ನೀರಿನ ಸಮಸ್ಯೆ ಪರಿಹರಿಸಲು ಪ್ರತಿ ಸೋಮವಾರ ಸಭೆ ನಡೆಸಿ: ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಮಟ್ಟದಲ್ಲಿ ಹಾಗೂ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಕ ಅಧಿಕಾರಿಗಳು ಪ್ರತಿ ಸೋಮವಾರ ತಮ್ಮ ಕಾರ್ಯಕ್ಷೇತ್ರದಲ್ಲಿ ಪ್ರವಾಸ ಮಾಡಿ ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳಬೇಕು, ತಮ್ಮ ಪ್ರವಾಸ ಸಮಯದಲ್ಲಿ ನರೇಗಾ ಕಾಮಗಾರಿಗಳ ವೀಕ್ಷಣೆ, ಕೂಸಿನ ಮನೆ ಹಾಗೂ ಅರಿವು ಕೇಂದ್ರಗಳ ತಪಾಸಣೆಯನ್ನು ಸೇರಿಸಿಕೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಪ್ರತಿ ತಿಂಗಳ ಎರಡನೆ ದಿನಾಂಕದಂದು ನಡೆಯುವ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಮಾಸಿಕ ವಿಡಿಯೋ ಕಾನ್ಪರೆನ್ಸ್‌ ವಿಮರ್ಶಾ ಸಭೆಯಲ್ಲಿ ಸಚಿವರು ಮಾತನಾಡಿದರು.

ಬೇಸಿಗೆಯ ಪ್ರಖರತೆ ಹೆಚ್ಚಾಗುತ್ತಿದ್ದು ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಅಭಾವ ಜಾಸ್ತಿಯಾಗುತ್ತಿದೆ, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಮುಂದಿನ ಮೂರು ತಿಂಗಳುಗಳ ಕಾಲ ಪ್ರತಿ ಎರಡನೆ ಹಾಗೂ ನಾಲ್ಕನೆ ಸೋಮವಾರಗಳಂದು ಸಭೆ ನಡೆಸಿ ಕುಡಿಯುವ ನೀರಿನ ಪರಿಸ್ಥಿತಿಯ ಬಗ್ಗೆ ಅವಲೋಕನ ಮಾಡಬೇಕು, ನೀರಿನ ಅಭಾವ ಎದುರಿಸುವ ಗ್ರಾಮಗಳಿಗೆ ಪರ್ಯಾಯ ನೀರಿನ ವ್ಯವಸ್ಥೆ ಮಾಡಬೇಕು ಎಂದು ಕಟ್ಟುನಿಟ್ಟಾಗಿ ಸಚಿವರು ಸೂಚಿಸಿದರು.

ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ಎಲ್ಲಾ ಜಿಲ್ಲಾ ಪಂಚಾಯತಿಗಳಲ್ಲಿ 24/7 ಕಂಟ್ರೋಲ್ ರೂಮ್ ಆರಂಭಿಸಿ, ಸಿಬ್ಬಂದಿಗಳನ್ನು ನಿಯೋಜಿಸಲೂ ಸಚಿವರು ಹೇಳಿದರಲ್ಲದೆ ತಾಲ್ಲೂಕು ಮಟ್ಟದಲ್ಲಿ ಕಾರ್ಯಾನಿರ್ವಾಹಕ ಅಧಿಕಾರಿಗಳ ಮುಖಾಂತರ ಕ್ಷಿಪ್ರ ಕಾರ್ಯಪಡೆ (Rapid taskforce) ರಚಿಸಿ ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ನಿರ್ದೇಶನ ನೀಡಿದರು.

Latest Indian news

Popular Stories