CrimeFeatured StoryUdupi

ಡೇವಿಡ್ ಡಿಸೋಜಾ ಹತ್ಯಾ ಪ್ರಕರಣ: ಮತ್ತೋರ್ವನ ಬಂಧನ

ಉಡುಪಿ: ಕಾಪು ತಾಲೂಕಿನ ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್‌ ಕಾಂಪ್ಲೆಕ್ಸ್‌ನಲ್ಲಿ ಪ್ರಿನ್ಸ್ ಎಂಟರ್‌ಪ್ರೈಸಸ್‌ನ ಮಾಲಕ ಡೇವಿಡ್ ಡಿಸೋಜಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆ.7ರಂದು ಮಧ್ಯಾಹ್ನ 3.45ರ ಸುಮಾರಿಗೆ ಮೋಟಾರ್‌ಸೈಕಲ್‌ನಲ್ಲಿ ಬಂದಿದ್ದ ಆರೋಪಿಗಳ ಪೈಕಿ ಸಹಸವಾರನು ಪಿಸ್ತೂಲ್‌ನಿಂದ ಡೇವಿಡ್ ಡಿಸೋಜಾ ಅವರ ತಲೆಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದ. ಈ ಕುರಿತು ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದ ಅನ್ಮೋಲ್ ರಸ್ತೋಗಿ ಹಾಗೂ ಜಿಯಾಹುಲ್ ವಾಜುಲ್ ಶೇಖ್ ಅಲಿಯಾಸ್ ದೀಪಕ್ ಅವರನ್ನು ಪೊಲೀಸರು ಈಗಾಗಲೇ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಅಲ್ಲದೆ, ಕೃತ್ಯಕ್ಕೆ ಇತರ ಆರೋಪಿಗಳೊಂದಿಗೆ ಸೇರಿ ಅಪರಾಧಿಕ ಒಳಸಂಚು ರೂಪಿಸಿ ಹಣಕಾಸು ನೆರವು ನೀಡಿದ ಆರೋಪದಡಿ ಮೊಹಮ್ಮದ್ ಇರ್ಷಾದ್, ಚಿರಾಗ್ ಪೂಜಾರಿ, ಸದಾನಂದ ದೇವಾಡಿಗ ಹಾಗೂ ಕಿಶೋರ್ ರಾಮ ಪೂಜಾರಿ ಅವರನ್ನು ಬಂಧಿಸಲಾಗಿತ್ತು.
ಪ್ರಕರಣದ ಮತ್ತೊಬ್ಬ ಆರೋಪಿ ರಾಜು ವಿರುದ್ಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಸರ್ಕಾರಿ ನೌಕರರ ಮೇಲೆ ಕೊಲೆ ಯತ್ನಕ್ಕೆ ಸಂಬಂಧಿಸಿದ ಪ್ರಕರಣ ದಾಖಲಾಗಿದ್ದು, ಆತನನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.

ಇದೀಗ ಪ್ರಕರಣದ ಮತ್ತೊಬ್ಬ ಆರೋಪಿಯಾದ ಲೋಕೇಶ್ ತೇಜ ಕೊಠಾರಿ (42) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಹುದಾರ ಹೌಸ್, ಬಾಳಿಹಿತ್ಲು, ಯಡ್ತರೆ ಗ್ರಾಮ, ಬೈಂದೂರು ತಾಲೂಕು ನಿವಾಸಿಯಾಗಿರುವ ಲೋಕೇಶ್ ಈ ಹಿಂದೆ ಮುಂಬೈನಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಪ್ರಕರಣದ ಆರೋಪಿ ಕಿಶೋರ್ ರಾಮ ಪೂಜಾರಿಯ ಪರಿಚಯವಾಗಿ ಸ್ನೇಹ ಬೆಳೆಸಿಕೊಂಡಿದ್ದ ಎನ್ನಲಾಗಿದೆ.
ಕೃತ್ಯದ ಸಂದರ್ಭದಲ್ಲಿ ನೇರವಾಗಿ ಭಾಗಿಯಾಗಿದ್ದ ಅನ್ಮೋಲ್ ರಸ್ತೋಗಿ ಹಾಗೂ ರಾಜು ಅವರಿಗೆ ಮೋಟಾರ್‌ಸೈಕಲ್‌ಗಳನ್ನು ಒದಗಿಸಿ, ಇತರ ಆರೋಪಿಗಳೊಂದಿಗೆ ಸೇರಿ ಕೊಲೆ ನಡೆಸಲು ಅಪರಾಧಿಕ ಒಳಸಂಚು ರೂಪಿಸಿದ್ದ ಆರೋಪ ಲೋಕೇಶ್ ಮೇಲಿದ್ದು, ಕೃತ್ಯದಲ್ಲಿ ಬಳಸಲಾದ ವಾಹನಗಳನ್ನು ಒದಗಿಸುವ ಮೂಲಕ ಆತ ಸಹಕರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯ ಪತ್ತೆಗಾಗಿ ವಿಶೇಷ ಕರ್ತವ್ಯದಲ್ಲಿದ್ದ ಕಾರ್ಕಳ–ಪಡುಬಿದ್ರೆ ಪೊಲೀಸರು ಲೋಕೇಶ್‌ನನ್ನು ಬೈಂದೂರು ತಾಲೂಕಿನ ಯಡ್ತರೆಯಲ್ಲಿ ವಶಕ್ಕೆ ಪಡೆದು ತನಿಖಾಧಿಕಾರಿಯ ಮುಂದೆ ಹಾಜರುಪಡಿಸಿದರು. ಬಳಿಕ ಆ.21ರಂದು ಆತನನ್ನು ಅಧಿಕೃತವಾಗಿ ಬಂಧಿಸಲಾಯಿತು.

ಆತನಿಂದ ಕೃತ್ಯಕ್ಕೆ ಬಳಸಿದ್ದ ಮೊಬೈಲ್ ಫೋನ್‌ಗಳನ್ನು ಹಾಗೂ ಮೋಟಾರ್‌ಸೈಕಲ್‌ನ ಎಂಜಿನ್ ಮತ್ತು ಚಾಸಿಸ್ ನಂಬರ್‌ಗಳನ್ನು ಉಜ್ಜಲು ಬಳಸಿದ್ದ ಯಂತ್ರವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

Back to top button