Crime

ಕಾಳಜಿಯಿಂದ ಕಾರ್ಯನಿರ್ವಹಿಸಲು ಪಿಡಿಓಗಳಿಗೆ ಸೂಚನೆ

ಬೀದರ್,ಅ.1:-:- ಹೆಚ್ಚಿನ ಮಳೆಯಿಂದಾಗಿ ಕೆರೆ ಮತ್ತು ಬಾವಿಗಳು ತುಂಬಿಕೊಂಡಿವೆ. ರಸ್ತೆಗಳು ಹಾಳಾಗಿದ್ದು, ಚರಂಡಿಗಳು ಅಲ್ಲಲ್ಲಿ ತುಂಬಿಕೊಂಡಿವೆ. ಪಿಡಿಓಗಳು ಗಮನ ಕೊಡುತ್ತಿಲ್ಲವೆಂದು ದೂರು ಪೆಟ್ಟಿಗೆಗೆ ಮನವಿಗಳು ಬರುತ್ತಿದ್ದು, ಕೂಡಲೇ ಕಾರ್ಯಪ್ರವೃತ್ತರಾಗುವಂತೆ ಪಶು ಸಂಗೋಪನೆ, ವಕ್ಫ್, ಹಜ್ ಹಾಗೂ ಬೀದರ್-ಯಾದಗಿರಿ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್ ಅವರು ಎಲ್ಲಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಚರಂಡಿಗಳನ್ನು ಶುಚಿಗೊಳಿಸದೇ ಇದ್ದಲ್ಲಿ ಸೊಳ್ಳೆಗಳ ಕಾಟ ಹೆಚ್ಚಾಗುವುದಲ್ಲದೇ ಮಲೇರಿಯಾ, ಡೇಂಗಿಯಂತಹ ನಾನಾ ಸಾಂಕ್ರಾಮಿಕ ರೋಗಗಳು ಹರಡುತ್ತವೆ. ಹಾಗಾಗಿ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಸರಿಯಾಗಿ ಕರ್ತವ್ಯ ನಿರ್ವಹಿಸದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ಕರ್ತವ್ಯ ನಿರ್ಲಕ್ಷ್ಯದ ಆರೋಪದ ಮೇಲೆ ಅಮಾನತ್ತು ಮಾಡಲು ಕ್ರಮ ವಹಿಸಬೇಕು ಎಂದು ಸಚಿವರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕುಡಿಯುವ ನೀರಿನ ಬಾವಿಗಳಿಗೆ ಬ್ಲೀಚಿಂಗ್ ಪೌಡರ್ ಹಾಕಬೇಕು. ಚರಂಡಿಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸಬೇಕು. ಯಾವುದೇ ಗ್ರಾಮಗಳಲ್ಲಿ ಕೊಳಚೆ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ಸಾರ್ವಜನಿಕರು ಓಡಾಡುವ ರಸ್ತೆಗಳಲ್ಲಿ ಕೆಸರು ತುಂಬಿಕೊಂಡಿದ್ದರೆ ಕೂಡಲೇ ಸರಿಪಡಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.
ಜಿಲ್ಲೆಯಲ್ಲಿ ಸುಮಾರು 10-12 ಪಿಡಿಓಗಳ ವಿರುದ್ಧ ಕರ್ತವ್ಯ ನಿರ್ಲಕ್ಷ್ಯದ ದೂರುಗಳಿವೆ. ಮುಂದಿನ ದಿನಗಳಲ್ಲಿ ದೂರುಗಳು ಪುನರಾವರ್ತನೆಯಾದಲ್ಲಿ ಅಂಥವರ ವಿರುದ್ಧ ಯಾವುದೇ ಮುಲಾಜಿಲ್ಲದೇ ಅಮಾನತ್ತು ಮಾಡಲು ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಧಿಕಾರಿಗಳು ಜನಹಿತದ ದೃಷ್ಟಿಕೋನದಿಂದ ಸೇವೆ ಸಲ್ಲಿಸಬೇಕು. ಗ್ರಾಮಗಳಿಗೆ ಪಿಡಿಓಗಳು ಭೇಟಿ ಕೊಡದೇ, ಮೂಲಭೂತ ಸೌಕರ್ಯ ಒದಗಿಸಲು ವಿಫಲರಾದಲ್ಲಿ ತಮಗೆ ದೂರು ನೀಡುವಂತೆ ಸಚಿವರು ಸಾರ್ವಜನಿಕರಲ್ಲಿ ಕೋರಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button