ಕರ್ನಾಟಕದಲ್ಲಿ ಗ್ಯಾರಂಟಿಗಳು ಜಾರಿ ಆಗಿಲ್ಲ ಎಂದರೆ ರಾಜೀನಾಮೆ ಕೊಡ್ತೀನಿ : CM ಸಿದ್ದರಾಮಯ್ಯ ಸವಾಲ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯ ಸುಳ್ಳಿನ ಸರದಾರರೇ, ಕರ್ನಾಟಕಕ್ಕೆ ಬಂದು ನೋಡಿ. ನಿಮಗೆ ವಿಶೇಷ ವಿಮಾನದ ವ್ಯವಸ್ಥೆ ನಾನೇ ಮಾಡುತ್ತೇನೆ. ಕರ್ನಾಟಕದಲ್ಲಿ ಗ್ಯಾರಂಟಿಗಳು ಜಾರಿ ಆಗಿಲ್ಲ ಎಂದರೆ ನಾನು ರಾಜೀನಾಮೆ ಕೊಡ್ತೀನಿ. ನಮ್ಮ ನೆಲದಲ್ಲಿ ಗ್ಯಾರಂಟಿಗಳು ಜಾರಿ ಆಗಿರುವುದು ಸತ್ಯ ಆದರೆ ನಿಮ್ಮ ಸುಳ್ಳಿನ ಜಾಹಿರಾತನ್ನು ವಾಪಾಸ್ ಪಡೆದು ಮಹಾರಾಷ್ಟ್ರ ಜನತೆಯ ಕ್ಷಮೆ ಕೇಳಬೇಕು.
ಮಹಾರಾಷ್ಟ್ರದಲ್ಲೂ ಕಾಂಗ್ರೆಸ್ ಮತ್ತು ಮಹಾ ವಿಕಾಸ್ ಅಘಾಡಿ ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಇಲ್ಲೂ ಮಹಾ ವಿಕಾಸ್ ಆಘಾಡಿ ಅಧಿಕಾರಕ್ಕೆ ಬಂದು ಎಲ್ಲಾ ಭರವಸೆಗಳನ್ನು ಈಡೇರಿಸುವುದು ಶತಸಿದ್ದ. ಏಕೆಂದರೆ ನುಡಿದಂತೆ ನಡೆದ ಚರಿತ್ರೆ ಇರುವುದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ. ಆದ್ದರಿಂದ ಬಿಜೆಪಿ ಸೋಲಿಸಿ ಆರ್ಥಿಕ ಶಕ್ತಿ ಪಡೆಯಿರಿ ಎಂದಿದ್ದಾರೆ.
ಏಕನಾಥ್ ಶಿಂಧೆ ಮಹಾರಾಷ್ಟ್ರ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬರಲಿಲ್ಲ. ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದರು. ಈ ಆಪರೇಷನ್ ಗೆ ಬಳಸಿದ ಹಣ ಯಾವುದು? ಭ್ರಷ್ಟಾಚಾರದ್ದು ಅಲ್ವಾ? ಆ ಹಣ ಎಲ್ಲಿಂದ ಬಂತು ಎಂದು ಮಹಾರಾಷ್ಟ್ರ ಜನರಿಗೆ ಹೇಳಬಲ್ಲಿರಾ ಮೋದಿಯವರೇ? ಬಿಜೆಪಿಯವರಿಗೆ ರೈತರ ಸಾಲ ಮನ್ನಾ ಮಾಡಿ ಎಂದರೆ, ನಮ್ಮ ಬಳಿ ನೋಟು ಪ್ರಿಂಟ್ ಹಾಕುವ ಯಂತ್ರ ಇಲ್ಲ ಅಂದರು. ಹೌದು ಬಿಜೆಪಿಯವರ ಮನೆಯಲ್ಲಿ ಇರುವುದು ನೋಟು ಎಣಿಸುವ ಯಂತ್ರ ಮಾತ್ರ ಎಂದಿದ್ದಾರೆ.