ಕಾರವಾರ:ಫೆ. 17 ರಂದು ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ, ನಗರ ಸ್ಥಳೀಯ ಸಂಸ್ಥೆಗಳಲ್ಲಿ, ಗ್ರಾಮೀಣ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕದ “ಸಾಂಸ್ಕೃತಿಕ ನಾಯಕ”ರಾದ ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಕಡ್ಡಾಯವಾಗಿ ಅಳವಡಿಸಿ, ಅನಾವರಣಗೊಳಿಸುವ ಕಾರ್ಯಕ್ರಮವನ್ನು ಆಯೋಜಿಸುವಂತೆ ಎಲ್ಲಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚಿಸಿದರು.
ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕ್ರಾಂತಿಯೋಗಿ ಶ್ರೀ ಜಗಜ್ಯೋತಿ ಬಸವಣ್ಣನವರು 12ನೇ ಶತಮಾನದಲ್ಲಿ ಪ್ರತಿಪಾದಿಸಿದ ಸಾರ್ವತ್ರಿಕ ಮೌಲ್ಯಗಳಾದ ಜಾತಿ ರಹಿತ ಸಮಾಜ, ಕಾಯಕದ ಮಹತ್ವ ಮತ್ತು ವರ್ಗರಹಿತ ಸಮಾಜ, ಜೀವನ ಮಾರ್ಗ ಸರ್ವಕಾಲಕ್ಕೂ ದಾರಿದೀಪವಾಗಿದೆ.
ಸಮಾಜದಲ್ಲಿ ಮಹಿಳಾ ಅಸಮಾನತೆ ಹಾಗೂ ಮೂಡನಂಬಿಕೆಗಳ ವಿರೋಧ ವ್ಯಕ್ತಪಡಿಸಿದ್ದ ಅವರು, ಸಾರ್ವತ್ರಿಕ ಮತ್ತು ಸರ್ವಕಾಲಿಕ ಸರ್ವಜನ ಸಮಭಾವದ ತಾತ್ವಿಕತೆಗಳ ಮೂಲಕ ಕಲ್ಯಾಣ ಸಮಾಜವನ್ನು ಕಟ್ಟುವುದಕ್ಕೆ ಬೇಕಾದ ನೀತಿಯನ್ನು ಬೋಧಿಸಿರುವುದರಿಂದ ನಮ್ಮ ದೇಶದ ಸಂವಿಧಾನದ ಆಶಯಗಳಿಗೆ ಅವರ ಚಿಂತನೆಗಳು ಸಾಂಸ್ಕೃತಿಕ ರಾಯಭಾರಿತ್ವಕ್ಕೆ ಸಮರ್ಥನೀಯವಾದ ನೆಲೆ ಒದಗಿಸಿರುವ ಕಾರಣ ಸರ್ಕಾರವು ಶ್ರೀ ಜಗಜ್ಯೋತಿ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ” ಎಂದು ಘೋಷಿಸಿದೆ ಎಂದರು.
Pವಿಶ್ವ ಗುರು ಬಸವಣ್ಣನವರ ಭಾವಚಿತ್ರವನ್ನು ಮುಖ್ಯಮಂತ್ರಿಗಳು ಫೆಬವ್ರರಿ 13 ರಂದು ವಿಧಾನಸೌಧದಲ್ಲಿ ಅನಾವರಣಗೊಳಿಸಿದ್ದಾರೆ. ಅದರಂತೆ ಫೆಬ್ರವರಿ 17 ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ತಾಲೂಕು ಕೇಂದ್ರಗಳಲ್ಲಿ ಸ್ಥಳೀಯ ಶಾಸಕರುಗಳ ನೇತೃತ್ವದಲ್ಲಿ ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಅನಾವರಣಗೊಳಿಸುವ ಕಾರ್ಯಕ್ರಮವನ್ನು ಆಯೋಜಿಸಲು ಸೂಚಿಸಲಾಗಿದೆ.
ಸಭೆಯಲ್ಲಿ ಉಪ ವಿಭಾಗಾಧಿಕಾರಿ ಕನಿಷ್ಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕ ಡಾ. ರಾಮಚಂದ್ರ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
……