
ಮುದರಂಗಡಿ ಗುಂಡಿನ ದಾಳಿ ಪ್ರಕರಣ: ಇಬ್ಬರು ಪ್ರಮುಖ ಆರೋಪಿಗಳ ಬಂಧನ
ಉಡುಪಿ: ಕಾಪು ತಾಲೂಕಿನ ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್‌ನಲ್ಲಿ ಆಗಸ್ಟ್ 7ರಂದು ನಡೆದ ಡೇವಿಡ್ ಡಿಸೋಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಪ್ರಮುಖ ಆರೋಪಿಗಳನ್ನು ಶಿರ್ವ ಪೊಲೀಸರು ಬಂಧಿಸಿದ್ದಾರೆ.
ಆಗಸ್ಟ್ 7ರಂದು ಮಧ್ಯಾಹ್ನ 3.45ರ ಸುಮಾರಿಗೆ ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್‌ನಲ್ಲಿರುವ ಪ್ರಿನ್ಸ್ ಎಂಟರ್‌ಪ್ರೈಸಸ್‌ನ ಮಾಲಕ ಡೇವಿಡ್ ಡಿಸೋಜಾ ಅವರನ್ನು ಮೋಟಾರ್ ಸೈಕಲ್‌ನಲ್ಲಿ ಬಂದಿದ್ದ ಆರೋಪಿಗಳ ಪೈಕಿ ಸಹಸವಾರ ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿ ಕೊಲೆ ಮಾಡಿದ್ದನು. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿತ್ತು.
ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದ ಆರೋಪಿಗಳಾದ ಅನ್ಮೋಲ್ ರಸ್ತೋಗಿ ಹಾಗೂ ಜಿಯಾಹುಲ್ ವಾಜುಲ್ ಶೇಖ್ @ ದೀಪಕ್ ಅವರನ್ನು ಈಗಾಗಲೇ ಬಂಧಿಸಲಾಗಿತ್ತು. ಅವರನ್ನು ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ ಬಳಿಕ ಅವರ ಬ್ಯಾಂಕ್ ಖಾತೆಗಳ ವಿವರಗಳನ್ನು ಪರಿಶೀಲಿಸಲಾಗಿತ್ತು. ಈ ವೇಳೆ ಮೊಹಮ್ಮದ್ ಇರ್ಷಾದ್ ಹಾಗೂ ಚಿರಾಗ್ ಪೂಜಾರಿ ಎಂಬವರು ಆರೋಪಿಗಳಿಗೆ ಹಣ ಜಮಾ ಮಾಡುವ ಮೂಲಕ ಕೃತ್ಯಕ್ಕೆ ಸಹಕರಿಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದ್ದು, ಅವರನ್ನೂ ಬಂಧಿಸಲಾಗಿದೆ.
ಮುಂದುವರಿದ ತನಿಖೆಯಲ್ಲಿ ಆರೋಪಿಗಳ ಬ್ಯಾಂಕ್ ಖಾತೆಗಳು, ಮೊಬೈಲ್ ಫೋನ್ ಮತ್ತು ಕರೆ ವಿವರಗಳನ್ನು ವಿಶ್ಲೇಷಿಸಲಾಯಿತು. ಜತೆಗೆ ಆರೋಪಿಗಳ ಚಲನ-ವಲನಗಳಿಗೆ ಸಂಬಂಧಿಸಿದ ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಕೊಲೆಗೆ ಅಪರಾಧಿಕ ಒಳಸಂಚು ರೂಪಿಸಿ ಕೃತ್ಯಕ್ಕೆ ಹಣಕಾಸಿನ ನೆರವು ನೀಡಿದ ಪ್ರಮುಖ ಆರೋಪಿಗಳ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಈ ಹಿನ್ನೆಲೆಯಲ್ಲಿ ಕಾಪು ತಾಲೂಕಿನ ಬಡಾ ಎರ್ಮಾಳ್ ಗ್ರಾಮದ ಅದಮಾರು ಮಠದ ಬಳಿ ವಾಸಿಸುವ 41 ವರ್ಷದ ಸದಾನಂದ ದೇವಾಡಿಗ @ ಸದಾನಂದ ಎ ಹಾಗೂ ಉಚ್ಚಿಲ ಬಡಾ ಗ್ರಾಮದ ಮಹಾಲಕ್ಷ್ಮಿ ದೇವಸ್ಥಾನದ ಬಳಿ ವಾಸಿಸುವ 47 ವರ್ಷದ ಕಿಶೋರ್ ರಾಮ ಪೂಜಾರಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಸದಾನಂದ ದೇವಾಡಿಗನಿಂದ ಕೃತ್ಯಕ್ಕೆ ಬಳಸಲಾಗಿದೆ ಎನ್ನಲಾದ ಎರಡು ಮೊಬೈಲ್ ಫೋನ್‌ಗಳು, ಒಂದು ಮೋಟಾರ್ ಸೈಕಲ್ ಹಾಗೂ ನಗದು ವಶಪಡಿಸಿಕೊಳ್ಳಲಾಗಿದೆ. ಕಿಶೋರ್ ರಾಮ ಪೂಜಾರಿಯಿಂದ ಮೂರು ಮೊಬೈಲ್ ಫೋನ್‌ಗಳು ಹಾಗೂ ಒಂದು ಕ್ರೇಟಾ ಕಾರು ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಇದೇ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿರುವ ರಾಜು ಎಂಬ ಆರೋಪಿ ಬೈಂದೂರು ಪೊಲೀಸ್ ಠಾಣೆಯ ಸರ್ಕಾರಿ ನೌಕರರ ಮೇಲಿನ ಕೊಲೆ ಯತ್ನ ಪ್ರಕರಣದಲ್ಲಿ ಗಾಯಗೊಂಡಿದ್ದು, ಅಜ್ಜರಕಾಡಿನ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಆತನನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣದ ತನಿಖೆ ಮುಂದುವರಿದಿದೆ.




