ಕೊಡಗು: ನ.26 ರಂದು ಕೊಡಗಿನ ವಿವಿಧೆಡೆ ಪ್ರತಿಭಟನೆ

ಮಡಿಕೇರಿ ನ.17 : ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ(ಜೆಸಿಟಿಯು) ರಾಜ್ಯ ವ್ಯಾಪಿ ಕರೆ ನೀಡಿರುವ ಅಖಿಲ ಭಾರತ ಮುಷ್ಕರಕ್ಕೆ ಬೆಂಬಲವಾಗಿ ನ.26 ರಂದು ಕೊಡಗಿನ ವಿವಿಧೆಡೆ ಪ್ರತಿಭಟನೆ ನಡೆಸಲಾಗುವುದೆಂದು ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಬಿ.ರಮೇಶ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 11 ಗಂಟೆಗೆ ಮಡಿಕೇರಿಯ ಜಿಲ್ಲಾಡಳಿತ ಕಛೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆಯಲ್ಲಿ ಅಲ್ಲಿನ ತಾಲ್ಲೂಕು ಕಛೇರಿಗಳ ಎದುರು ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು.
ಸಿಐಟಿಯುನ ಜಿಲ್ಲಾಧ್ಯಕ್ಷ ಎ.ಮಹದೇವು ಮಾತನಾಡಿ, ಕೋವಿಡ್ ಸಂಕಷ್ಟದ ಸಂದರ್ಭವನ್ನು ನೆಪವಾಗಿಟ್ಟುಕೊಂಡು, ರಾಜ್ಯ ಮತ್ತು ಕೇಂದ್ರ ಸರ್ಕಾರ ರೈತ ಹಾಗೂ ಕಾರ್ಮಿಕ ವಿರೋಧಿ ಕಾನೂನುಗಳನ್ನು ಜಾರಿಗೆ ತರುತ್ತಿದೆ. ದೇಶದಲ್ಲಿ ಯೋಜನಾ ರಹಿತವಾಗಿ ಲಾಕ್‍ಡೌನ್ ಜಾರಿಗೊಳಿಸಿದ ಪರಿಣಾಮ ಲಕ್ಷಾಂತರ ಜನ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕುವಂತಾಗಿದೆ ಎಂದು ಆರೋಪಿಸಿದರು.
ಎಐಟಿಯುಸಿ ಜಿಲ್ಲಾಧ್ಯಕ್ಷ ಹೆಚ್.ಎಂ.ಸೋಮಪ್ಪ ಮಾತನಾಡಿ, ಕಾರ್ಮಿಕ ಹಕ್ಕನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕಿತ್ತುಕೊಂಡಿದೆ. ದೇಶದ ಬೆನ್ನೆಲುಬಾಗಿರುವ ಕಾರ್ಮಿಕರು, ರೈತರಿಗೆ ಮಾರಕವಾಗಿರುವ ಕಾಯ್ದೆಯನ್ನು ಜಾರಿಗೆ ತಂದು ದುಡಿಯುವ ವರ್ಗಕ್ಕೆ ಸಂಕಷ್ಟವನ್ನುಂಟು ಮಾಡಿರುವುದಾಗಿ ಟೀಕಿಸಿದರು.
ಐಎನ್‍ಟಿಯುಸಿ ಜಿಲ್ಲಾಧ್ಯಕ್ಷ ಗೋವಿಂದರಾಜ್ ದಾಶ್ ಮಾತನಾಡಿ, ಸಂವಿಧಾನ ಜಾರಿಗೆ ಬರುವ ಸಂದರ್ಭದಲ್ಲಿ ಅಂಬೇಡ್ಕರ್ ಅವರು ಕಾರ್ಮಿಕರ ಪರವಾಗಿ ಜಾರಿಗೆ ತಂದಿದ್ದ ಎಲ್ಲ ಕಾನೂನುಗಳು ಈಗ ತಿದ್ದುಪಡಿ ಮಾಡುವ ಮೂಲಕ ಕಾರ್ಮಿಕರು ಸದಾ ಕಾಲ ಆತಂಕದಲ್ಲಿಯೇ ಜೀವನ ನಡೆಸುವ ಸ್ಥಿತಿ ನಿರ್ಮಾಣವಾಗಿದೆ. ಕೋವಿಡ್ ಮಹಾಮಾರಿಗಿಂತಲೂ ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ರೈತ, ಕಾರ್ಮಿಕ ವಿರೋಧಿ ನೀತಿಗಳೇ ಹೆಚ್ಚು ಅಪಾಯಕಾರಿಯಾಗಿದ್ದು, ಈ ಕಾಯ್ದೆಗಳ ವಿರುದ್ಧ ಜಂಟಿ ಹೋರಾಟ ನಡೆಯದೆ ಕೃಷಿಕರಿಗೆ, ಕಾರ್ಮಿಕರಿಗೆ ಉಳಿಗಾಲ ಇಲ್ಲದಾಗಿದೆ ಎಂದು ಆರೋಪಿಸಿದರು. ಸಂವಿಧಾನದ ಸಂಸ್ಥಾಪನಾ ದಿನವಾದ ನ.26 ರಂದು ಸಾಂವಿಧಾನಿಕ ಹಕ್ಕುಗಳಿಗಾಗಿ ಪ್ರತಿರೋಧವನ್ನು ವ್ಯಕ್ತಪಡಿಸಲಾಗುತ್ತಿದೆ ಎಂದರು.
ಸಿಐಟಿಯು ಉಪ ಕಾರ್ಯದರ್ಶಿ ಪಿ.ಆರ್.ಭರತ್ ಮಾತನಾಡಿ, ಕೊರೋನಾ ಸಂಕಷ್ಟದ ಸಮಯದಲ್ಲಿ ಆರ್ಥಿಕವಾಗಿ ಸಂಕಷ್ಟ ಎದುರಿಸುತ್ತಿರುವ ಕಾರ್ಮಿಕರು, ರೈತರು, ದಲಿತರು, ಮಹಿಳೆಯರ ಹಿv ಕಾಪಾಡಬೇಕಾದ ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೊರೊನಾ ನೆಪದಲ್ಲಿ ಮತ್ತಷ್ಟು ಸಂಕಷ್ಟಕ್ಕೆ ತಳ್ಳಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕಾರ್ಮಿಕ ಸಂಘಟನೆಗಳ ಹೋರಾಟಕ್ಕೆ ಕಾರ್ಮಿಕ ಸಂಘಟನೆಗಳು, ಸ್ವತಂತ್ರ ಸಂಘಟನೆಗಳು ಎಲ್‍ಐಸಿ, ಬ್ಯಾಂಕ್, ರಕ್ಷಣಾ ವಲಯ, ರೈಲ್ವೆ, ಬಿಎಸ್‍ಎನ್‍ಎಲ್, ರಾಜ್ಯ ಮತ್ತು ಕೇಂದ್ರ ಸೇವೆ ಮುಂತಾದ ಅಖಿಲ ಭಾರತ ಸಂಘಟನೆಗಳು, ಕಾರ್ಮಿಕರು, ನೌಕರರು, ಅಸಂಘಟಿತ ಕ್ಷೇತ್ರದ ಕಾರ್ಮಿಕರಾದ ಕಟ್ಟಡ, ಹಮಾಲಿ, ಬೀಡಿ, ತೋಟಗಾರಿಕೆ ಗುತ್ತಿಗೆ ಕಾರ್ಮಿಕರು, ಪಂಚಾಯ್ತಿ ನೌಕರರು, ಬೀದಿ ಬದಿ ವ್ಯಾಪಾರಸ್ಥರು, ಆಟೋ ಟ್ಯಾಕ್ಸಿ, ಸಾರಿಗೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರು, ಅಂಗನವಾಡಿ, ಬಿಸಿಯೂಟ, ಆಶಾ, ನೌಕರರು ಮತ್ತು ಮಹಿಳಾ ಸಂಘಟನೆಗಳು ಸೇರಿದಂತೆ ವಿವಿಧ ಕಾರ್ಮಿಕ ಸಂಘಟನೆಗಳು ಬೆಂಬಲ ನೀಡಲಿವೆ ಎಂದರು.
ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸುವ ಹೋರಾಟಕ್ಕೆ ಅಂಗಡಿ ಮಳಿಗೆಗಳ ವರ್ತಕರು, ಆಟೋ ಚಾಲಕರು ಬೆಂಬಲ ನೀಡುವಂತೆ ಭರತ್ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಸಿಐಟಿಯು ಪ್ರಧಾನ ಕಾರ್ಯದರ್ಶಿ ಎ.ಸಿ.ಸಾಬು ಉಪಸ್ಥಿತರಿದ್ದರು.

Latest Indian news

Popular Stories