ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಿಮಿತ್ತ ಜಿಲ್ಲೆಯಲ್ಲಿ 260 ಕಿ.ಮೀ. ಉದ್ದದ ಮಾನವ ಸರಪಳಿ ರಚನೆ :ಉ.ಕ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಜಿಲ್ಲೆಯಲ್ಲಿ ಒಟ್ಟು ಸುಮಾರು 1.5 ಲಕ್ಷ ಜನರನ್ನು ಕಾರ್ಯಕ್ರಮದಲ್ಲಿ ಭಾಗಿ

ಕಾರವಾರ : ಸೆಪ್ಟಂಬರ್ 15 ರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಜಿಲ್ಲೆಯ ಹಳಿಯಾಳ ತಾಲೂಕಿನ ಮಾವಿನಕೊಪ್ಪದಿಂದ ಭಟ್ಕಳ ತಾಲೂಕಿನ ಶಿರೂರುವರೆಗೆ 260 ಕಿ.ಮೀ. ಉದ್ದದ ಮಾನವ ಸರಪಳಿ ರಚಿಸಲು ಅಗತ್ಯವಿರುವ ಎಲ್ಲಾ ಸಿದ್ದತೆಗಳನ್ನು ಕೈಗೊಳ್ಳುವಂತೆ ಜಿಲ್ಲಾ ಸಮಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು.

ಅವರು ಬುಧವಾರ , ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ವೀಡಿಯೋ ಕಾನ್ಫರೆನ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಪ್ರಯುಕ್ತ ಈ ಬಾರಿ ರಾಜ್ಯದಲ್ಲಿ ಬೀದರ್ ನಿಂದ ಚಾಮರಾಜನಗರದವರೆಗೆ ಮಾನವ ಸರಪಳಿ ನಿರ್ಮಿಸುವ ಮೂಲಕ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದ್ದು, ಧಾರವಾಡ ಜಿಲ್ಲೆಯಲ್ಲಿ ನಿರ್ಮಿಸಲಾಗುವ ಮಾನವ ಸರಪಳಿಯನ್ನು ಜಿಲ್ಲೆಯ ಗಡಿ ತಾಲೂಕಾದ ಹಳಿಯಾಳದಿಂದ ಸೇರ್ಪಡೆ ಮಾಡಿಕೊಂಡು ಯಲ್ಲಾಪುರ, ಶಿರಸಿ, ಕುಮಟಾ, ಹೊನ್ನಾವರ ಮತ್ತು ಭಟ್ಕಳದ ಶಿರೂರು ವರೆಗೆ ರಚಿಸಲು ಉದ್ದೇಶಿಸಲಾಗಿದೆ. ಜಿಲ್ಲೆಯ ಸಾರ್ವಜನಿಕರು, ಸಂಘ ಸಂಸ್ಥೆಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು,ಎಲ್ಲಾ ಇಲಾಖೆಗಳ ನೌಕರರು ಮಾನವ ಸರಪಳಿಯ ಮೂಲಕ ಸೇರಿ , 260 ಕಿಮೀ ದೂರದವರೆಗೆ ಮಾನವ ಸರಪಳಿ ರಚಿಸಲು ಸೂಕ್ತ ಯೋಜನೆ ರೂಪಿಸಬೇಕು ಎಂದರು.

ಮಾನವ ಸರಪಳಿ ರಚನೆ ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.

ಜಿಲ್ಲೆಯಲ್ಲಿ ಈ ಮಾನವ ಸರಪಳಿ ರಚನೆ ಕಾರ್ಯಕ್ರಮಕ್ಕೆ ಪ್ರತೀ ಕಿ.ಮೀ. ಗೆ 500 ರಿಂದ 600 ಜನ ಭಾಗವಹಿಸಬೇಕಾದ ಅಗತ್ಯತೆಯಿದೆ‌ . ಜಿಲ್ಲೆಯಲ್ಲಿ ಒಟ್ಟು ಸುಮಾರು 1.5 ಲಕ್ಷ ಜನರನ್ನು ಈ ಕಾರ್ಯಕ್ರಮದಲ್ಲಿ ಭಾಗಿಗಳನ್ನಾಗಿ ಮಾಡಬೇಕಿರುವುದರಿಂದ, ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿ ಪಿಡಿಓ ಗಳು ಮತ್ತು ಶಾಲಾ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಹಾಗೂ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರ ಸಹಕಾರ ಪಡೆಯುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಯಾವುದೇ ಹಂತದಲ್ಲೂ ಈ ಸರಪಳಿ ತುಂಡಾಗದಂತೆ ಎಚ್ಚರಿಕೆ ವಹಿಸುವಂತೆ ಆದೇಶಿಸಿದರು.‌

ಜಿಲ್ಲೆಯಲ್ಲಿನ ಎಲ್ಲಾ ಹಾಸ್ಟೆಲ್ ಗಳ ವಿದ್ಯಾರ್ಥಿಗಳು ಕೂಡಾ ಈ ಸರಪಳಿಯಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು. ಹಾಗೂ ಸರಪಳಿ ರಚನೆಗೆ ಜನಸಂಖ್ಯೆ ಕೊರತೆಯಾಗುವ ಪ್ರದೇಶಗಳಿಗೆ , ಹೆಚ್ಚುವರಿ ಜನರು ಇರುವ ಪ್ರದೇಶಗಳಿಂದ ಸಾರಿಗೆ ವ್ಯವಸ್ಥೆ ಮೂಲಕ ತಲುಪಿಸುವ ಕಾರ್ಯ ಮಾಡಬೇಕು. ಈ ಕಾರ್ಯಕ್ರಮದ ಸಂಪೂರ್ಣ ಯಶಸ್ಸಿಗಾಗಿ ಸವಿವರವಾದ ಸೂಕ್ತ ಯೋಜನೆಯನ್ನು ತಯಾರಿಸಿ ಸಲ್ಲಿಸುವಂತೆ ಸೂಚಿಸಿದರು.

ಈ ಕಾರ್ಯಕ್ರಮಕ್ಕೆ ಪೊಲೀಸ್ ಇಲಾಖೆವತಿಯಿಂದ ಅಗತ್ಯ ಭದ್ರತೆ ಮತ್ತು ಸಂಚಾರ ಸುರಕ್ಷತೆ ಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲೆಯ ಎಲ್ಲಾ ನಗರಸ್ಥಳೀಯ ಸಂಸ್ಥೆಗಳು ಹಾಗೂ ಎಲ್ಲಾ ಇಲಾಖೆಗಳು ತಮ್ಮ ಸಂಪೂರ್ಣ ಸಹಕಾರ ನೀಡುವ ಮೂಲಕ ಜಿಲ್ಲೆಯಲ್ಲಿ ಅತ್ಯಂತ ಯಶಸ್ವಿ ಹಾಗೂ ಮಾದರಿಯಾಗಿ ಕಾರ್ಯಕ್ರಮ ಆಯೋಜನೆ ಮಾಡಲು ಪರಸ್ಪರ ಸಮನ್ವಯದಿಂದ ಕೆಲಸ ನಿರ್ವಹಿಸಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಉಮೇಶ್ ಹಾಗೂ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

Latest Indian news

Popular Stories