ಸಿದ್ಧರಾಮಯ್ಯ ಸರ್ಕಾರದಲ್ಲಿ ಕನ್ನಡಿಗರು ಬದುಕಿನ ಗ್ಯಾರಂಟಿಯನ್ನೇ ಕಳೆದುಕೊಂಡಿದ್ದಾರೆ- ಬಿಎಸ್ ಯಡಿಯೂರಪ್ಪ ವಾಗ್ಧಾಳಿ

ಬೆಂಗಳೂರು: ಸಿದ್ದರಾಮಯ್ಯನವರ ಸರಕಾರದಲ್ಲಿ ಕನ್ನಡಿಗರು ಬದುಕಿನ ಗ್ಯಾರಂಟಿ ಕಳೆದುಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಆತಂಕ ವ್ಯಕ್ತಪಡಿಸಿದರು.

ನಗರದ ಹೋಟೆಲ್ ಜಿ.ಎಂ. ರಿಜಾಯ್ಸ್‍ನ ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ಹತ್ಯೆಯಾಗಿದೆ.

ತನ್ನದೇ ಪಕ್ಷದ ಚುನಾಯಿತ ಪ್ರತಿನಿಧಿಯ ಮಗಳ ಹತ್ಯೆಗೆ ನ್ಯಾಯ ಒದಗಿಸುವುದನ್ನು ಬಿಟ್ಟು ಆರೋಪಿ ಮನೆಗೆ ರಕ್ಷಣೆ ಭಾಗ್ಯ ಕೊಡುತ್ತಿರುವ ಸರಕಾರಕ್ಕೆ ಏನು ಹೇಳಬೇಕೋ ಗೊತ್ತಾಗುತ್ತಿಲ್ಲ ಎಂದು ನೋವಿನಿಂದ ನುಡಿದರು.

ಭಾರತದ ಭವಿಷ್ಯಕ್ಕಾಗಿ ಮತ ಕೇಳುತ್ತಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಕಾರು ಹರಿಸಿದ ಮತಾಂಧರನ್ನು ಹಿಡಿಯದೆ ಹಾಗೇ ಬಿಟ್ಟಿದ್ದಾರೆ. ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ರಾಮನವಮಿ ಹಬ್ಬದ ದಿನ ರಾಮಭಕ್ತರ ಮೇಲೆ ಹಲ್ಲೆ ಮಾಡಿದ್ದಾರೆ. ಕಲಾವಿದರಾದ ಹರ್ಷಿಕಾ ಪೂಣಚ್ಚ ಹಾಗೂ ಅವರ ಪತಿಯ ಮೇಲೆ ಹಲ್ಲೆ ಮಾಡಿ ದರೋಡೆ ಮಾಡಿದ್ದಾರೆ. ಹಾವೇರಿ ಜಿಲ್ಲೆಯಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ, ಬೆಳಗಾವಿಯಲ್ಲಿ ನಡೆದ ಮಹಿಳೆಯನ್ನು ವಿವಸ್ತ್ರಗೊಳಿಸಿ ಅಪಮಾನಿಸಿದ ಪ್ರಕರಣ ಹಾಗೂ ಉಡುಪಿಯ ಹಾಸ್ಟೆಲ್ ಒಂದರಲ್ಲಿ ಹೆಣ್ಮಕ್ಕಳ ವಿಡಿಯೋ ಮಾಡಿದ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ತಂದಿಲ್ಲ. ಆರೋಪಿಗಳಿಗೆ ರಕ್ಷಣೆ ನೀಡುತ್ತಿರುವುದನ್ನು ನೋಡಿದರೆ ಮಹಿಳೆಯರು ಕರ್ನಾಟಕದಲ್ಲಿ ಭಯದ ವಾತಾವರಣದಲ್ಲಿ ಬದುಕುತ್ತಿರುವುದು ಸ್ಪಷ್ಟ ಎಂದರು.

Latest Indian news

Popular Stories