Crime

ಬೀದರ್ ಜಿಲ್ಲೆಯ ನಾನಾ ಶಾಲೆಗಳಲ್ಲಿ ಮೂಲ ಸೌಕರ್ಯ ಪರಿಶೀಲಿಸಿದ ಶಿಕ್ಷಣ ಸಚಿವರು

ಬೀದರ್ ಸೆಪ್ಟೆಂಬರ್ 29: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರಾದ ಎಸ್.ಸುರೇಶಕುಮಾರ್ ಅವರು ಸೆ.29ರಂದು ಜಿಲ್ಲೆಯ ವಿವಿಧ ಶಾಲೆಗಳಿಗೆ ಭೇಟಿ ನೀಡಿ, ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು.
ಹುಮನಾಬಾದ ತಾಲೂಕಿನ ಮನ್ನಾಏಖ್ಖೇಳಿಯಲ್ಲಿರುವ ಪ್ರೀಯಾ ಹಿರಿಯ ಪ್ರಾಥಮಿಕ ಶಾಲೆ, ನರೇಂದ್ರ ಹಿರಿಯ ಪ್ರಾಥಮಿಕ ಶಾಲೆ, ಬೀದರ ತಾಲೂಕಿನ ಭಂಗೂರ್‍ನಲ್ಲಿರುವ ನೈಟಿಂಗೆಲ್ ಪಬ್ಲಿಕ್ ಸ್ಕೂಲ್, ಯಾಕತಪೂರ ಗ್ರಾಮದ ಇನ್ಫೆಂಟ್ ಜೀಸಸ್ ಹಿರಿಯ ಪ್ರಾಥಮಿಕ ಶಾಲೆ, ಬೀದರ ನಗರದಲ್ಲಿರುವ ಜನಸೇವಾ ಹಿರಿಯ ಪ್ರಾಥಮಿಕ ಶಾಲೆ, ರಹೇಮಾ ಕಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಶಾಲೆಗಳ ಕಟ್ಟಡದ ಸ್ಥಿತಿಗತಿ, ಶೌಚಾಲಯ ವ್ಯವಸ್ಥೆ, ಕುಡಿಯುವ ನೀರಿನ ಸೌಕರ್ಯ ಸೇರಿದಂತೆ ಹಲವಾರು ಮಾಹಿತಿ ಪಡೆದುಕೊಂಡರು.
ಕೆಲವೊಂದು ಶಾಲೆಗಳಲ್ಲಿ ಉತ್ತಮ ಕಟ್ಟಡ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೇ ಇರುವುದನ್ನು ಕಂಡು ಸಚಿವರು ತೀವ್ರ ಬೇಸರ ವ್ಯಕ್ತಪಡಿಸಿದರು. ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಮೂಲಭೂತ ಸೌಕರ್ಯಗಳಿಲ್ಲದೇ ನಡೆಸಲಾಗುತ್ತಿರುವ ಶಾಲೆಗಳನ್ನು ಗುರುತಿಸಿ, ವರದಿ ಸಲ್ಲಿಸಬೇಕು ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಇದೆ ವೇಳೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಬೀದರ ಜಿಲ್ಲೆಯ ಕೆಲವೆಡೆ ಮೂಲಭೂತ ಸೌಕರ್ಯಗಳಿಲ್ಲದೇ ಶಾಲೆಗಳನ್ನು ನಡೆಸಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಅರವಿಂದಕುಮಾರ ಅರಳಿ ಅವರು ಅಧಿವೇಶನದಲ್ಲಿ ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ ಖುದ್ದಾಗಿ ವೀಕ್ಷಿಸುವ ಉದ್ದೇಶದಿಂದ ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಎಲ್ಲಾ ವಿವರಗಳನ್ನು ಪಡೆಯುತ್ತಿದ್ದೇನೆ. ಕನಿಷ್ಠ ಸೌಕರ್ಯಗಳಿಲ್ಲದೆಯೇ ಶಾಲೆಗಳನ್ನು ನಡೆಸಲು ಅನುಮತಿ ನೀಡಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಚಿವರು ಇದೆ ವೇಳೆ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಅರವಿಂದಕುಮಾರ ಅರಳಿ, ಶಿಕ್ಷಣ ಇಲಾಖೆಯ ಕಲಬುರಗಿ ವಿಭಾಗದ ಅಪರ ಶಿಕ್ಷಣ ಆಯುಕ್ತರಾದ ನಳೀನ್ ಅತುಲ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಗಂಗಣ್ಣ ಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಸೂರ್ಯಕಾಂತ ಮದಾನೆ, ಬೀದರ ಡಯಟ್ ಪ್ರಾಂಶುಪಾಲರಾದ ಶಶಿಕಾಂತ ಮರ್ತುಳೆ, ಬಿಸಿಯೂಟ ಅಧಿಕಾರಿ ಇನಾಯತ್ ಅಲಿ ಸಿಂಧೆ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button