ಜಿಲ್ಲೆಯಲ್ಲಿ ಡೆಂಗ್ಯೂ ಹಾಗೂ ಮಲೇರಿಯಾಗಳಂತಹ ರೋಗ ಪತ್ತೆ ಹಚ್ಚಲು ಸಮೀಕ್ಷೆ ಅವಶ್ಯಕ- ಸಿಇಓ ಡಾ. ದಿಲೀಷ್ ಶಶಿ

ಕಲಬುರಗಿ.ಜು.೧೨(ಕ.ವಾ)-ಜಿಲ್ಲೆಯಲ್ಲಿ ಡೆಂಗ್ಯೂ,
ಚಿಕೂನ್ ಗುನ್ಯಾ ಹಾಗೂ ಮಲೇರಿಯಾಗಳಂತಹ ರೋಗಗಳನ್ನು ಪತ್ತೆಹಚ್ಚಲು ಸಮೀಕ್ಷೆಗಳು ಅವಶ್ಯಕವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಷ್ ಶಶಿ ಅವರು ತಿಳಿಸಿದರು.

ಸೋಮವಾರ ನಗರದ ಜಿಲ್ಲಾ ಸರ್ವೇಕ್ಷಣಾ ಕಚೇರಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ರಾಷ್ಟ್ರೀಯ ಅರೋಗ್ಯ ಅಭಿಯಾನ, ಜಿಲ್ಲಾ ರೋಗವಾಹಕ ಅಶ್ರಿತ ರೋಗಗಳ ನಿಯಂತ್ರಣ ಅಧಿಕಾರಿಗಳ ಕಚೇರಿ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ನಡೆದ ಮಲೇರಿಯಾ, ಡೆಂಗ್ಯೂ, ಚಿಕೂನ್ ಗುನ್ಯಾ ರೋಗಗಳ ಕುರಿತ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಮಳೆಗಾಲ ಶುರುವಾದ ಹಿನ್ನೆಲೆ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸೊಳ್ಳೆಗಳು ಹೆಚ್ಚಾಗಿ ಹರಡುವುದರಿಂದ ಡೆಂಗ್ಯೂ, ಮಲೇರಿಯಾದಂತಹ ರೋಗಗಳು ಕಾಣ ಸಿಕೊಳ್ಳುತ್ತವೆ. ಹೀಗಾಗಿ ಪ್ರತಿ ತಾಲ್ಲೂಕು ಪಂಚಾಯತಿಯಲ್ಲಿ ಫಾಗಿಂಗ್ ಯಂತ್ರ ಬಳಸಿ ಸೊಳ್ಳೆಗಳನ್ನು ನಿಯಂತ್ರಿಸಬೇಕು. ಫಾಗಿಂಗ್ ಕಾರ್ಯ ನಿರಂತರವಾಗಿ ಮಾಡಬೇಕು. ಇದಲ್ಲದೆ ಪ್ರತಿಯೊಂದು ಗ್ರಾಮದಲ್ಲಿಯೂ ಸಹ ಆಶಾ ಕಾರ್ಯಕರ್ತೆಯರಿಂದ ಸಮೀಕ್ಷೆ ನಡೆಸಿ ಈ ರೋಗಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯ ಮಾಡಬೇಕು ಎಂದು ಅವರು ಹೇಳಿದರು.

ಕೋವಿಡ್ ಪ್ರಕರಣಗಳು ಕಡಿಮೆ ಆಗಿರುವುದರಿಂದ ಆಶಾ-ಕಾರ್ಯಕರ್ತೆಯರು ಮನೆ-ಮನೆಗೆ ಭೇಟಿ ನೀಡಿ ಡೆಂಗ್ಯೂ, ಮಲೇರಿಯಾ, ಚಿಕೂನಗುನ್ಯಾ ರೋಗಗಳ ಬಗ್ಗೆ ಜನರಿಗೆ ತಿಳುವಳಿಕೆ ಹೇಳಬೇಕು. ಇದಲ್ಲದೆ ಸಮೀಕ್ಷೆ ನಂತರ ತಮ್ಮ ತಾಲ್ಲೂಕಾ ಮಟ್ಟದ ಅಧಿಕಾರಿಗಳಿಗೆ ಸಮೀಕ್ಷೆ ಕುರಿತ ವರದಿ ಸಲ್ಲಿಸಬೇಕು. ತಾಲೂಕು ಮಟ್ಟದಲ್ಲಿ ಕಡ್ಡಾಯವಾಗಿ ಟಾಸ್ಕ್ ಫೋರ್ಸ್ ಸಭೆ ನಡೆಸಬೇಕು. ಸಭೆಗೆ ತಹಸೀಲ್ದಾರರನ್ನು ಆಹ್ವಾನಿಸಿ ರೋಗಗಳ ಕುರಿತು ಮಾಹಿತಿ ನೀಡಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.

ಒಟ್ಟಿನಲ್ಲಿ ಜಿಲ್ಲೆಯಲ್ಲಿ ರೋಗ ನಿಯಂತ್ರಣಕ್ಕೆ ಬೇಕಾಗಿರುವ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಿ. ಜಿಲ್ಲಾ ಪಂಚಾಯತ್ ವತಿಯಿಂದ ಎಲ್ಲಾ ತರಹದ ಸಹಾಯ ಮಾಡಲಾಗುವುದು ಎಂದು ತಿಳಿಸಿದ ಅವರು ಮುಂದಿನ ಸಭೆಗೆ ಬರುವಾಗ ಜಿಲ್ಲೆಯ ಪ್ರತಿಯೊಂದು ತಾಲ್ಲೂಕಿನ ಸಂಪೂರ್ಣ ಮಾಹಿತಿ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶರಣಬಸಪ್ಪ ಗಣಜಲಖೇಡ್, ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಭಾಗೀಯ ಉಪ ನಿರ್ದೇಶಕ ಡಾ. ಹಬೀಬ್ ಉಸ್ಮಾನ್, ಕಾರ್ಯಕ್ರಮ ಅಧಿಕಾರಿ ಡಾ. ಬಸವರಾಜ ಗುಳಗಿ ಸೇರಿದಂತೆ ಎಲ್ಲಾ ತಾಲ್ಲೂಕಗಳ ಟಿ.ಹೆಚ್.ಓ.ಗಳು ಹಾಗೂ ವಿವಿಧ ಇಲಾಖೆಯ ಮುಖ್ಯಸ್ಥರು ಭಾಗವಹಿಸಿದ್ದರು.

Latest Indian news

Popular Stories