ಗ್ಯಾರಂಟಿಗಳನ್ನು ಮುಟ್ಟೋದು ಬಿಜೆಪಿ- ದಳದ ಹಣೆಯಲ್ಲಿ ಬರೆದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು

ಬೆಂಗಳೂರು: “ಕಾಂಗ್ರೆಸ್ ಗ್ಯಾರಂಟಿಗಳನ್ನು ಮುಟ್ಟುವುದು ಬಿಜೆಪಿ- ದಳದ ಹಣೆಯಲ್ಲಿ ಬರೆದಿಲ್ಲ. ಇದಕ್ಕೆ ಕಾಂಗ್ರೆಸ್ ಅವಕಾಶ ಕೊಡುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ 20 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಬಿಜೆಪಿ ಸಂಸದ ಕರಡಿ ಸಂಗಣ್ಣ ಮತ್ತಿತರರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಿಷ್ಟು;

ಕೇಂದ್ರದಲ್ಲಿ ಎನ್ ಡಿಎ ಅಧಿಕಾರಕ್ಕೆ ಬಂದರೆ ಗ್ಯಾರಂಟಿಗಳನ್ನು ತೆಗೆದುಹಾಕುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. ಆದರೆ ಯಡಿಯೂರಪ್ಪ, ಕುಮಾರಸ್ವಾಮಿ, ಅಶೋಕ ಅವರಿಗೆ ಗ್ಯಾರಂಟಿಗಳನ್ನು ಮುಟ್ಟಲು ರಾಜ್ಯದ ಜನ ಅವಕಾಶ ನೀಡುವುದಿಲ್ಲ.

ಕಾಂಗ್ರೆಸ್ ಪಕ್ಷದ ಮೇಲಿನ ಜನರ ಪ್ರೀತಿ ಕಂಡು ಅವರಿಗೆ ಅಸೂಯೆ ಆಗಿದೆ. ಆದ ಕಾರಣ ನಮ್ಮ ತಾಯಂದಿರ ಬಗ್ಗೆ ಮಾತನಾಡುತ್ತಿದ್ದಾರೆ. ತಾಯಂದಿರು ದಾರಿ ತಪ್ಪಿದ್ದಾರೆ ಎಂದು ಹೇಳಿಕೆ ನೀಡಿರುವ ಅವರಿಗೆ ರಾಜ್ಯದ ಜನರೇ ಉತ್ತರ ನೀಡಲಿದ್ದಾರೆ” ಎಂದು ಹೇಳಿದರು.

ಐದು ಬೆರಳು ಸೇರಿ ಕೈ ಮುಷ್ಠಿಯಾಯಿತು, ಐದು ಗ್ಯಾರಂಟಿಗಳು ಸೇರಿ ಕೈ ಗಟ್ಟಿಯಾಯಿತು ಎನ್ನುವುದಕ್ಕೆ ನಿಮ್ಮ ಹೇಳಿಕೆಗಳೇ ಸಾಕ್ಷಿ. ಗೀತಾ ಶಿವರಾಜ್ ಕುಮಾರ್ ಅವರ ನಾಮಪತ್ರ ಸಲ್ಲಿಕೆ ವೇಳೆ ಪಕ್ಷ ಭೇದ ಮರೆತು ಸೇರಿದ್ದ ಜನರನ್ನು ನೋಡಿದ ನಂತರ ಅನಿಸಿತು, ಯಾವುದೇ ಕಾರಣಕ್ಕೂ ಯಡಿಯೂರಪ್ಪ ಅವರ ಸುಪುತ್ರ ರಾಘವೇಂದ್ರ ಗೆಲ್ಲಲು ಸಾಧ್ಯವಿಲ್ಲ ಎಂದರು

Latest Indian news

Popular Stories