ಮಡಿಕೇರಿ ನ.26 : ಮಹಾಮಾರಿ ಕೊರೋನಾಗೆ ಲಸಿಕೆ ಸಂಗ್ರಹಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಗಳಿಗೆ ಸೂಚನೆ ನೀಡಿರುವ ಬೆನ್ನಲ್ಲೇ ಕೊಡಗು ಜಿಲ್ಲೆಯಲ್ಲೂ ಕೋವಿಡ್-19 ಲಸಿಕೆ ಸಂಗ್ರಹಿಸಿಡಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ನಗರದ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಆವರಣದಲ್ಲೇ ಸುಮಾರು 40 ಐಸ್ ಲೈನ್ಡ್ ರೆಫ್ರಿಜರೇಟರ್‍ಗಳನ್ನು ಅಳವಡಿಸಲಾಗಿದ್ದು, ಮುಂದಿನ ದಿನಗಳಲ್ಲಿ ತಾಲೂಕು ಆಸ್ಪತ್ರೆಗಳಲ್ಲೂ ಈ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮೋಹನ್ ಅವರು ತಿಳಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ 5.5 ಲಕ್ಷ ಜನಸಂಖ್ಯೆ ಇದ್ದು, ಮೊದಲ ಹಂತದಲ್ಲಿ 6 ಸಾವಿರ ಕೋವಿಡ್ ಲಸಿಕೆ ದಾಸ್ತಾನಿಗೆ ಸಿದ್ಧತೆ ನಡೆಸಲಾಗಿದೆ. ಪ್ರಥಮವಾಗಿ ಕೊರೋನಾ ವಾರಿಯರ್‍ಗಳಿಗೆ ಲಸಿಕೆ ನೀಡಲಾಗುತ್ತದೆ. ನಂತರ ಜಿಲ್ಲಾಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತದೆ. ಲಸಿಕೆ ಲಭ್ಯವಾದ ಕೂಡಲೇ ಜಿಲ್ಲೆಯ ವಿವಿಧೆಡೆಗಳಿಗೆ ತಲುಪಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಅವರು ವಿವರಿಸಿದ್ದಾರೆ.