Crime

ಉಪಚುನಾವಣೆ ನಡೆಯುವ ಕ್ಷೇತ್ರಗಳಿಗೆ ವಿಶೇಷ ಪ್ಯಾಕೇಜ್ ಸಿಗಲಿದೆಯೇ ?

ಬೆಂಗಳೂರು,ಫೆ.27:- ಯಾವುದೇ ಕ್ಷಣದಲ್ಲಿ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರ ಹಾಗೂ ಒಂದು ಲೋಕಸಭಾ ಕ್ಷೇತ್ರದ ಉಪಚುನಾವಣೆಯ ದಿನಾಂಕ ಘೋಷಣೆಯಾಗಲಿರುವ ಹಿನ್ನೆಲೆಯಲ್ಲಿ ಈ ಕ್ಷೇತ್ರಗಳಿಗೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆಯಿದೆ.
ಶತಾಯಗತಾಯ ಉಪಚುನಾವಣೆಯಲ್ಲಿ ಈ ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಬೇಕೆಂದು ಪಣ ತೊಟ್ಟಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಬೆಳಗಾವಿ ಲೋಕಸಭೆ, ಮಸ್ಕಿ, ಬಸವಕಲ್ಯಾಣ ಹಾಗೂ ಸಿಂಧಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗಳಲ್ಲಿ ಮತದಾರರ ಮನಗೆಲ್ಲಲು ಪ್ಯಾಕೇಜ್ ಘೋಷಣೆ ಮಾಡುವ ನಿರೀಕ್ಷೆಯಿದೆ.
ಚುನಾವಣೆ ದಿನಾಂಕ ಘೋಷಣೆಯಾಗುವ ಹಿನ್ನೆಲೆಯಲ್ಲಿ ಬಜೆಟ್ ಅವೇಶನ ಆರಂಭವಾಗುವ ಮುನ್ನವೇ ಬಿಜೆಪಿ ಸಂಪುಟ ಸಭೆ ನಡೆಸಲಿದೆ. ಮಾರ್ಚ್ 3 ರಂದು ಮಧ್ಯಾಹ್ನ 2 ಗಂಟೆಗೆ ಸಚಿವ ಸಂಪುಟ ಸಭೆ ಕರೆದಿರುವ ಬಿಎಸ್‍ವೈ, ಬಸವ ಕಲ್ಯಾಣ, ಮಸ್ಕಿ ಮತ್ತು ಸಿಂಧಗಿ ಕ್ಷೇತ್ರಗಳ ಉಪ ಚುನಾವಣೆಯನ್ನು ಗೆಲ್ಲಲು ವಿಶೇಷ ಪ್ಯಾಕೇಜ್ ಘೋಷಿಸುವ ಸಾಧ್ಯತೆಯಿದೆ.
ಬಸವಕಲ್ಯಾಣದಲ್ಲಿ ಈಗಾಗಲೇ ಅನುಭವ ಮಂಟಪ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್‍ನ ಭದ್ರಕೋಟೆ ಬಸವಕಲ್ಯಾಣದಲ್ಲಿ ಬಿಜೆಪಿ ಗೇಮ್ ಚೇಂಜರ್ ಆಗಲಿದೆ ಎಂದು ನಿರೀಕ್ಷಿಸಲಾಗಿದೆ.ಇನ್ನುಳಿದ ಎರಡು ವಿಧಾನಸಭಾ ಕ್ಷೇತ್ರಗಳಿಗೂ ಕೂಡ ಪ್ಯಾಕೇಜ್ ಘೋಷಿಸುವ ಸಾಧ್ಯತೆಯಿದೆ.
ವಿಶೇಷವಾಗಿ ಮಸ್ಕಿ ಕ್ಷೇತ್ರಕ್ಕೆ, ಏಕೆಂದರೇ ಪ್ರತಾಪ್ ಗೌಡ ಪಾಟೀಲ್ ಕಾಂಗ್ರೆಸ್‍ನಿಂದ ಬಿಜೆಪಿಗೆ ಬಂದಿದ್ದಾರೆ, ಸಿಂಧಗಿಯಲ್ಲಿ ಶಾಸಕ ಎಂಸಿ ಮನಗೂಳಿ ನಿಧನದ ಹಿನ್ನೆಲೆಯಲ್ಲಿ ಚುನಾವಣೆ ಎದುರಾಗಿದೆ, 2018ರ ವಿಧಾನಸಭೆ ಚುನಾವಣೆಯಲ್ಲಿ ಮೂರು ವಿಧಾನ ಸಭಾ ಕ್ಷೇತ್ರಗಳಲ್ಲಿ ಬಿಜೆಪಿಯೇತರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. ಮರಾಠಾ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಈಗಾಗಲೇ ಘೋಷಿಸಿದ್ದಾರೆ, ಇದು ಬಸವಕಲ್ಯಾಣದಲ್ಲಿ ಪಕ್ಷಕ್ಕೆ ಸಹಾಯ ಮಾಡಬಲ್ಲದು ಹಾಗೂ ಮರಾಠಿ ಮಾತನಾಡುವ ಮತದಾರರ ಸಂಖ್ಯೆಯಿರುವ ಬೆಳಗಾವಿಗೂ ಹೆಚ್ಚಿನ ಅನುಕೂಲವಾಗಲಿದೆ.
ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಅಕೃತವಾಗಿ ಇನ್ನೂ ದಿನಾಂಕ ಪ್ರಕಟಿಸಿಲ್ಲ, ಆದರೆ ಮೇ 2ರೊಳಗೆ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯುಕ್ತ ಸುನೀಲ್ ಅರೋರಾ ಸುಳಿವು ನೀಡಿದ್ದಾರೆ. ತೆರವಾದ ವಿಧಾನಸಭೆ ಕ್ಷೇತ್ರಗಳಿಗೆ ಆರು ತಿಂಗಳೊಳಗೆ ಚುನಾವಣೆ ನಡೆಯಬೇಕು, ಮಸ್ಕಿ ಮತ್ತು ಬಸವಕಲ್ಯಾಣ ಕ್ಷೇತ್ರಗಳು ಆ ಮಿತಿ ತಲುಪಲಿವೆ. ಬೆಳಗಾವಿ ಲೋಕಸಭೆ ಉಪ ಚುನಾವಣೆ ಏಪ್ರಿಲ್ 6ರಂದು ನಡೆಯುವ ತಿರುಪತಿ ಚುನಾವಣೆ ಜೊತೆಯಲ್ಲೇ ನಡೆಯಲಿದೆ.
ಅದೇ ದಿನ ಉಳಿದ ಮೂರು ಕ್ಷೇತ್ರಗಳ ಉಪ ಚುನಾವಣೆ ನಡೆಯಬಹುದು ಎಂದು ನಿರೀಕ್ಷಿಸಲಾಗಿದೆ. ಆದರೆ ಕರ್ನಾಟಕ ಉಪ ಚುನಾವಣೆಗೆ ನಿರ್ಧಿಷ್ಟ ದಿನಾಂಕ ಪ್ರಕಟಿಸಿಲ್ಲ, ಆದರೆ ಅದು ಪ್ರತ್ಯೇಕ ಅಧಿಸೂಚನೆಯಲ್ಲಿ ಹೊರಬೀಳುತ್ತದೆ ಎಂದು ಸುನೀಲ್ ಅರೋರಾ ತಿಳಿಸಿದ್ದಾರೆ. ಮಾರ್ಚ್ 8 ರಂದು ರಾಜ್ಯ ಬಜೆಟ್ ಮಂಡನೆಯಾಗಲಿದ್ದು, ಬಜೆಟ್ ನಲ್ಲಿ ಘೋಷಿಸುವ ಯೋಜನೆಗಳು ಬಿಜೆಪಿಗೆ ವರದಾನವಾಗಲಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button