ಹೈಕೋರ್ಟ್ ಅಂಗಳಕ್ಕೆ ಇಂದು ಮುಡಾ ಕೇಸ್ ವರದಿ ಸಿಎಂ ಫುಲ್ ಟೆನ್ಷನ್

ರಾಜ್ಯ ರಾಜಕಾರಣದಲ್ಲಿ ಮುಡಾ ಕೇಸ್ ಬಿರುಗಾಳಿ ಎಬ್ಬಿಸಿತ್ತು. ಖುದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಈ ಕೇಸ್ ಸುರುಳಿಯಂತೆ ಸುತ್ತಿಕೊಂಡಿದೆ. ಇನ್ನು ರಾಜ್ಯಪಾಲರೇ ಈ ಕೇಸ್ ಸಂಬಂಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರು. ಹೈಕೋರ್ಟ್ ಕೂಡ ಈ ಕೇಸ್ ಸಂಬಂಧ ಲೋಕಾಯುಕ್ತಕ್ಕೆ ಮಹತ್ವದ ಸೂಚನೆ ನೀಡಿತ್ತು.
ಇಂದು ಈ ಮುಡಾ ಕೇಸ್ ಸಂಬಂಧ ಲೋಕಾಯುಕ್ತ ಅಧಿಕಾರಿಗಳು ತನಿಖಾ ವರದಿಯನ್ನು ಹೈಕೋರ್ಟ್‌ಗೆ ಸಲ್ಲಿಕೆ ಮಾಡಲಿದ್ದಾರೆ.
ಇನ್ನು ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಬದಲಿ ನಿವೇಶನ ಹಂಚಿಕೆ ಹಗರಣ ಕೇಸ್ ಸಂಬಂಧಿಸಿದಂತೆ ಇಂದು ಹೈಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ ಕೂಡ ನಡೆಯಲಿದೆ. ಮುಡಾ ಕೇಸ್ ಅನ್ನು ಸಿಬಿಐ ತನಿಖೆಗೆ ನೀಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮನವಿ ಮಾಡಿದ್ದರು. ಈ ಸಂಬಂಧ ಲೋಕಾಯುಕ್ತ ತನಿಖೆಗೆ ಹೈಕೋರ್ಟ್ ಸೂಚನೆ ಕೊಟ್ಟಿತ್ತು.
ಅದರಂತೆ ಪ್ರಕರಣದ ತನಿಖೆ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಇಂದು ತನಿಖಾ ವರದಿಯನ್ನು ಹೈಕೋರ್ಟ್‌ಗೆ ಸಲ್ಲಿಕೆ ಮಾಡಲಿದ್ದಾರೆ. ಅಲ್ಲದೆ, ಈ ಕೇಸ್ ಅನ್ನು ಸಿಬಿಐಗೆ ವರ್ಗಾಯಿಸುವ ಸಾಧ್ಯತೆಯೂ ಇದೆ ಎಂದು ಹೇಳಲಾಗುತ್ತಿದೆ. ಹೈಕೋರ್ಟ್ ಸೂಚನೆಯ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ಪ್ರಕರಣದ ಆರೋಪಿಗಳು ಎನ್ನಲಾದ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ, ದೇವರಾಜು ಅವರ ವಿಚಾರಣೆ ನಡೆಸಿದೆ.
ಮುಡಾ ಕೇಸ್ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮೈಸೂರು ಮುಡಾ ಕಚೇರಿ ಮೇಲೆ ದಾಳಿ ನಡೆಸಿದ್ದರು. ಅಧಿಕಾರಿಗಳ ತಂಡವು ದಾಖಲೆಗಳ ಪರಿಶೀಲನೆ ನಡೆಸಿತ್ತು. ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ನೀಡಿದ ದೂರಿನ ಮೇರೆಗೆ ಇಡಿ ಕೇಸ್ ದಾಖಲಿಸಿಕೊಂಡಿತ್ತು. ಕೇಸ್‌ನಲ್ಲಿ ನಾಲ್ಕನೇ ಆರೋಪಿ ಎನ್ನಲಾದ ದೇವರಾಜು ಅವರ ಮನೆ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಕ್ರಮ ಸೈಟ್ ಹಂಚಿಕೆ ಕೇಸ್ ಸಂಬಂಧ ಸಿಎಂ ಸಿದ್ದರಾಮಯ್ಯ ಅವರ ಹೆಸರು ಪ್ರಮುಖವಾಗಿ ಕೇಳಿಬಂದಿದೆ. ಇದೇ ವಿಚಾರವಾಗಿ ಆರೋಪಿ ಸ್ಥಾನದಲ್ಲಿರುವ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕರು ಪಟ್ಟು ಹಿಡಿದಿದ್ದರು. ಮುಡಾದಲ್ಲಿ ಅಕ್ರಮ ನಡೆದಿದೆ ಎಂದು ಸಿದ್ದರಾಮಯ್ಯ ವಿರುದ್ಧ ಸ್ನೇಹಮಯಿ ಕೃಷ್ಣ ಕೇಸ್ ದಾಖಲಿಸಿದ ಬೆನ್ನಲ್ಲೇ ಇಡಿ ಅಧಿಕಾರಿಗಳು ಮುಡಾ ಕಚೇರಿ ಮೇಲೆ ದಾಳಿ ನಡೆಸಿದ್ದರು.