ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಯತ್ನ: ಆರ್. ವೆಂಕಟೇಶ್ ಕುಮಾರ್
ರಾಯಚೂರು,ಸೆ.29:- ಐತಿಹಾಸಿಕವಾಗಿ ಮಹತ್ವದ ಸ್ಥಾನ ಪಡೆದಿರುವ ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ದಿ ಪಡಿಸಿ, ಪ್ರವಾಸಿಗರನ್ನು ಸೆಳೆಯುವ ಯತ್ನ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್ ಅವರು ತಿಳಿಸಿದರು.
ವಿಶ್ವ ಪ್ರವಾಸೋಧ್ಯಮ ದಿನಾಚರಣೆ ಹಿನ್ನಲೆಯಲ್ಲಿ ಸೆ.29ರ ಮಂಗಳವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಪ್ರವಾಸೋಧ್ಯಮ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸೈಕಲ್ ಜಾಥಾ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಹಸಿರು ನಿಶಾನೆ ತೋರಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿರುವ ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಪಡಿಸಿ ಪ್ರವಾಸಿಗರನ್ನು ಸೆಳೆಯುವ ಯತ್ನ ಮಾಡಲಾಗುವುದು, ರಾಯಚೂರು ಕೋಟೆ ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆ ಮಾಡಲಾಗುತ್ತದೆ ಎಂದರು.
ಪ್ರವಾಸೋಧ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಸತೀಶ ಅವರು ಪ್ರಾಸ್ತಾವಿಕ ಮಾತನಾಡಿ, ನಗರದಲ್ಲಿರುವ ಕೋಟೆ, ಮಾನವಿ ಕಲ್ಲೂರು, ಮುದಗಲ್, ಮಸ್ಕಿ, ಮಲಿಯಾಬಾದ್ ಸೇರಿ 10 ಪ್ರಮುಖ ಪ್ರವಾಸೋದ್ಯಮ ತಾಣಗಳನ್ನು ಸರ್ಕಾರ ಗುರುತಿಸಿದೆ. ಪ್ರವಾಸೋಧ್ಯಮ ಅಭಿವೃದ್ಧಿಗೆ ಪ್ರತಿವರ್ಷ ಅನುದಾನ ಬಿಡುಗಡೆ ಮಾಡಿ ಯಾತ್ರಿ ನಿವಾಸ ಅಭಿವೃದ್ದಿ ಪಡಿಸಲಾಗುತ್ತಿದೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಅಪರ ಜಿಲ್ಲಾಧಿಕಾರಿ ದುರಗೇಶ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮಕೃಷ್ಣ, ಡಿಯುಡಿಸಿ ಪಿಡಿ ಮಹೇಂದ್ರಕುಮಾರ್, ನಗರಸಭೆ ಪೌರಾಯುಕ್ತ ದೊಡ್ಡಮನಿ, ಡಾ.ವಿಜಯ ಶಂಕರ, ಮುಖಂಡರಾದ ತ್ರಿವಿಕ್ರಮ ಜೋಷಿ, ಶ್ರೀನಿವಾಸ ರಾಯಚೂರಕರ್, ರಾಜೇಂದ್ರ ಜಲ್ದಾರ್, ರಾಜೇಂದ್ರ ಶಿವಾಳೆ ಹಾಗೂ ರೆಡ್ ಕ್ರಾಸ್ ಸಂಸ್ಥೆ, ಗ್ರೀನ್ ರಾಯಚೂರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.




