Bengaluru UrbanCovid-19

ಲಾಕ್‌ಡೌನ್ ಬದಲು ಇನ್ನಷ್ಟು ಕಠಿಣ ಕ್ರಮ: ಬಿಎಸ್‌ವೈ

ಬೆಂಗಳೂರು: ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಜಾರಿ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಗತ್ಯವಿದ್ದರೆ ಇನ್ನಷ್ಟು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವ ಸುಳಿವು ನೀಡಿದ್ದಾರೆ. ಈ ಮೂಲಕ ಕರುನಾಡಲ್ಲಿ ಮತ್ತೆ ಲಾಕ್ಡೌನ್ ಜಾರಿಯಾಗಬಹುದು ಎಂಬ ಆತಂಕದಲ್ಲಿದ್ದ ಜನತೆಗೆ ತುಸು ನೆಮ್ಮದಿಯ ನಿಟ್ಟಿಸಿರು ಬಿಡುವಂತೆ ಮಾಡಿದ್ದಾರೆ.
ಕೊರೊನಾ ನಿಯಂತ್ರಣಕ್ಕೆ ಬೇಕಾದ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ ಇದನ್ನು ನಿಯಂತ್ರಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಆದರೆ, ಲಾಕ್‌ಡೌನ್ ಜಾರಿ ಮಾಡುತ್ತೇವೆ ಎನ್ನುವುದು ಕೇವಲ ಉಹಾಪೋಹ ಎಂದು ಅವರು ಸ್ಪಷ್ಟಪಡಿಸಿದರು. ವಿಧಾನಸೌಧದಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ 130ನೆ ಜಯಂತಿ ಅಂಗವಾಗಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಇದೇ 18ರಂದು ವಿಧಾನಸೌಧದಲ್ಲಿ ಸರ್ವಪಕ್ಷಗಳ ಸಭೆ ಕರೆಯಲಾಗಿದೆ. ಸರ್ಕಾರಕ್ಕೆ ಅವರು ಏನೇನು ಸಲಹೆಗಳನ್ನು ನೀಡುತ್ತಾರೋ ನೀಡಲಿ. ಅದನ್ನು ನಾವು ಪರಿಗಣಿಸುತ್ತೇವೆ ಎಂದು ಹೇಳಿದರು. ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ಮಾಡುವಂತೆ ಕೊರೊನಾ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಸಲಹೆ ನೀಡಿಲ್ಲ. ಕೆಲವು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚನೆ ಕೊಟ್ಟಿದ್ದಾರೆ. ಸರ್ವಪಕ್ಷಗಳ ಸಭೆಯಲ್ಲಿ ಈ ಬಗ್ಗೆ ಎಲ್ಲರ ಅಭಿಪ್ರಾಯ ಪಡೆದು ನಂತರ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.
ಈಗಾಗಲೇ ರಾಜಧಾನಿ ಬೆಂಗಳೂರು ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ಕೊರೊನಾ ಕಫ್ರ‍್ಯೂ ವಿಸ್ತರಣೆ ಮಾಡಲಾಗಿದೆ. ಅಗತ್ಯವಾದರೆ ಇನ್ನೂ ಕೆಲವು ಜಿಲ್ಲೆಗಳಿಗೆ ಇದನ್ನು ವಿಸ್ತರಣೆ ಮಾಡುವ ಆಲೋಚನೆ ಸರ್ಕಾರದ ಮುಂದೆ ಇದೆ ಎಂದರು. ವಿಪಕ್ಷದವರು ಏನೇ ಸಲಹೆ ಕೊಟ್ಟರೂ ಅದನ್ನು ಮುಕ್ತ ಮನಸ್ಸಿನಿಂದ ನಾವು ಸ್ವೀಕರಿಸಲು ಸಿದ್ಧರಿದ್ದೇವೆ. ಕೊರೊನಾ ನಿಯಂತ್ರಣ ಕೇವಲ ಸರ್ಕಾರದ ಜವಾಬ್ದಾರಿ ಅಲ್ಲ. ಇದು ಪ್ರತಿಯೊಬ್ಬರ ಕರ್ತವ್ಯ ಎಂದು ಯಡಿಯೂರಪ್ಪ ಹೇಳಿದರು.
ಇನ್ನು ಯಾವ ಯಾವ ಜಿಲ್ಲೆಯಲ್ಲಿ ಕೊರೊನಾ ಕಫ್ರ‍್ಯೂ ವಿಸ್ತರಣೆ ಮಾಡಬೇಕು ಎಂಬುದನ್ನು ತಜ್ಞರ ಜೊತೆ ಚರ್ಚೆ ಮಾಡಲಾಗುವುದು. ರಾಜ್ಯದ ಜನರು ಕಡ್ಡಾಯವಾಗಿ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು ಎಂದು ಮನವಿ ಮಾಡಿದರು.
ಸರ್ವಪಕ್ಷ ಸಭೆಗೆ ಆಹ್ವಾನ ನೀಡಿ ಎಲ್ಲ ನಾಯಕರಿಗೆ ಇಂದು ಪತ್ರ ಬರೆಯಲಾಗುವುದು. ವಾರಾಂತ್ಯ ಲಾಕ್ಡೌನ್ ಜಾರಿ ಬಗ್ಗೆ ಸಹ ಚಿಂತನೆ ಇಲ್ಲ. ಸರ್ವಪಕ್ಷ ನಾಯಕರ ಜತೆ ಸಮಾಲೋಚನೆ ಬಳಿಕ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.
ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು, ಮಾಜಿ ಸಚಿವ ಎಚ್.ಆಂಜನೇಯ, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, ಡಾ. ಬಿ.ಆರ್ .ಅಂಬೇಡ್ಕರ್ ಅಭಿವೃದ್ದಿ ನಿಗಮದ ಅಧ್ಯಕ್ಷ ಹೆಚ್. ನಾಗೇಶ್, ಆಡಳಿತಾಧಿಕಾರಿ ರಾಕೇಶ್ಸಿಂಗ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಯವರು ಪೌರ ಕಾರ್ಮಿಕರಿಗೆ ಸಮವಸ್ತ್ರ ಹಾಗೂ ಸುರಕ್ಷತಾ ಧಿರಿಸನ್ನು ಸಾಂಕೇತಿಕವಾಗಿ ವಿತರಿಸಿದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button