ತೇಜಸ್ವಿ ಸೂರ್ಯಗೆ ಮಾನ ಮರ್ಯಾದೆ ಇದ್ದರೆ ಸಾರ್ವಜನಿಕವಾಗಿ ಕ್ಷಮೆ ಕೇಳಲಿ : ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು: ಇತ್ತೀಚಿಗೆ ಹುತಾತ್ಮರಾದ ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಲು ಮೀಣ,ಮೇಷ ಎಣಿಸಿದೆ ಎಂದು ರಾಜ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಟ್ವೀಟ್ ಮೂಲಕ ಆಕ್ರೋಶ ಹೊರ ಹಾಕಿದ್ದರು. ಇದೀಗ ತೇಜಸ್ಸಿ ಸೂರ್ಯ ಅವರಿಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮುಖಾಂತರ ತಿರುಗೇಟು ನೀಡಿದ್ದಾರೆ.

ತೇಜಸ್ವಿ ಸೂರ್ಯ ಎಂಬ ಬಿಜೆಪಿ ಸಂಸದ, ತಪ್ಪು ಅರ್ಥ ಬರುವಂತೆ ನನ್ನ ಹೇಳಿಕೆಯನ್ನು ತುಂಡರಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟು ವಿಕೃತಿ ಮೆರೆದಿರುವುದು ನನ್ನ ಗಮನಕ್ಕೆ ಬಂತು. ಗದ್ದಲದ ಕಾರಣದಿಂದಾಗಿ ವರದಿಗಾರರ ಪ್ರಶ್ನೆ ಪ್ರಾರಂಭದಲ್ಲಿ ಸರಿಯಾಗಿ ಕೇಳಿರಲಿಲ್ಲ. ಪತ್ರಕರ್ತರ ಪ್ರಶ್ನೆ ಹುತಾತ್ಮರಾದ ವೀರಯೋಧ ಪ್ರಾಂಜಲ್ ಅವರ ಕುರಿತಾಗಿರುವುದು ಎಂದು ಗೊತ್ತಾದ ನಂತರ ರಾಜ್ಯ ಸರ್ಕಾರ ಪರಿಹಾರ ನೀಡಲು ಬದ್ಧವಾಗಿರುವುದನ್ನು ತಿಳಿಸಿದ್ದು ಮಾತ್ರವಲ್ಲ, ಬೇರೆ ಯಾವ ರಾಜ್ಯದಲ್ಲಿಯಾದರೂ ಹುತಾತ್ಮ ಯೋಧರಿಗೆ ಒಂದು ಕೋಟಿ ರೂಪಾಯಿ ಪರಿಹಾರ ನೀಡಿರುವುದು ಗೊತ್ತಾದರೆ ಅಷ್ಟೇ ಮೊತ್ತವನ್ನು ನೀಡಲು ಸಿದ್ಧ ಎಂದೂ ತಿಳಿಸಿದ್ದೇನೆ.

ಪತ್ರಕರ್ತರ ಮುಂದೆ ನಾನು ನೀಡಿರುವ ಹೇಳಿಕೆ ಪೂರ್ಣ ವಿಡಿಯೋವನ್ನು ಇಲ್ಲಿ ಹಂಚಿಕೊಂಡಿದ್ದೇನೆ. ರಾಜಕೀಯ ದುರುದ್ದೇಶದಿಂದ ಈ ವಿಡಿಯೋವನ್ನು ತಿರುಚಿ ಹಂಚಿಕೊಂಡಿರುವ ತೇಜಸ್ವಿ ಸೂರ್ಯ ಅವರು ಹುತಾತ್ಮ ಪ್ರಾಂಜಲ್ ಮತ್ತು ಅವರ ಕುಟುಂಬ ವರ್ಗಕ್ಕೆ ಮಾತ್ರವಲ್ಲ ಸಮಸ್ತ ಯೋಧ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ.

ದೇಶ, ದೇವರು, ಸೈನಿಕರು ಎಲ್ಲವೂ ಭಾರತೀಯ ಜನತಾ ಪಕ್ಷಕ್ಕೆ ರಾಜಕೀಯ ವ್ಯಾಪಾರದ ಸರಕುಗಳು ಮಾತ್ರ ಎನ್ನುವುದನ್ನು ದೇಶದ ಜನರು ಅರ್ಥಮಾಡಿಕೊಂಡಿದ್ದಾರೆ. ಹುತಾತ್ಮ ಪ್ರಾಂಜಲ್ ಅವರ ಮೃತದೇಹವನ್ನು ಇಲ್ಲಿಗೆ ತಂದಿದ್ದ ದಿನ ಪ್ರಧಾನಿ ನರೇಂದ್ರಮೋದಿ ಅವರು ಬೆಂಗಳೂರಿನಲ್ಲಿಯೇ ಇದ್ದರೂ ಅಂತಿಮ ದರ್ಶನ ಮಾಡಿ ಹೆತ್ತವರಿಗೆ ಸಾಂತ್ವನ ಹೇಳುವ ಸೌಜನ್ಯವನ್ನೂ ತೋರಲಿಲ್ಲ. ಇದನ್ನು ನಾವು ವಿವಾದ ಮಾಡಲು ಹೋಗಲಿಲ್ಲ ಎಂದಿದ್ದಾರೆ.

Latest Indian news

Popular Stories