ಬೆಂಗಳೂರು: ಸರಕಾರದ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನದಿಂದ ಮಂಗನಕಾಯಿಲೆಗೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್- ಕೆಎಫ್ಡಿ)ಇಬ್ಬರು ಬಲಿಯಾಗಿದ್ದು ಮಲೆನಾಡು ಜಿಲ್ಲೆಗಳಲ್ಲಿ ರೋಗ ವ್ಯಾಪಕವಾಗಿ ಹರಡುತ್ತಿದ್ದು ಆತಂಕಕಾರಿ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.
ಕಳೆದ ನವೆಂಬರ್ ತಿಂಗಳಿನಲ್ಲೇ ಮಲೆನಾಡು ಭಾಗದ ಅಲ್ಲಲ್ಲಿ ಕಾಯಿಲೆ ಕಾಣಿಸಿಕೊಂಡ ಬಗ್ಗೆ ವರದಿಯಾಗಿತ್ತು. ಮಾಧ್ಯಮಗಳಲ್ಲೂ ಈ ಕುರಿತು ಸುದ್ದಿ ಪ್ರಕಟವಾದರೂ ಸರಕಾರ ಎಚ್ಚೆತ್ತುಕೊಳ್ಳಲಿಲ್ಲ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈಫಲ್ಯವೇ ಕಾಯಿಲೆ ವ್ಯಾಪಕವಾಗಿ ಹರಡಲು ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೋಗ ಹರಡುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿ ಪ್ರಕಟವಾದ ಮತ್ತು ಎರಡು ಸಾವು ಸಂಭವಿಸಿದ ಬಳಿಕ ಸುದೀರ್ಘ ನಿದ್ದೆಯಿಂದ ಎಚ್ಚೆತ್ತ ಆರೋಗ್ಯ ಇಲಾಖೆ ಮಾರ್ಗಸೂಚಿ ಹೊರಡಿಸಿತು. ಆ ಬಳಿಕವಷ್ಟೇ ಹಿರಿಯ ಅಧಿಕಾರಿಗಳು ಶಿವಮೊಗ್ಗಕ್ಕೆ ಧಾವಿಸಿ ಸಭೆ ನಡೆಸುವ ಶಾಸ್ತ್ರ ಮಾಡಿದ್ದಾರೆ ಎರಡು ತಿಂಗಳ ಮೊದಲೇ ಎಚ್ಚೆತ್ತುಕೊಂಡಿದ್ದಿದ್ದರೆ ಅಮಾಯಕ ಜೀವಗಳನ್ನು ಉಳಿಸಿಕೊಳ್ಳಬಹುದಿತ್ತು ಎಂದು ಪತ್ರಿಕಾ ಹೇಳಿಕೆಯಲ್ಲಿ ಇಲಾಖೆ ಕಾರ್ಯವೈಖರಿಗೆ ಕಿಡಿಕಾರಿದ್ದಾರೆ.