Crime

ಭಾರೀ ಮಳೆ; ಹಲವೆಡೆ ಜಲಾವೃತ, ಜನಜೀವನ ತತ್ತರ

ಬೆಂಗಳೂರು, ಅ.21(ಯುಎನ್‍ಐ):- ಕಳೆದ ರಾತ್ರಿ ಮತ್ತು ಇಂದು ಬೆಳಗ್ಗಿನ ಜಾವ ಸುರಿದ ಧಾರಾಕಾರ ಮಳೆಗೆ ನಗರದ ಕೆಲವು ಭಾಗಗಳಲ್ಲಿ ಜನರು ತತ್ತರಿಸಿ ಹೋಗಿದ್ದು, ಇನ್ನು ಕೆಲವೆಡೆ ಮನೆಗಳಿಗೆ ನೀರು ನುಗ್ಗಿದ್ದರಿಂದ ರಾತ್ರಿ ಇಡೀ ಜಾಗರಣೆ ಕೂರುವಂತಾಗಿತ್ತು.
ನಗರದಲ್ಲಿ 25ಕ್ಕೂ ಹೆಚ್ಚು ಮರಗಳು ಧರೆಗುರುಳಿದ್ದು, ವಿದ್ಯುತ್ ಕಂಬವೊಂದು ಮಳೆಯ ರಭಸಕ್ಕೆ ಉರುಳಿ ಬಿದ್ದರೂ ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.
ಬಸವೇಶ್ವರÀ ನಗರ, ದೊಡ್ಡಜಾಲ, ವಿದ್ಯಾರಣ್ಯಪುರ, ಯಶವಂತಪುರ, ಶಾಂತಿನಗರ, ಮಲ್ಲೇಶ್ವರ, ಸಂಪಂಗಿರಾಮನಗರ, ಕೆಂಗೇರಿ, ಆರ್ ಆರ್ ನಗರ, ಜೆಪಿ ನಗರ, ಜಯನಗರ, ಹೊಸಕೆರೆಹಳ್ಳಿ, ವಿಜಯನಗರ, ಕೋರಮಂಗಲ, ಹೆಬ್ಬಾಳ ಮತ್ತಿತರ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಕೋರಮಂಗಲದ 80 ಅಡಿ ರಸ್ತೆ ಸಂಪೂರ್ಣ ಜಲಾವೃತಗೊಂಡಿತ್ತು. 150ಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿದೆ. ರಸ್ತೆಯಲ್ಲೇ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು. ಹಲವು ಅಂಡರ್ ಪಾಸ್ ಗಳಲ್ಲಿ ನೀರು ನಿಂತಿದ್ದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು.
ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮಳೆಯಾಗುತ್ತಿದ್ದು, ಬುಧವಾರ ಕೂಡ ಬೆಂಗಳೂರಿನಾದ್ಯಂತ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button