ಬೆಂಗಳೂರು: ಉಡುಪಿಯ ಖಾಸಗಿ ಕಾಲೇಜೊಂದರ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ರಾಜಕೀಯ ಬಣ್ಣ ಬೇಡ, ಮಕ್ಕಳ ಹಿತದೃಷ್ಟಿ ಮುಖ್ಯ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಇಂತ ಪ್ರಕರಣಗಳು ಸಮಾಜಕ್ಕೆ ಕಳಂಕ, ತಪ್ಪಿತಸ್ಥರ ವಿರುದ್ಧ ಕಾನೂನಿನಡಿ ಕ್ರಮಕೈಗೊಳ್ಳಲು ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು. ಯಾವುದೇ ಜಾತಿ ಧರ್ಮ ಮುಖ್ಯ ಅಲ್ಲ, ಮಕ್ಕಳ ಹಿತಾಸಕ್ತಿ ಮುಖ್ಯ ಎಂದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಎಫ್ ಐಆರ್ ದಾಖಲಾಗಿದೆ ಎಂದು ತಿಳಿಸಿದರು. ಮಣಿಪುರ ಇಡೀ ರಾಜ್ಯವೇ ಹೊತ್ತಿ ಉರಿಯುತ್ತಿದೆ, ಅದ್ರ ಬಗ್ಗೆ ತಲೆಕೆಡಿಸಿಕೊಳ್ಳದ ರಾಜ್ಯದ ವಿರೋಧ ಪಕ್ಷ, ಉಡುಪಿ ಪ್ರಕರಣಕ್ಕೆ ರಾಜಕೀಯ ಬಣ್ಣ ಬಳಿಯಲು ಯತ್ನಿಸುತ್ತಿದೆ ಎಂದು ಸಚಿವರು ಕಿಡಿ ಕಾರಿದರು. ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿರುವುದಾಗಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.