
ಬಿಡಿಎ ಅಕ್ರಮ: ಭ್ರಷ್ಟರಿಗೆ ರಕ್ಷಣೆ ಇಲ್ಲ ಎಂದ ಬಿಎಸ್ವೈ
ಬೆಂಗಳೂರು, 9- ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ(ಬಿಡಿಎ) ದಲ್ಲಿ ನಡೆದ ಹಗರಣ ಸಂಬಂಧ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಇಲ್ಲಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಡಿಎನಲ್ಲಿ ನಡೆಯುತ್ತಿರುವ ಅವ್ಯವಹಾರಗಳ ಬಗ್ಗೆ ನನಗೆ ಮಾಹಿತಿ ಬಂದಿದೆ.ಮುಂದೆ ಯಾವುದೇ ರೀತಿಯ ಅಕ್ರಮ ಅಥವಾ ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಭಾರೀ ಪ್ರಮಾಣದ ಗೋಲ್ಮಾಲ್ಗಳು ನಡೆಯುತ್ತಿರುವುದರ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿವೆ. ಕೆಲವರು ಅಕ್ರಮಗಳನ್ನು ಸೃಷ್ಟಿಸಿ ಹಗರಣ ಮಾಡಲು ಹೊರಟಿದ್ದಾರೆ. ಅದಕ್ಕೆ ಅವಕಾಶ ನೀಡದಂತೆ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರಿಗೆ ಸೂಚಿಸಿದ್ದೇನೆ ಎಂದರು. ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳನ್ನು ಇಲ್ಲಿ ಮುಂದುವರೆಸುವುದರಲ್ಲಿ ಅರ್ಥವೇ ಇಲ್ಲ. ಈಗಾಗಲೇ ಕೆಲವು ಅಧಿಕಾರಿಗಳನ್ನು ಮಾತೃ ಇಲಾಖೆಗೆ ನಿಯೋಜನೆ ಮಾಡುವಂತೆ ಸೂಚಿಸಲಾಗಿದೆ. ಹಗರಣದಲ್ಲಿ ಯಾರೇ ಭಾಗಿಯಾದರೂ ಅವರ ವಿರುದ್ಧ ಶಿಸ್ತುಕ್ರಮ ಖಚಿತ ಎಂದು ಎಚ್ಚರಿಕೆ ನೀಡಿದರು.
ಬಳ್ಳಾರಿ ಜಿಲ್ಲೆ ವಿಭಜಿಸಿ ವಿಜಯನಗರ ಜಿಲ್ಲೆ ರಚನೆ ಮಾಡಿರುವುದಕ್ಕೆ ಶಾಸಕ ಸೋಮಶೇಖರ ರೆಡ್ಡಿ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಸಿಎಂ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.




