
ಬೀದರ್: ಈಶಾನ್ಯ ಕರ್ನಾಟಕ ಶಿಕ್ಷಕರ ಮತಕ್ಷೇತ್ರದ ಚುನಾವಣೆಗೆ 4862 ಮತದಾರರು
ಬೀದರ್,ಅ.5:- ಕರ್ನಾಟಕ ವಿಧಾನ ಪರಿಷತ್ತಿಗೆ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆ 2020ರ ಅಂಗವಾಗಿ ಬೀದರ ಜಿಲ್ಲೆಯಲ್ಲಿ ಒಟ್ಟು 34 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಸದರಿ ಚುನಾವಣೆಗೆ ಪುರುಷ ಮತದಾರರು 3390 ಹಾಗೂ ಮಹಿಳಾ ಮತದಾರರು 1472 ಸೇರಿ ಒಟ್ಟು 4862 ಮತದಾರರು ಇರುತ್ತಾರೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ರಾಮಚಂದ್ರನ್ ಆರ್ ಅವರು ಮಾಹಿತಿ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಕ್ಟೋಬರ್ 5ರಂದು ಕರ್ನಾಟಕ ವಿಧಾನ ಪರಿಷತ್ತಿಗೆ ಈಶಾನ್ಯ ಕರ್ನಾಟಕ ಶಿಕ್ಷಕರ ಮತಕ್ಷೇತ್ರದ ಚುನಾವಣೆ–2020ರ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಸದರಿ ಕರ್ನಾಟಕ ವಿಧಾನ ಪರಿಷತ್ತಿಗೆ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆ-2020ರ ಮಾದರಿ ನೀತಿ ಸಂಹಿತೆಯು 29-09-2020ರಿಂದಲೇ ಜಾರಿ ಮಾಡಲಾಗಿದೆ ಎಂದು ತಿಳಿಸಿದರು.
ಅಕ್ಟೋಬರ್ 01ರಂದು ಅಧಿಸೂಚನೆ ಹೊರಡಿಸಲಾಗಿದೆ. ಅಕ್ಟೋಬರ್ 8ರಂದು ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕವಾಗಿದೆ. 09-10-2020 (ಶುಕ್ರವಾರ)ರಂದು ನಾಮ ಪತ್ರಗಳ ಪರಿಶೀಲನೆ ನಡೆಯಲಿದೆ. 12-10-2020ರಂದು ನಾಮ ಪತ್ರಗಳನ್ನು ಹಿಂದಕ್ಕೆ ಪಡೆಯುವ ಕೊನೆಯ ದಿನಾಂಕಾಗಿದೆ. 28-10-2020 (ಬುಧವಾರ) ರಂದು ಮತದಾನ ನಡೆಯಲಿದೆ. 02-11-2020 (ಸೋಮವಾರ) ಬೆಳ್ಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ನಡೆಯಲಿದೆ. 05-11-2020 (ಗುರುವಾರ) ರಂದು ಚುನಾವಣೆ ಪ್ರಕ್ರಿಯೆ ಮುಕ್ತಾಯವಾಗಲಿದೆ.
ಕರ್ನಾಟಕ ವಿಧಾನ ಪರಿಷತ್ತಿಗೆ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆ-2020ರ ಅಂಗವಾಗಿ ಈಗಾಗಲೆ ವಿವಿಧ ಚುನಾವಣೆ ಕೆಲಸಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಚುನಾವಣೆ ಪ್ರಕ್ರಿಯೆಯಲ್ಲಿ ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡದಂತೆ ತಡೆಗಟ್ಟಲು ವಿಶೇಷವಾಗಿ ಕೋವಿಡ್-19 ರ ನೋಡಲ್ ಅಧಿಕಾರಿಯನ್ನಾಗಿ ಸಹಾಯಕ ಆಯುಕ್ತರು ಬೀದರ ಉಪ ವಿಭಾಗ ಬೀದರ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಸದರಿ ಚುನಾವಣೆಯನ್ನು ಸುಗಮವಾಗಿ ನಡೆಸುವ ಸಲುವಾಗಿ ಜಿಲ್ಲಾ ಮಟ್ಟದಲ್ಲಿ ಹಾಗೂ ತಾಲ್ಲೂಕು ಮಟ್ಟದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ತಂಡಗಳನ್ನು ರಚಿಸಲಾಗಿರುತ್ತದೆ.
ಸದರಿ ಚುನಾವಣೆ ಪ್ರಯುಕ್ತ ಯಾವುದೇ ನೀತಿ ಸಂಹಿತೆ ಉಲ್ಲಂಘನೆ ಕುರಿತು ದೂರುಗಳಿದ್ದಲ್ಲಿ ಜಿಲ್ಲಾಧಿಕಾರಿಯವರ ಕಛೇರಿ ಕಂಟ್ರೋಲ್ ರೂಮ್ ದೂರವಾಣಿ ಸಂಖ್ಯೆ 08482-226290ಕ್ಕೆ ಕರೆ ಮಾಡಿ ದೂರು ಸಲ್ಲಿಸಬಹುದು ಎಂದು ಇದೆ ವೇಳೆ ಜಿಲ್ಲಾಧಿಕಾರಿಗಳು ತಿಳಿಸಿದರು.
ಮುಖ್ಯ ಚುನಾವಣಾಧಿಕಾರಿಗಳ ನಿರ್ದೇಶನದಂತೆ ಕೋವಿಡ–19 (ಕೊರೋನಾ ವೈರಸ್) ಸಾಂಕ್ರಮಿಕವಾಗಿ ಹರಡದಂತೆ ಮುನ್ನೆಚ್ಚರಿಕೆಯಾಗಿ ಚಾಚು ತಪ್ಪದೆ ಪಾಲಿಸುತ್ತಾ ಹಾಗೂ ಸದರಿ ಚುನಾವಣೆಯ ಮತದಾರರನ್ನು ಮತಗಟ್ಟೆ ಸಿಬ್ಬಂದಿಗಳನ್ನಾಗಿ ನೇಮಿಸಬಾರದೆಂಬ ಅಂಶವನ್ನು ಗಣನೆಗೆ ತೆಗೆದುಕೊಂಡು ಮತಗಟ್ಟೆ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ನೇಮಕಾತಿ ಮಾಡುವ ಕಾರ್ಯವು ಪ್ರಗತಿಯಲ್ಲಿರುತ್ತದೆ ಎಂದು ಇದೆ ವೇಳೆ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗವಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್., ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ ಹಾಗೂ ಇತರರು ಇದ್ದರು.




