮಕ್ತಾಯವಾಗಿದ್ದು, ರಾಜ್ಯದಾದ್ಯಂತದಿಂದ ಬಂದಿರುವ ವರದಿಗಳ ರೀತ್ಯ ಕಾಂಗ್ರೆಸ್ ಪಕ್ಷ ಕನಿಷ್ಠ 20 ಸ್ಥಾನಗಳಲ್ಲಿ ಜಯ ಸಾಧಿಸಲಿದೆ ಎಂದು ತಿಳಿಸಿದರು.

ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಪಕ್ಷ ನೀಡಿದ್ದ ಎಲ್ಲ ಐದು ಗ್ಯಾರಂಟಿಗಳನ್ನೂ ನಮ್ಮ ಸರ್ಕಾರ ಈಡೇರಿಸಿದ್ದು, ಜನರಿಗೆ ಕಾಂಗ್ರೆಸ್ ಪಕ್ಷದ ಬಗ್ಗೆ ವಿಶ್ವಾಸ ಇಮ್ಮಡಿಯಾಗಿದೆ. ಈಗ ಕೇಂದ್ರದಲ್ಲಿ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಪಂಚ ನ್ಯಾಯ ಹಾಗೂ 25 ಗ್ಯಾರಂಟಿ ಜಾರಿ ಮಾಡುವುದಾಗಿ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯನ್ನು ಪಕ್ಷ ಈಡೇರಿಸುತ್ತದೆ ಎಂಬ ಪೂರ್ಣ ನಂಬಿಕೆ ದೇಶದ ಜನರಲ್ಲಿ ಮೂಡಿದೆ. ಹೀಗಾಗಿ ಗ್ಯಾರಂಟಿ ಅಲೆ ಎಲ್ಲೆಡೆ ಇದ್ದು, ಈ ಬಾರಿ ಇಂಡಿಯಾ ಕೂಡ ಸರ್ಕಾರ ರಚಿಸುವುದು ಖಚಿತ ಎಂದರು.

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಬಹಿರಂಗವಾಗಲು ಡಿ.ಕೆ. ಶಿವಕುಮಾರ್ ಕಾರಣ ಎಂದು ಎಚ್.ಡಿ. ಕುಮಾರಸ್ವಾಮಿ ಆರೋಪಿಸಿರುವ ಕುರಿತಂತೆ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರನ ನೀಡಿದ ಈಶ್ವರ ಖಂಡ್ರೆ ದಾಖಲೆಗಳೇ ಮಾತನಾಡುತ್ತವೆ. ದಾಖಲೆಗಳನ್ನು ಆಧರಿಸಿ ಎಸ್.ಐ.ಟಿ. ತನಿಖೆ ನಡೆಸುತ್ತಿದೆ, ಕಾನೂನುರೀತ್ಯ ಕ್ರಮ ಆಗುತ್ತದೆ. ಇದಕ್ಕೆ ರಾಜಕೀಯ ಬೆರೆಸುವುದು ಸರಿಯಲ್ಲ ಎಂದರು.

ಇಡೀ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಪ್ರತಿಪಕ್ಷಗಳು ಒತ್ತಾಯಿಸುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜನರನ್ನು ದಾರಿ ತಪ್ಪಿಸಲು ಮತ್ತು ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಇಂತಹ ಒತ್ತಾಯ ಮಾಡುತ್ತಿದ್ದಾರೆ. ಈ ನೆಲದ ಕಾನೂನು ಎಲ್ಲರಿಗೂ ಸಮನಾಗಿದೆ. ಯಾರೋ ಏನೋ ಹೇಳಿದರೆ ಅದಕ್ಕೆ ಅರ್ಥವಿಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ. ಎಸ್.ಐ.ಟಿ. ತನಿಖೆ ನಡೆಸುತ್ತಿದೆ ಎಂದರು.

Latest Indian news

Popular Stories