ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಲವು ಕ್ಷೇತ್ರಗಳಲ್ಲಿ ಮೈತ್ರಿಗೆ ಮುಂದಾಗಿದ್ದರೂ ಕ್ಷೇತ್ರ ಬಿಟ್ಟು ಕೊಡುವ ಬಗ್ಗೆ ಬಿಜೆಪಿಯಲ್ಲಿ ಗೊಂದಲ ಮೂಡಿಸಿದೆ.
ಕಾಂಗ್ರೆಸ್ ಸೋಲಿಸಲು ಮೈತ್ರಿ ಅನಿವಾರ್ಯ ಎಂಬ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಮೋದಿ ಹಾಗೂ ದೇವೇಗೌಡ ಮೈತ್ರಿ ಮಾತುಕತೆ ನಡೆಸಿದ್ದಾರೆ.
ರಾಜ್ಯದ 24 ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು 4 ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧಿಸಲಿದ್ದು, ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಉಭಯ ಪಕ್ಷ ಗಳು ಹೋರಾಟ ಮಾಡಲಿವೆ.
ಮೈಸೂರು ಕೊಡಗು ಲೋಕಸಭಾ ಕ್ಷೇತ್ರ ಬಿಟ್ಟು ಕೊಡುವಂತೆ ಜೆಡಿಎಸ್ ಬೇಡಿಕೆ ಮುಂದಿಟ್ಟಿದೆ.ಆದರೆ ಮೈಸೂರು ಕೊಡಗು ಕ್ಷೇತ್ರ ಬಿಟ್ಟುಕೊಡಲು ಬಿಜೆಪಿ ಮುಖಂಡ ಯಡಿಯೂರಪ್ಪ ಸಿದ್ದರಿಲ್ಲ.
ಈ ಕ್ಷೇತ್ರವನ್ನು ಬಿಜೆಪಿ ಉಳಿಸಿಕೊಳ್ಳಲೇಬೇಕೆಂದು ಹಲವು ಬಿಜೆಪಿ ನಾಯಕರು ಪಟ್ಟು ಹಿಡಿದಿದ್ದಾರೆ.
ಅಂತೆಯೆ , ಮಂಡ್ಯ ಕ್ಷೇತ್ರದ ಬಗ್ಗೆ ಕೂಡ ಮೈತ್ರಿ ಪಕ್ಷಗಳಲ್ಲಿ ಇನ್ನೂ ಚರ್ಚೆ ಮುಂದುವರೆದಿದೆ.
ಜೆಡಿಎಸ್ ಇದೇ ಭಾನುವಾರ ಮೈತ್ರಿ ಬಗ್ಗೆ ಅಧಿಕೃತ ಘೋಷಣೆ ಹೊರಡಿಸುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಜೆಡಿಎಸ್ ಜೊತೆಗಿನ ಮೈತ್ರಿಯನ್ನು ಸಂಸದ ಪ್ರತಾಪ್ ಸಿಂಹ ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಸ್ವಾಗತಿಸಿದ್ದಾರೆ.
ಈ ಮೈತ್ರಿ ಬಗ್ಗೆ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರು ವ್ಯಂಗ್ಯ ವಾಡಿದ್ದಾರೆ.
ಲೋಕಸಭಾ ಚುನಾವಣೆ ಸನಿಹ ಆಗುತ್ತಿರುವಂತೆ ರಾಜ್ಯದಲ್ಲೂ ರಾಜಕೀಯ ರೋಚಕತೆ ಪಡೆದುಕೊಳ್ಳುತ್ತಿದೆ.