
ಮಂಗಳೂರು ವಿಮಾನ ನಿಲ್ದಾಣದಲ್ಲಿ 50 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ವಶಕ್ಕೆ
ಮಂಗಳೂರು: ಗುದನಾಳದಲ್ಲಿ ಹಾಗೂ ಚಾಕೋಲೇಟ್‌ನಲ್ಲಿ ಬಚ್ಚಿಟ್ಟು, ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಅವರಿಂದ 50 ಲಕ್ಷ ರೂ ಮೌಲ್ಯದ ಚಿನ್ನವನ್ನು ಸೀಝ್ ಮಾಡಿದ್ದಾರೆ.
ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜನವರಿ 12ರಂದು ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನಗಳಾದ IX816 ಮತ್ತು IX814 ಮೂಲಕ ಅಬುಧಾಬಿ ಮತ್ತು ದುಬೈನಿಂದ ಆಗಮಿಸಿದ ಪ್ರಯಾಣಿಕರಿಬ್ಬರು ಗುದನಾಳದಲ್ಲಿ ಚಿನ್ನವನ್ನು ಬಚ್ಚಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರು. ಇಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ಪರಿಶೀಲಿಸಿದಾಗ ಗುದನಾಳದಲ್ಲಿ ಅಂಡಕಾರದ ವಸ್ತುವಿನೊಂದಿಗೆ ಮತ್ತು ಬ್ಯಾಗ್ ನಲ್ಲಿ ಚಾಕಲೇಟ್ ನೊಂದಿಗೆ ಮರೆಮಾಡಿ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.
ಪ್ರಯಾಣಿಕರಿಬ್ಬರ ಬಳಿಯಲ್ಲಿ 24 ಕ್ಯಾರೆಟ್ ಪರಿಶುದ್ಧತೆಯ ಒಟ್ಟು 815 ಗ್ರಾಂ ಚಿನ್ನ ಪತ್ತೆಯಾಗಿದೆ. ಇದರ ಮೌಲ್ಯ ರೂ 50,93,750 ಎಂದು ಅಂದಾಜಿಸಲಾಗಿದೆ. ಇಬ್ಬರೂ ಪ್ರಯಾಣಿಕರನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಾಗಿದೆ.




