
ಟ್ರ್ಯಾಕ್ಟರ್ ರ‍್ಯಾಲಿ, ಅರ್ಜಿ ಹಿಂಪಡೆದ ಕೇಂದ್ರ
ನವದೆಹಲಿ: ಗಣರಾಜ್ಯೋತ್ಸವದ ದಿನ ರೈತ ಸಂಘಟನೆಗಳು ನಡೆಸಲಿರುವ ಟ್ರ್ಯಾಕ್ಟರ್ ರ‍್ಯಾಲಿಗೆ ತಡೆಯಾಜ್ಞೆ ನೀಡುವಂತೆ ಸುಪ್ರೀಂ ಕೋರ್ಟ್‍ಗೆ ಸಲ್ಲಿಸಿದ್ದ ಅರ್ಜಿಯನ್ನು ಕೇಂದ್ರ ಸರಕಾರ ವಾಪಸ್ ಪಡೆದಿದೆ.
ರೈತ ಸಂಘಟನೆಗಳು ನಡೆಸಲು ಉದ್ದೇಶಿಸಿರುವ ಟ್ರ್ಯಾಕ್ಟರ್ ರ‍್ಯಾಲಿ ವಿಚಾರವನ್ನು ಪೊಲೀಸರು ಇತ್ಯರ್ಥಪಡಿಸಬೇಕು ಎಂದು ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ ಮತ್ತು ನ್ಯಾಯಮೂರ್ತಿಗಳಾದ ಎಸ್.ಬೋಪಣ್ಣ ಮತ್ತು ವಿ.ರಾಮಸುಬ್ರಮಣಿಯನ್ ಅವರನ್ನೊಳಗೊಂಡ ಪೀಠ ಹೇಳಿದ ನಂತರ ಈ ಬೆಳವಣಿಗೆ ನಡೆದಿದೆ.
ವಿಡಿಯೊ ಕಾನ್ಫರೆನ್ಸ್ ಮೂಲಕ ನಡೆದ ವಿಚಾರಣೆಯಲ್ಲಿ ನ್ಯಾಯಪೀಠ, `ಈ ರ‍್ಯಾಲಿ ವಿಷಯಕ್ಕೆ ಸಂಬಂಧಿಸಿದಂತೆ ನಾವು ಯಾವುದೇ ನಿರ್ದೇಶನ ನೀಡುವುದಿಲ್ಲ. ಇದು ಪೊಲೀಸ್ ಇಲಾಖೆಗೆ ಸಂಬಂಧಿಸಿದ ವಿಷಯವಾಗಿದೆ. ನೀವು ಅರ್ಜಿಯನ್ನು ಹಿಂದಕ್ಕೆ ಪಡೆಯಲು ಅವಕಾಶ ನೀಡುತ್ತೇವೆ’ ಎಂದು ತಿಳಿಸಿದೆ.
ಈ ವಿಷಯವನ್ನು ಇತ್ಯರ್ಥಪಡಿಸಲು ನಿಮಗೆ ಅಧಿಕಾರವಿದೆ. ಈ ಸಂಬಂಧ ನ್ಯಾಯಾಲಯ ಯಾವುದೇ ಆದೇಶಗಳನ್ನು ನೀಡುವುದಿಲ್ಲ’ ಎಂದು ನ್ಯಾಯಪೀಠ ಹೇಳಿದೆ. ಈ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ಮುಂದುವರಿದಿದೆ.




