ಪಾರದರ್ಶಕವಾಗಿ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ನಡೆಸಲು ಕಟ್ಟುನಿಟ್ಟಿನ ಕ್ರಮ ; ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ

ಕಾರವಾರ : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗಾಗಿ ನಡೆಯುವ ಪರೀಕ್ಷೆಯಲ್ಲಿ, ಜಿಲ್ಲೆಯ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಶಿಸ್ತು ಮತ್ತು ಅವ್ಯವಹಾರಗಳು ನಡೆಯಂತೆ ಅತ್ಯಂತ ಪಾರದರ್ಶಕವಾಗಿ ಪರೀಕ್ಷೆಗಳು ನಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ‌ ಸೂಚನೆ ನೀಡಿದರು.

ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗಾಗಿ ಅಕ್ಟೋಬರ್ 26 ರಂದು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ನಡೆಯಲಿದ್ದು, ಅಕ್ಟೋಬರ್ 27 ರಂದು ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಯು ಕಾರವಾರದ 5 , ಹೊನ್ನಾವರ 2, ಕುಮಟಾ 2,ಶಿರಸಿ 4 ಹಾಗೂ ಹಳಿಯಾಳದ 2 ಸೇರಿದಂತೆ ಜಿಲ್ಲೆಯ 15 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಒಟ್ಟು 4,985 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.

ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸುಗಮ ಮತ್ತು ಪಾರದರ್ಶಕ ರೀತಿಯಲ್ಲಿ ಪರೀಕ್ಷೆ ನಡೆಯಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಪರೀಕ್ಷಾ ಸಂದರ್ಭದಲ್ಲಿ ಯಾವುದೇ ಲೋಪಗಳಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನೇ ನೇರ ಹೊಣೆ ಮಾಡಲಾಗುವುದು ಎಂದರು.

ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆಗಳ ಸಾಗಾಣಿಕೆ ವಾಹನಗಳಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸುವಂತೆ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.


ಅಭ್ಯರ್ಥಿಗಳ ಆರೋಗ್ಯದಲ್ಲಿ ತೊಂದರೆಯಾದಲ್ಲಿ ತುರ್ತು ಚಿಕಿತ್ಸೆ ನೀಡಲು ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ವೈದ್ಯಕೀಯ ಸಿಬ್ಬಂದಿಯನ್ನು ಹಾಗೂ ಅಂಬುಲೆನ್ಸ ಗಳನ್ನು ನಿಯೋಜಿಸಬೇಕು. ಪರೀಕ್ಷಾ ದಿನದಂದು ವಿದ್ಯುತ್ ವ್ಯತ್ಯಯವಾಗಬಾರದು. ಮತ್ತು ಪರೀಕ್ಷಾ ದಿನದಂದು ಬಸ್‌ಗಳ ಸಂಚಾರವನ್ನು ಸಮರ್ಪಕವಾಗಿರುವಂತೆ ಎಚ್ಚರವಹಿಸಿ ಎಂದರು‌.

ವಿಕಲಚೇತನ ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಎಂದರು.


ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಪರೀಕ್ಷೆಗಾಗಿ ಅಭ್ಯರ್ಥಿಗಳಿಗೆ ಈಗಾಗಲೇ ಪ್ರವೇಶ ಪತ್ರದಲ್ಲಿ ನೀಡಿರುವ ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಿರುವ ಕುರಿತಂತೆ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪರಿಶೀಲನೆ ನಡೆಸುವಂತೆ ಸೂಚನೆ ನೀಡಿದರು.
ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲಾ ಅಧಿಕಾರಿಗಳು ಅತ್ಯಂತ ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಿ, ಯಾವುದೇ ಲೋಪಗಳಾಗದಂತೆ ನೋಡಿಕೊಂಡು ಪರೀಕ್ಷಾ ಪಾವಿತ್ರ್ಯತೆಯನ್ನು ಕಾಪಾಡಬೇಕು ಎಂದ ಜಿಲ್ಲಾಧಿಕಾರಿಗಳು ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ತಿಳಿಸಿದರು.

Latest Indian news

Popular Stories