ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಸೈಕಲ್ ಜಾಥಾಕ್ಕೆ ಚಾಲನೆ
ರಾಯಚೂರು,ಸೆ.29:- ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಸೈಕಲ್ ಜಾಥಾಕ್ಕೆ ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಅವರು ಸೆ.29ರ ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಪ್ರಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಪ್ರವಾಸೋದ್ಯಮ ಹಾಗೂ ಗ್ರಾಮೀಣ ಅಭಿವೃದ್ಧಿ ಮತ್ತು ಸ್ವಚ್ಚತಾ ಪಕ್ವಾಡ-2020 ಘೋಷ ವಾಖ್ಯದಡಿ ಸೈಕಲ್ ಜಾಥಾಕ್ಕೆ ಚಾಲನೆ ನೀಡಿದರು.
ಸೈಕಲ್ ಜಾಥಾವು ನಗರದ ಜಿಲ್ಲಾಧಿಕಾರಿ ಕಚೇರಿಯಿಂದ ಪ್ರಾರಂಭವಾಗಿ ಶ್ರೀ ಬಸವೇಶ್ವರ ವೃತ್ತ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಮೂಲಕ ಕೇಂದ್ರ ಬಸ್ ನಿಲ್ದಾಣದ ಬಳಿಯಿರುವ ಕೋಟೆಗೆ ತಲುಪಿತು. ಕೋಟೆಯಲ್ಲಿ ಸ್ವಚ್ಚತಾ ಅಭಿಯಾನ ಮಾಡಲಾಯಿತು.
ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಸಂಚಾಲಕ ದಂಡಪ್ಪ ಬಿರಾದಾರ್ ಅವರು ಪರಿಸರ ಪ್ರತಿಜ್ಞೆ ವಿಧಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜಿ. ಲಕ್ಷ್ಮಿಕಾಂತರೆಡ್ಡಿ, ಅಪರ ಜಿಲ್ಲಾಧಿಕಾರಿ ದುರುಗೇಶ, ಡಿಯುಡಿಸಿ ಪಿಡಿ ಮಹೇಂದ್ರ ಕುಮಾರ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಸತೀಶ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ, ನಗರಸಭೆ ಪೌರಾಯುಕ್ತ ದೇವಾನಂದ್ ದೊಡ್ಡಮನೆ, ಡಾ. ವಿಜಯಶಂಕರ್, ಮುಖಂಡರಾದ ತ್ರಿವಿಕ್ರಮ ಜೋಷಿ, ರೆಡ್ ಕ್ರಾಸ್ ಸಂಸ್ಥೆಯ ಶ್ರೀನಿವಾಸ ರಾಯಚೂರುಕರ್, ಗ್ರೀನ್ ರಾಯಚೂರು ರಾಜೇಂದ್ರ ಕುಮಾರ್ ಶಿವಾಳೆ, ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿಗಳು, ಪ್ರವಾಸೋದ್ಯಮ ಇಲಾಖೆ ಸಿಬ್ಬಂದಿಗಳು ಇದ್ದರು.




