Crime

ಕಾಮಗಾರಿ ಪರಿಶೀಲನೆಗೆ ವಿಶೇಷಾಧಿಕಾರಿ ನೇಮಿಸಿ

ಬೀದರ್,ಜ.11:- ವಿವಿಧ ಇಲಾಖೆಗಳಿಂದ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆಗೆ ವಿಶೇಷ ಅಧಿಕಾರಿಯನ್ನು ನೇಮಕ ಮಾಡಬೇಕು ಎಂದು ಬೀದರ್ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಒತ್ತಾಯಿಸಿದೆ.
ಸಂಸ್ಥೆಯ ಅಧ್ಯಕ್ಷ ಬಿ.ಜಿ. ಶೆಟಕಾರ್, ಕಾರ್ಯದರ್ಶಿ ಡಾ. ವೀರೇಂದ್ರ ಶಾಸ್ತ್ರಿ ಅವರು ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ಗುಣಮಟ್ಟದ ಕಾಮಗಾರಿ ನಡೆಯುತ್ತಿರುವುದನ್ನು ಖಾತರಿಪಡಿಸಿಕೊಳ್ಳಲು ಇಂತಹ ವ್ಯವಸ್ಥೆಯ ಅಗತ್ಯ ಇದೆ ಎಂದು ಅವರು ಪ್ರತಿಪಾದಿಸಿದ್ದಾರೆ.
ನಗರದ ವಿವಿಧ ಭಾಗಗಳÀಲ್ಲಿ ಲೋಕೋಪಯೋಗಿ ಇಲಾಖೆ, ನಗರಸಭೆ ಹಾಗು ನಗರಾಭಿವೃದ್ಧಿ ಕೋಶದಿಂದ ಕಾಮಗಾರಿ ನಡೆಯುತ್ತಿವೆ. ವಿಶೇಷವಾಗಿ ಒಳಚರಂಡಿಗಳ ನಿರ್ಮಾಣ, ಹೊಸ ರಸ್ತೆಗಳ ನಿರ್ಮಾಣ ಹಾಗು ರಸ್ತೆಗಳ ಮೇಲಿನ ತಗ್ಗು-ಗುಂಡಿಗಳನ್ನು ಮುಚ್ಚಿಸುವ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಈ ಕಾಮಗಾರಿಗಳಲ್ಲಿ ಗುಣಮಟ್ಟದ ಮತ್ತು ನಿಗದಿತ ಪ್ರಮಾಣದ ಸಾಮಗ್ರಿ ಬಳಕೆ ಮಾಡುವುದನ್ನು ಖಾತ್ರಿಪಡಿಸಿಕೊಳ್ಳಬೇಕಾದ ಅಗತ್ಯ ಇದೆ ಎಂದು ಶೆಟಕಾರ್ ತಿಳಿಸಿದ್ದಾರೆ.
ಕಾಮಗಾರಿ ಗುಣಮಟ್ಟದ್ದಾಗಿದ್ದಲ್ಲಿ ಅನುದಾನದ ಸದ್ಬಳಕೆಯಾಗುತ್ತದೆ. ಜೊತೆಗೆ ಜನರಿಗೂ ಅನುಕೂಲವಾಗುತ್ತದೆ. ಕಾಮಗಾರಿ ಕಳಪೆಯಾಗಿದ್ದಲ್ಲಿ ಜನ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಬೇರೆ ಬೇರೆ ಕಾಮಗಾರಿಗಳಿಗಾಗಿ ಸರಕಾರ ಲಕ್ಷಾಂತರ ರೂ. ಖರ್ಚು ಮಾಡುತ್ತಿದೆ. ಆದರೆ, ಇದರಿಂದ ಜನರಿಗೆ ಹೆಚ್ಚಿನ ಪ್ರಯೋಜನ ಆಗುತ್ತಿಲ್ಲ. ವಿಶೇಷಾಧಿಕಾರಿಯನ್ನು ನೇಮಕ ಮಾಡಿ ಎಲ್ಲ ಕಾಮಗಾರಿಗಳ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸುವ, ನಿಗಾ ಇಡುವ ವ್ಯವಸ್ಥೆ ಮಾಡಿದ್ದಲ್ಲಿ ಅನುಕೂಲವಾಗುತ್ತದೆ. ಸರಕಾರದ ಅನುದಾನ ವ್ಯರ್ಥವಾಗುವುದನ್ನು ತಡೆಯಲು ಸಾಧ್ಯವಾಗುತ್ತದೆ ಎಂದಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button